ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ ವಿರುದ್ಧ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ

Last Updated 11 ಏಪ್ರಿಲ್ 2017, 10:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:  ನಗರಸಭೆ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿ, ಬಡವರ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರಸಭೆ ಎದುರಿನ ಭುವನೇಶ್ವರಿ ವೃತ್ತದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿ, ನಗರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್, ‘ನಗರಸಭೆಯಲ್ಲಿ ಅವ್ಯಾಹತವಾಗಿ ಅವ್ಯವಹಾರ ನಡೆಯುತ್ತಿವೆ. ಅಧಿಕಾರಿಗಳು ನಾಗರಿಕರಿಗೆ ಖಾತೆ ಮಾಡಿ ಕೊಡುತ್ತಿಲ್ಲ. ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಪ್ರತಿಯೊಂದು ಕೆಲಸ ಮಾಡಿಕೊಡಲು ಹಣಕ್ಕಾಗಿ ಜನರನ್ನು ಪೀಡಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕಟ್ಟಡ ನಿರ್ಮಾಣ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿ ವರ್ಷವಾದರೂ ಹಿಂಬರಹ ನೀಡುತ್ತಿಲ್ಲ. ಅನೇಕ ಹಳ್ಳಿಗಳು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡು ಹಲವು ವರ್ಷಗಳೇ ಕಳೆದಿವೆ. ಅಂತಹ ಗ್ರಾಮಗಳ ನಾಗರಿಕರಿಗೆ ಈವರೆಗೆ ಖಾತೆ, ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಿಲ್ಲ. ಮೂಲ ಸೌಕರ್ಯ ಒದಗಿಸುತ್ತಿಲ್ಲ’ ಎಂದು ಹೇಳಿದರು.

‘ನಗರದ ಅನೇಕ ವಾರ್ಡ್‌ಗಳಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಕಳಪೆಯಾಗಿವೆ. ಅಧಿಕಾರಿಗಳು  ಶಾಸಕರ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ’ ಎಂದು ದೂರಿದರು.
‘ನಗರದಲ್ಲಿ ಸರಿಯಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಪಾದಚಾರಿ ಮಾರ್ಗಗಳು ಸುಸ್ಥಿತಿಯಲ್ಲಿ ಇಲ್ಲ. ಬಡಜನರಿಗೆ ಸೂರು ಕಲ್ಪಿಸುವ ಕೆಲಸವಾಗುತ್ತಿಲ್ಲ. ಬಡ ಜನರಿಗೆ ಅಡುಗೆ ಅನಿಲ ಸಂಪರ್ಕ ವಿತರಿಸುತ್ತಿಲ್ಲ. ಇಂತಹ ಅನೇಕ ಸಮಸ್ಯೆಗಳ ಕುರಿತು ಈ ಹಿಂದೆ ಕೂಡ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಪರಿಸ್ಥಿತಿ ಸುಧಾರಣೆಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಉಸ್ತುವಾರಿ ಸಚ್ಚಿದಾನಂದ ಸ್ವಾಮಿ ಮಾತನಾಡಿ, ‘ಚಿಕ್ಕಬಳ್ಳಾಪುರ ನಗರಕ್ಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೋಟಿಗಟ್ಟಲೇ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸರಿಯಾಗಿ ಹಣವೇ ದೊರೆತಿಲ್ಲ. ಆದರೂ ಬಿಜೆಪಿ ಸರ್ಕಾರದ ಯೋಜನೆಗಳನ್ನು ಕಾಂಗ್ರೆಸ್‌ನವರು ತಮ್ಮ ಸಾಧನೆ ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

‘ನಗರಸಭೆಯಲ್ಲಿ ಆಡಳಿತ ಪಕ್ಷ ನಿಷ್ಕ್ರಿಯಗೊಂಡಿದೆ. ಅಧಿಕಾರಿಗಳು ಹಾಗೂ ಆಡಳಿತ ಪಕ್ಷದ ಮುಖಂಡರ ಹುಚ್ಚಾಟಕ್ಕೆ ಮಿತಿಯೇ ಇಲ್ಲದಂತಾಗಿದೆ. ಆದ್ದರಿಂದ ಭ್ರಷ್ಟ ಅಧಿಕಾರಿಗಳು ಕೂಡಲೇ ವರ್ಗಾವಣೆ ಮಾಡಬೇಕು. ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ನಗರಸಭೆಗೆ ನಿಯೋಜಿಸಬೇಕು’ ಎಂದು ಆಗ್ರಹಿಸಿದರು.

ಸಂಜೆಯ ವೇಳೆಗೆ ನಗರಸಭೆ ಆಯುಕ್ತ ಉಮಾಕಾಂತ್ ಅವರು ಧರಣಿ ಸ್ಥಳಕ್ಕೆ ಬಂದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ ಬಳಿಕ ಧರಣಿ ವಾಪಸ್ ಪಡೆಯಲಾಯಿತು.

ತಾಲ್ಲೂಕು ಘಟಕದ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ರೈತ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ, ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ, ಅಲ್ಪ ಸಂಖ್ಯಾತ ಮೋರ್ಚಾದ ತಾಲ್ಲೂಕು ಘಟಕದ ಅಧ್ಯಕ್ಷ ಸೈಯದ್ ಸಮ್ಮೀವುಲ್ಲಾ, ಯುವ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಬಾಲು, ಕಿರಣ್, ನಗರ ಘಟಕದ ಅಧ್ಯಕ್ಷ ಎನ್.ಮಂಜುನಾಥ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಲಕ್ಷ್ಮಿನಾರಾಯಣ ಗುಪ್ತಾ, ಶ್ರೀನಿವಾಸ್, ಮುಖಂಡರಾದ ನಾಗಭೂಷಣ್, ಬೈರೇಗೌಡ, ಎಚ್.ಎಚ್. ಶಿವಕುಮಾರ್, ಕಲಾ ನಾಗರಾಜ್, ಪ್ರೇಮಲೀಲಾ ವೆಂಕಟೇಶ್, ಲಕ್ಷ್ಮೀಪತಿ ಪ್ರತಿಭಟನೆಯಲ್ಲಿ  ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT