ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಡ್ತಿ ಮೀಸಲಾತಿ: ಮೇಲ್ಮನವಿ ಸಲ್ಲಿಸಿ’

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ರ್‍‍ಯಾಲಿ
Last Updated 14 ಮಾರ್ಚ್ 2017, 5:57 IST
ಅಕ್ಷರ ಗಾತ್ರ

ರಾಯಚೂರು: ಬಡ್ತಿ ಮೀಸಲಾತಿ ರದ್ದುಪಡಿಸಿರುವ ಸುಪ್ರೀಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಎನ್‌.ಮೂರ್ತಿ ಬಣ) ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನಾ ರ್‍ಯಾಲಿ ನಡೆಯಿತು.

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಡಾ.ಅಂಬೇಡ್ಕರ್‌ ನೀಡಿರುವ ಸಂವಿಧಾನ ಬದ್ಧ ಮೀಸಲಾತಿಯು ದಲಿತ ವರ್ಗದ ಹಕ್ಕಾಗಿದೆ. ಆದರೆ, ಬಡ್ತಿ ಮೀಸಲಾತಿ ರದ್ದುಪಡಿಸಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ದಲಿತ ನೌಕರರಿಗೆ ಕರಾಳ ಸಂಗತಿಯಾಗಿದೆ. ಸಾಮಾಜಿಕವಾಗಿ ತುಳಿತಕ್ಕೊಳಗಾದ ಸಮುದಾಯಗಳಿಗೆ ಮೀಸಲಾತಿ ರದ್ದುಪಡಿಸಿರುವುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಪಾಲಿಗೆ ಮರಣ ಶಾಸನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಪ್ರಸಕ್ತ ಅಧಿವೇಶನದಲ್ಲಿ ವಿಧೇಯಕ ರೂಪಿಸಿ ನೂತನ ಕಾನೂನು ಜಾರಿ ಮಾಡಬೇಕು. ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಮೀಸಲಾತಿ ಕಲ್ಪಿಸಲು ವಿಳಂಬ ಮಾಡದೇ ಮಸೂದೆ ಅಂಗೀಕರಿಸಬೇಕು. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸಲು ಮಸೂದೆ ರೂಪಿಸಬೇಕು ಎಂದು ಒತ್ತಾಯಿಸಿದರು.

ದೇಶದಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹುದ್ದೆಗಳಲ್ಲಿ ಖಾಲಿರುವ ಒಂದು ಲಕ್ಷದಷ್ಟು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಬೇಕು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ನೀಡಬೇಕು ಎಂದು ಮನವಿ ಮಾಡಿದರು.

ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ, ಜಿಲ್ಲಾ ಘಟಕ ಅಧ್ಯಕ್ಷ ಅಶೋಕ ನಂಜಲದಿನ್ನಿ, ರಾಜು ಬೊಮ್ಮನಾಳ, ಹುಲಿಗೆಪ್ಪ ಸೈದಾಪುರ, ಮೌನೇಶ ಗಾಣಧಾಳ, ಬಸವರಾಜ ಕುಣಿ ಕಲ್ಲೂರು, ಹುಸೇನಪ್ಪ, ಹನುಮಂತ, ಎಂ.ಮನೋಹರ, ತಿಮ್ಮಪ್ಪ ಕಲ್ಲೂರು, ಭೀಮಣ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT