ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮಕ್ಕೆ ಕಡಿವಾಣ ಹಾಕದವರ ವಿರುದ್ಧ ಕ್ರಮ

ಮರಳು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಎಚ್ಚರಿಕೆ
Last Updated 22 ಮಾರ್ಚ್ 2017, 5:54 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ನಿರ್ಲಕ್ಷ್ಯ ತೋರಿದರೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ’ ಎಂದು ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಮರಳು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಅಕ್ರಮ ಪ್ರಕರಣಗಳ ಬಗ್ಗೆ ದೂರುಗಳು ಕೇಳಿಬಂದ ತಕ್ಷಣವೇ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗ ಬೇಕು. ಯಾವುದೇ ಒತ್ತಡಗಳಿಗೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಈವರೆಗೆ ತಮ್ಮ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕು’ ಎಂದು ಸೂಚನೆ ನೀಡಿದರು. ‘ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ ಅವರು ಅಕ್ರಮ ದಂಧೆಗಳ ಮೇಲೆ ನಿರಂತರ ನೀಗಾ ಇಡಬೇಕು’ ಎಂದು ಹೇಳಿದರು.

‘ಇಂತಹ ಅಕ್ರಮ ದಂಧೆಗಳನ್ನು ತಡೆಯುವುದು ಯಾವುದೇ ಒಂದು ಇಲಾಖೆಯ ಕೆಲಸವಲ್ಲ. ಅನೇಕ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಕಂದಾಯ, ಪೊಲೀಸ್, ಲೋಕೋಪಯೋಗಿ, ಅರಣ್ಯ, ಆರ್‌ಟಿಒ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಡಿವೈಎಸ್‌ಪಿ ಎಂ.ಎಲ್. ಪುರು ಷೋತ್ತಮ್ ಮಾತನಾಡಿ, ‘ಸಮನ್ವಯ ಸಮಿತಿಯಲ್ಲಿಯೇ ಸಮನ್ವತೆಯ ಕೊರತೆ ಇದೆ. ಪ್ರತಿಯೊಂದು ಅಕ್ರಮಗಳಿಗೂ ಪೊಲೀಸ್ ಇಲಾಖೆಯನ್ನೇ ಗುರಿಯಾಗಿಸಿಕೊಂಡು ಆರೋಪ ಮಾಡುತ್ತಿರುವುದು ನೋವುಂಟು ಮಾಡುತ್ತಿದೆ. ಎಲ್ಲಾ ಬಗೆಯ ಅಕ್ರಮಗಳನ್ನು ತಡೆಯಲು ನಾವು ಸದಾ ಸಿದ್ಧರಿದ್ದೇವೆ. ಆದರೆ ಸಂಬಂಧಪಟ್ಟ ಇಲಾಖೆಯವರು ನಮಗೆ ಸಹಕಾರ ನೀಡಬೇಕು’ ಎಂದರು.

ಸರ್ಕಲ್ ಇನ್‌ಸ್ಪೆಕ್ಟರ್‌ ಕೆ.ಪಿ.ಸತ್ಯನಾರಾಯಣ್ ಮಾತನಾಡಿ, ‘ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ 140 ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು ದಾಖಲಾಗಿದ್ದು, ₹ 1.54 ಲಕ್ಷ ದಂಡ ವಸೂಲಿ ಮಾಡಲಾಗಿದೆ’ ಎಂದು ತಿಳಿಸಿದರು. ಸಭೆಯಲ್ಲಿ ಕಂದಾಯ, ಪೊಲೀಸ್, ಲೋಕೋಪಯೋಗಿ, ಅರಣ್ಯ, ಆರ್‌ಟಿಒ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT