ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪರೀಕ್ಷೆ: ಅಕ್ರಮ ನಡೆಯದಂತೆ ಕ್ರಮ

ಪರೀಕ್ಷಾ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್
Last Updated 8 ಮಾರ್ಚ್ 2017, 10:41 IST
ಅಕ್ಷರ ಗಾತ್ರ

ದಾವಣಗೆರೆ: ಮಾರ್ಚ್ 9ರಿಂದ 27ರವರೆಗೆ ಜಿಲ್ಲೆಯ 35 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷಾ ಅಕ್ರಮಗಳು ನಡೆಯದಂತೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಯು ಪರೀಕ್ಷಾ ಸಿದ್ಧತೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಪರೀಕ್ಷಾ ವಿಧಾನಗಳಲ್ಲಿ ಕೆಲವು ಬದಲಾವಣೆಗಳಾಗಿವೆ. ಹಿಂದೆ, ಬೆಳಿಗ್ಗೆ 9 ರಿಂದ ಪರೀಕ್ಷೆ ಆರಂಭವಾಗುತ್ತಿತ್ತು. ಈ ಬಾರಿ ಬೆಳಿಗ್ಗೆ 10.15ರಿಂದ ಪರೀಕ್ಷೆ ಆರಂಭವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಲವು ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಒಳಗೆ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ತೆಗೆದು ಕೊಂಡು ಬರುವಂತಿಲ್ಲ. ಕಡ್ಡಾಯವಾಗಿ ಗುರುತಿನ ಚೀಟಿ ಹಾಗೂ ಪ್ರವೇಶಪತ್ರ ತರಬೇಕು ಎಂದು ತಿಳಿಸಿದರು.

ಈ ಬಾರಿ ಕಲಾ ವಿಭಾಗದಲ್ಲಿ 8,058, ವಾಣಿಜ್ಯ ವಿಭಾಗದಲ್ಲಿ 5,762 ಹಾಗೂ ವಿಜ್ಞಾನ ವಿಭಾಗದಲ್ಲಿ 9,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ. ಈ ಪೈಕಿ

18, 810 ಹೊಸ ವಿದ್ಯಾರ್ಥಿಗಳು, 3,943 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 448 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಜಿಲ್ಲೆಯ ಆರು ತಾಲ್ಲೂಕುಗಳ 12 ಸರ್ಕಾರಿ, 15 ಅನುದಾನಿತ, 8 ಅನುದಾನ ರಹಿತ ಸೇರಿದಂತೆ 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬಿಇಒ, ತಹಶೀಲ್ದಾರ್ ಹಾಗೂ ಪ್ರಾಂಶುಪಾಲರು ಮಾರ್ಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಜವಾಬ್ದಾರಿ ಯನ್ನು ಸಮರ್ಥವಾಗಿ ನಿಭಾಯಿಸಬೇಕು. ಮಾರ್ಗಾಧಿಕಾರಿಗಳ ಜತೆ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗುವುದು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸ ಲಾಗಿದೆ. ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿಜಯಾನಂದ ಮಾತನಾಡಿ, ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ತರಬೇಕು. ಎಲ್ಲಾ ಕೊಠಡಿ ಮೇಲ್ವಿಚಾರಕರು ಕಡ್ಡಾಯವಾಗಿ ಗುರುತಿನ ಚೀಟಿ ಹಾಕಿಕೊಳ್ಳಬೇಕು ಎಂದು ತಿಳಿಸಿದ ಅವರು, ಪರೀಕ್ಷಾ ಮೇಲ್ವಿಚಾರಕರು ಅನುಸರಿಸಬೇಕಾದ ಮಾರ್ಗಸೂಚಿಗಳ ವಿವರಗಳನ್ನು ಅಧಿಕಾರಿಗಳಿಗೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಎಸ್.ಗುಳೇದ, ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಉಪ ವಿಭಾಗಾಧಿಕಾರಿ ಕುಮಾರಸ್ವಾಮಿ, ತಹಶೀಲ್ದಾರ್ ಸಂತೋಷ್‌ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಉಪಸ್ಥಿತರಿದ್ದರು.

ಸಿಸಿಟಿವಿ ಕ್ಯಾಮೆರಾ ಕಡ್ಡಾಯವಲ್ಲ!
ಸಿಸಿಟಿವಿ ಕ್ಯಾಮೆರಾ ಇರುವ ಶಾಲಾ-–ಕಾಲೇಜುಗಳನ್ನು ಪರೀಕ್ಷೆಗೆ ಬಳಸಿಕೊಳ್ಳಬಹುದು. ಈ ನಿಯಮ ಕಡ್ಡಾಯ ಅಲ್ಲ ಎಂದು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ತಿಳಿಸಿದರು.

ದಾವಣಗೆರೆಯ ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು, ಶಿರಮಗೊಂಡನಹಳ್ಳಿಯ ವಿಶ್ವಚೇತನ, ಸಿದ್ದಲಿಂಗೇಶ್ವರ ನಗರದ ಸಿದ್ದಗಂಗಾ, ಚನ್ನಗಿರಿಯ ಮಣ್ಣಮ್ಮ ಕಾಲೇಜು, ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯ ಎಸ್‌ಎಂಸಿಕೆ ಕಾಲೇಜುಗಳನ್ನು ಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT