ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಎಎಲ್ ವಿಮಾನ ನಿಲ್ದಾಣ ಕಾಯಂ ಬಳಕೆಗೆ ಅವಕಾಶ ಕಲ್ಪಿಸಿ

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಒತ್ತಾಯ
Last Updated 4 ಮಾರ್ಚ್ 2017, 20:07 IST
ಅಕ್ಷರ ಗಾತ್ರ
ಬೆಂಗಳೂರು: ಎಚ್‌ಎಎಲ್‌ ವಿಮಾನ ನಿಲ್ದಾಣದ ಕಾಯಂ ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಒತ್ತಾಯಿಸಿದರು.
 
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ರಾತ್ರಿ ವಿಮಾನ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ಎಚ್‌ಎಎಲ್ ವಿಮಾನ ನಿಲ್ದಾಣ ಬಳಕೆಗೆ ಅವಕಾಶ ಕಲ್ಪಿಸಲು ಕೇಂದ್ರ ವಿಮಾನಯಾನ ಸಚಿವರು ಗಮನ ಹರಿಸಬೇಕು ಎಂದು ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.
 
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇನ್ನೊಂದು ರನ್‌ ವೇ ಏಕೆ?  ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಸೇವೆ ಆರಂಭಿಸಲಿ. ಎಲೆಕ್ಟ್ರಾನಿಕ್ ಸಿಟಿ ಬಳಿ ವಿಮಾನ ನಿಲ್ದಾಣಕ್ಕೆ ಇನ್ಫೊಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಆಗ್ರಹಿಸಿದ್ದಾರೆ. ಈ ಬಗ್ಗೆ ಕೇಂದ್ರ ವಿಮಾನಯಾನ ಖಾತೆ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.
 
ಮಂಗಳೂರಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ಇದೆಯೋ, ಆರ್ಎಸ್ಎಸ್‌ ಆಡಳಿತ ಇದೆಯೋ ಎಂಬುದು ಗೊತ್ತಾಗುತ್ತಿಲ್ಲ. ಬೇರೆ ರಾಜ್ಯದ ಮುಖ್ಯಮಂತ್ರಿ ಬಂದಾಗ ಈ ರೀತಿಯ ವರ್ತನೆ ಸರಿಯಲ್ಲ. ಅಲ್ಲಿನ  ಆಡಳಿತ ಚುಕ್ಕಾಣಿ ಮುಖ್ಯಮಂತ್ರಿ ಅವರಿಂದ ಕೈ ತಪ್ಪಿ ಹೋಗಿದೆ. ಪೊಲೀಸರು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
 
‘ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಹೋಗುವ ತೀರ್ಮಾನ ಆಗಿದ್ದರೆ ಅವರು ಹೋಗಲಿ. ನಂತರ ನಾನು ಪ್ರತಿಕ್ರಿಯಿಸುತ್ತೇನೆ. ಅವರೊಂದಿಗೆ ಮಾತನಾಡಲು ಇಷ್ಟ ಇಲ್ಲ. ಶಾಸಕ ಗೋಪಾಲಯ್ಯ ನಡೆಗೂ ಉಳಿದವರಿಗೂ ವ್ಯತ್ಯಾಸ ಇದೆ’ ಎಂದರು.
 
ಮುಖ್ಯಮಂತ್ರಿ ಮನೆ ಮುಂದೆ ಧರಣಿ
ಬೆಂಗಳೂರು:
ಹಾಸನದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿ ನಿವಾಸದ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಜೆಡಿಎಸ್ ವರಿಷ್ಠ  ಎಚ್‌.ಡಿ.ದೇವೇಗೌಡ ಹೇಳಿದರು.

ಯಗಚಿ, ಹೇಮಾವತಿ ಜಲಾಶಯದ  ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ಕೊಡಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ ಎಂದರು.

ಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಾಗ ಜಿಲ್ಲಾಡಳಿತ ಸ್ಪಂದಿಸಿಲ್ಲ. ಜಿಲ್ಲಾಧಿಕಾರಿ   ಮನವಿಯನ್ನೂ ಸ್ವೀಕರಿಸಲಿಲ್ಲ. ಜಲಾಶಯಗಳ ಹಿನ್ನೀರಿನ ಪ್ರದೇಶವನ್ನು ಬರಪೀಡಿತ ಪಟ್ಟಿಗೆ ಸೇರಿಸಿಲ್ಲ. ಇದು ಜಿಲ್ಲಾಡಳಿತದ ವೈಫಲ್ಯ ಎಂದು ಆರೋಪಿಸಿದರು.

‘ಮುಖ್ಯಮಂತ್ರಿ ಮಾತಿಗೂ ಅಲ್ಲಿನ ಜಿಲ್ಲಾಧಿಕಾರಿ  ಬೆಲೆ ಕೊಡುತ್ತಿಲ್ಲ. ಮಾಜಿ ಪ್ರಧಾನಿ ಆದ ನನಗೆ ಒಬ್ಬ ಗ್ರಾಮ ಲೆಕ್ಕಿಗನನ್ನು ವರ್ಗಾವಣೆ ಮಾಡುವ ಶಕ್ತಿ ಇಲ್ಲ. ಜಿಲ್ಲಾಧಿಕಾರಿ ವರ್ಗಾವಣೆ ಮಾಡಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು.

ಜಲಾಶಯಗಳಿಂದ ನೀರು ಹರಿಸುವ ಸಂದರ್ಭದಲ್ಲೂ ಮಲತಾಯಿ ಧೋರಣೆ ಅನುಸರಿಸಲಾಗಿದೆ. ಕಾಂಗ್ರೆಸ್ ಶಾಸಕರಿರುವ ಅರಕಲಗೂಡು ಕ್ಷೇತ್ರಕ್ಕೆ ಹೆಚ್ಚು ನೀರು ಹರಿಸಲಾಗಿದೆ ಎಂದೂ ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT