ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ಮನ್ನಾಕ್ಕೆ ಒತ್ತಾಯ

Last Updated 15 ಏಪ್ರಿಲ್ 2017, 4:56 IST
ಅಕ್ಷರ ಗಾತ್ರ

ಕೋಲಾರ: ರೈತರ ಸಾಲವನ್ನು ಸರ್ಕಾರ ಮಾನ್ನ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸೇನೆ ಕಾರ್ಯಕರ್ತರು ಗುರುವಾರ ನಗರದ ತಹಶೀಲ್ದಾರ್ ಕಚೇರಿಯ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಸೇನೆಯ ಯುವ ಘಟಕದ ಜಿಲ್ಲಾ ಅಧ್ಯಕ್ಷ ಕೆ.ವೈ.ಗಣೇಶ್‌ಗೌಡ ಮಾತನಾಡಿ, ‘ಅವಿಭಜಿತ ಕೋಲಾರ ಜಿಲ್ಲೆಯ ರೈತರು ನೀರಿನ ಸಮಸ್ಯೆಯಿಂದ ರೋಸಿ ಹೋಗಿದ್ದಾರೆ. ಲಭ್ಯವಿರುವ ಅಲ್ಪ ಸ್ವಲ್ಪ ನೀರಿನಲ್ಲಿಯೇ ಸಾಲ ಮಾಡಿ ಬೆಳೆ ಬೆಳೆದರೆ ನಿಗದಿತ ಬೆಲೆ ದೊರೆಯದೆ ನಷ್ಟ ಅನುಭವಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಸರ್ಕಾರವೇ ಕಾರಣವಾಗಿದೆ’ ಎಂದು ಆರೋಪಿಸಿದರು.

‘ಬರಗಾಲ, ಅತಿವೃಷ್ಟಿ, ಅನಾವೃಷ್ಟಿಗಳಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಮಟ್ಟ ಕುಸಿದಿದೆ.  ಬೇರೆ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲು ಆಯಾ ರಾಜ್ಯ ಸರ್ಕಾರ ಮುಂದಾಗಿವೆ. ಇಲ್ಲಿನ ಸರ್ಕಾರವೂ ಸಹ ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಅನುಷ್ಟಾನಗೊಳಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಪ್ರಧಾನಿ ಅವರಿಗೆ ಸಾಕಷ್ಟು ಬಾರಿ ಪತ್ರ ಬರೆದರೂ ಸಹ ಯಾವುದೇ ಪ್ರತಿಕ್ರಿಯೆ ನೀಡದಿರುವುದು ರೈತರಲ್ಲಿ ಬೇಸರ ಉಂಟು ಮಾಡಿದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲವೇ’ ಎಂದು ಪ್ರಶ್ನಿಸಿದರು.

ರಾಷ್ಟ್ರೀಕೃತ ಬ್ಯಾಂಕ್‌, ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಿ ಸ್ವಯಂ ಉದ್ಯೋಗ ನಡೆಸಲು ಯೋಜನೆ ಕೈಗೊಳ್ಳಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೆ.ಬಿ.ಮುನಿವೆಂಕಟಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಬೈಚೇಗೌಡ, ಉಪಾಧ್ಯಕ್ಷ ಸಿ.ವಿ.ಪ್ರಭಾಕರಗೌಡ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ತಾಲ್ಲೂಕು ಉಪಾಧ್ಯಕ್ಷ ತಮ್ಮೇಗೌಡ, ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ನಾಗರಾಜ್, ಖಜಾಂಚಿ ವೆಂಕಟಪ್ಪ ಧರಣಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT