ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ವಿಶ್ವನಾಥ್‌ ಜೆಡಿಎಸ್‌ಗೆ: ಸಂಸದ ಹೇಳಿಕೆ

Last Updated 20 ಮಾರ್ಚ್ 2017, 9:04 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ:  ಕಾಂಗ್ರೆಸ್‌ ಮುಖಂಡ ಎಚ್‌. ವಿಶ್ವನಾಥ್‌ ಸೇರಿದಂತೆ ಇತರ ಪ್ರಮುಖರು ಏಪ್ರಿಲ್‌ ಅಂತ್ಯದ ಒಳಗೆ ಜೆಡಿಎಸ್‌ ಪಕ್ಷಕ್ಕೆ ಸೇರಲಿದ್ದಾರೆ ಎಂದು ಸಂಸದ ಸಿ.ಎಸ್‌. ಪುಟ್ಟರಾಜು ತಿಳಿಸಿದರು.

ಮಾರ್ಚ್‌ 23ರಂದು ಬೆಂಗಳೂರಿನಲ್ಲಿ ನಡೆಯಲಿರುವ ಜೆಡಿಎಸ್‌ ಸಮಾವೇಶದ ಹಿನ್ನೆಲೆಯಲ್ಲಿ ಭಾನುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್‌ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಜೆಡಿಎಸ್‌ ಪರವಾಗಿ ರಾಜಕೀಯ ಧ್ರುವೀಕರಣ ಆರಂಭವಾಗಿದ್ದು, ವಿವಿಧ ಪಕ್ಷಗಳ ಪ್ರಮುಖರು ಪಕ್ಷಕ್ಕೆ ಸೇರುತ್ತಿದ್ದಾರೆ. ಜೆಡಿಎಸ್‌ ಸೇರುವಂತೆ ಎಚ್‌. ವಿಶ್ವನಾಥ್‌ ಅವರನ್ನು ಹಲವು ಬಾರಿ ಆಹ್ವಾನಿಸಿದ್ದೇನೆ ಎಂದರು.

ಅವರಿಗೂ ನಮ್ಮ ಪಕ್ಷದ ಬಗ್ಗೆ ಒಲವು ಇದೆ. ನಮ್ಮಿಬ್ಬರ ನಡುವೆ ಹಲವು ಸುತ್ತಿನ ಚರ್ಚೆಗಳೂ ನಡೆದಿವೆ. ಸಮಯ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ ಎಂದು ಪುಟ್ಟರಾಜು ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಚೇರಿ ಜೆಪಿ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ನಡೆಯಲಿರುವ ಪಕ್ಷದ ಸಮಾವೇಶಕ್ಕೆ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಮೂರು ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಶ್ರೀರಂಗಪಟ್ಟಣ ಮತ್ತು ನಾಗಮಂಗಲ ಕ್ಷೇತ್ರಗಳು ಸೇರಿದಂತೆ 25 ಸಾವಿರ ಕಾರ್ಯಕರ್ತರು ಜಿಲ್ಲೆಯಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಶಾಸಕರು, ಮಾಜಿ ಶಾಸಕರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗುಂಡ್ಲುಪೇಟೆ ಮತ್ತು ನಂಜನಗೂಡು ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ತಟಸ್ಥ ನೀತಿ ತಳೆಯಲಿದ್ದಾರೆ ಎಂದು ಹೇಳಿದರು.

ವಿಧಾನಪರಿಷತ್‌ ಸಭಾಪತಿ ಮರಿತಿಬ್ಬೇಗೌಡ, ಶಾಸಕ ನಾರಾಯಣಗೌಡ, ವಿಧಾನಪರಿಷತ್‌ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎನ್‌. ಅಪ್ಪಾಜಿಗೌಡ, ಮಾಜಿ ಶಾಸಕರಾದ ಪ್ರಭಾವತಿ ಜಯರಾಂ, ಡಾ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪ್ರೇಮಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT