ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ರಸಗೊಬ್ಬರ ಪೂರೈಕೆ: ಎಚ್ಚರ ಇರಲಿ

Last Updated 18 ಮಾರ್ಚ್ 2017, 7:32 IST
ಅಕ್ಷರ ಗಾತ್ರ

ಯಾದಗಿರಿ: ‘ನಕಲಿ ರಸಗೊಬ್ಬರ ಪೂರೈಸುವ ಕಂಪೆನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಲೋಕಾಯುಕ್ತ ನ್ಯಾಯಾಧೀಶ ಪಿ.ವಿಶ್ವನಾಥ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ರೈತರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ನಕಲಿ ಗೊಬ್ಬರ ಬಳಕೆಯಿಂದ ಬೆಳೆ ಹಾನಿಯಾಗುತ್ತದೆ. ರೈತರ ಕುಟುಂಬಗಳು ಸಂಕಷ್ಟಕ್ಕೀಡಾಗುತ್ತವೆ. ಇದರಿಂದಾಗಿ ರೈತರ ಆತ್ಮಹತ್ಯೆಯ ಪ್ರಕರಣಗಳು ಸಂಭವಿಸುತ್ತವೆ. ಹಾಗಾಗಿ ನಕಲಿ ರಸಗೊಬ್ಬರ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಂಡಿದ್ದೀರಾ?’ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ‘ಈಗಾಗಲೇ ರಸಗೊಬ್ಬರ ನಿಯಂತ್ರಣ ಕಾಯ್ದೆ ಪ್ರಕಾರ 9 ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಕೆಲ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಿಲ್ಲದಿದ್ದರೂ ಶೇ100ರಷ್ಟು ಹಾಜರಾತಿ ಇದೆ ಎಂದು ತೋರಿಸಲಾಗುತ್ತದೆ. ಇದು ಗಮನಕ್ಕೆ ಬಂದಿದ್ದು, ಹಣ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಪ್ರಕರಣಗಳು ರಾಜ್ಯದಲ್ಲಿವೆ’ ಎಂದು ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕೇಳಿದರು. ಇದಕ್ಕೆ ಉತ್ತರಿಸಿದ ಉಪನಿರ್ದೇಶಕ ಎನ್.ಕೆಂಚೇಗೌಡ,‘ಶಾಲೆಗಳಲ್ಲಿ ಮಕ್ಕಳ ನಕಲಿ ಹಾಜರಾತಿ ತಡೆಗಟ್ಟುವ ನಿಟ್ಟಿನಲ್ಲಿ ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಕುರಿತು ಉಪನಿರ್ದೇಶಕ ಚಂದ್ರಕಾಂತ್ ಜಾಧವ್ ಅವರು ಸಭೆಗೆ ಮಾಹಿತಿ ನೀಡಿ, ‘419 ಅಂಗನವಾಡಿ ಕೇಂದ್ರಗಳಿಗೆ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ‘ಅಂಗನವಾಡಿ ಕೇಂದ್ರಗಳಿಗೆ ತೆರಳಿ ಮಕ್ಕಳ ಹಾಜರಾತಿ ಮತ್ತು ಅವರಿಗೆ ನೀಡುವ ಆಹಾರ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆಯೇ? ಜಿಲ್ಲೆಯಲ್ಲಿ ಎಷ್ಟು ಮಂದಿ ಅಧಿಕಾರಿಗಳಿದ್ದಾರೆ?’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿವರಣೆ ಕೇಳಿದರು. ಇಡೀ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಾನೊಬ್ಬನೇ ಪ್ರಭಾರ ವಹಿಸಿಕೊಂಡು ಕೆಲಸ ಮಾಡುತ್ತಿದ್ದು, 3 ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಹುದ್ದೆಗಳು ಖಾಲಿ ಇವೆ ಎಂದು ವಿವರಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಎಂ.ಎಸ್.ಪಾಟೀಲ, ‘ಹೊರ ರೋಗಿಗಳ ಸಂಖ್ಯೆ ಹೆಚ್ಚಾಗಿದೆ’ ಎಂದು ಮಾಹಿತಿ ನೀಡಿದರು. ಜಿಲ್ಲಾಸ್ಪತ್ರೆಗೆ 70 ದಾದಿಯರು ಬೇಕಾಗಿದ್ದು, ಪ್ರಸಕ್ತ ಕೇವಲ 20 ದಾದಿಯರು ಇದ್ದಾರೆ’ ಎಂದು ತಿಳಿಸಿದರು.

‘ಶುಶ್ರೂಷಕಿಯರು, ತಜ್ಞ ವೈದ್ಯರು ಸೇರಿದಂತೆ ಖಾಲಿ ಇರುವ ಹುದ್ದೆಗಳ ತುಂಬಲು ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಸಂದರ್ಭದಲ್ಲಿ ‘ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಂದಾನವಾಜ್ ಗೇಸುದರಾಜ್ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಬರುವ ಶಾಲಾ ಮಕ್ಕಳು ಎಸ್ಸೆಸ್ಸೆಲ್ಸಿಯಲ್ಲಿ ಶೇ 85ರಷ್ಟು ಉತ್ತೀರ್ಣರಾಗಿದ್ದಾರೆ’ ಎಂದು ತಿಳಿಸಿದರು.

ಪಶು ಸಂಗೋಪನಾ ಇಲಾಖೆಯಡಿ ನೀಡುತ್ತಿರುವ ವಿವಿಧ ಸೌಲಭ್ಯಗಳ ಕುರಿತು ಉಪನಿರ್ದೇಶಕರಿಂದ ಮಾಹಿತಿ ಪಡೆದರು. ಪ್ರಸ್ತುತ ಇಲಾಖೆಯಿಂದ ಜನರಿಗೆ ದೊರೆಯುತ್ತಿರುವ ಸೌಲಭ್ಯಗಳು ಜನರಿಗೆ ಎಷ್ಟರಮಟ್ಟಿಗೆ ತಲುಪುತ್ತಿವೆ ಎಂಬ ಕುರಿತು ವಿವರ ಪಡೆದರು.

ಭೂಮಾಪನ ಇಲಾಖೆಯ ಪ್ರಗತಿ ಕುರಿತು ಅಧಿಕಾರಿಗಳನ್ನು ಕೇಳಲಾಗಿ ಇದುವರೆಗೆ 11,465 ಅರ್ಜಿಗಳು ಬಂದಿದ್ದು, 8 ಸಾವಿರ ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಕಳೆದ ತಿಂಗಳು 1,200 ಅರ್ಜಿಗಳು ಬಂದಿರುವುದಾಗಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

‘ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳಿವೆ. ಆದರೆ, ಜಿಲ್ಲೆಯಲ್ಲಿ ಸಿಬ್ಬಂದಿ ಕೊರೆತೆ ಇರುವುದು ಬೇಸರದ ವಿಚಾರವಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಆಸಕ್ತಿಯಿಂದ ಉತ್ತಮ ಕೆಲಸ ನಿರ್ವಹಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು’ ಎಂದು ಅವರು ಕಿವಿಮಾತು ಹೇಳಿದರು.
ಲೋಕಾಯುಕ್ತ ಎಡಿಜಿಪಿ ಪರಮೇಶ್ವರ ಮೂರ್ತಿ, ಜಿಲ್ಲಾಧಿಕಾರಿ ಖುಷ್ಬೂ ಗೋಯಲ್ ಚೌಧರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಲೋಕಾಯುಕ್ತ ಎಸ್ಪಿ ಕೆ.ಜಗದೀಶ್, ಎಎಸ್ಪಿ ಶಿವಪ್ರಕಾಶ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT