ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಪಕ್ಷಗಳ ಕಾರ್ಯವೈಖರಿಗೆ ಬೇಸತ್ತ ಜನರು

Last Updated 16 ಏಪ್ರಿಲ್ 2017, 5:07 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿ, ಗೆಲುವು ಸಾಧಿಸುವ ಮೂಲಕ ವಿಧಾನಸೌಧ ಪ್ರವೇಶಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಬಿನ್ ಮ್ಯಾಥ್ಯೂಸ್ ವಿಶ್ವಾಸ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಪಕ್ಷದ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಹಾಗೂ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಆಡಳಿತ ನಡೆಸಿರುವ ಪಕ್ಷಗಳು ದಲಿತ ಮತ್ತು ಹಿಂದುಳಿದವರ ಅಭಿವೃದ್ಧಿಗೆ ಯಾವುದೇ ಯೋಜನೆಗಳ ಜಾರಿಗೆ ತರುವಲ್ಲಿ ವಿಫಲವಾಗಿವೆ. ಹೀಗಾಗಿ ಜನರು ರಾಷ್ಟ್ರೀಯ ಪಕ್ಷಗಳ ಕಾರ್ಯವೈಖರಿಯಿಂದ ಬೇಸತ್ತು ಹೊಸ ಪಕ್ಷಗಳತ್ತ ಚಿತ್ತ ನೆಟ್ಟಿದ್ದಾರೆ. ರಾಜ್ಯದಲ್ಲಿ ಪಕ್ಷದತ್ತ ಜನರ ಒಲುವು ಹೆಚ್ಚುತ್ತಿದೆ’ ಎಂದು ಹೇಳಿದರು.

‘ಉತ್ತರ ಕರ್ನಾಟಕ ಭಾಗದ ಜನರ ದಶಕಗಳ ಬೇಡಿಕೆಯಾದ ಕಳಸಾ ಬಂಡೂರಿ ಯೋಜನೆ ವಿವಾದ ಬಗೆಹರಿಸುವಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಆ ಕೆಲಸ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಸಾಧ್ಯವೆಂದು ಜನರು ನಂಬಿದ್ದಾರೆ. ಮುಂದಿನ ಚುನಾವಣೆಗೆ ಈಗಿನಿಂದಲೇ ಪಕ್ಷ ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾವೇಶ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಬಡವರು, ದೀನ ದಲಿತರನ್ನು ಕಡೆಗಣಿಸಿದೆ. ನಾನೊಬ್ಬ ಸೇವಕ, ಬಡವರ ಅಭಿವೃದ್ಧಿಯೇ ನನ್ನ ಮೂಲಮಂತ್ರ ಎಂದು ಹೇಳಿ ಅಧಿಕಾರ ಗಿಟ್ಟಿಸಿಕೊಂಡ ಮೋದಿ ಈಗ ಆ ಜನರನ್ನೇ ಮರೆತಿದ್ದಾರೆ. ಈ ಬಗ್ಗೆ ಜನರು ಅರ್ಥ ಮಾಡಿಕೊಳ್ಳಬೇಕು’ ಎಂದರು.

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಸಮೀವುಲ್ಲಾ ಮಾತನಾಡಿ, ‘ಅಲ್ಪಸಂಖ್ಯಾತರನ್ನು ಕಡೆಗಣಿಸಿರುವ ಬಿಜೆಪಿಗೆ ತಕ್ಕ ಪಾಠ ಕಲಿಸುವ ಉದ್ದೇಶಕ್ಕಾಗಿ ಎಲ್ಲಾ ವರ್ಗದ ಜನರೂ ಒಗ್ಗೂಡಬೇಕಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಪ್ರತಿಯೊಂದು ಸಮುದಾಯದವರು ಬೆಂಬಲಿಸಬೇಕಿದೆ’ ಎಂದು ಹೇಳಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಮಾಜವಾದಿ ಪಕ್ಷದ ಕಾರ್ಯಕರ್ತರು ಅಂಬೇಡ್ಕರ್ ಭವನದಿಂದ ಸಮಾವೇಶ ನಡೆದ ಗುರುರಾಜ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ನಡೆಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಮಂಜಪ್ಪ ಯಾದವ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾಮೋಹನ್, ಸಂಘಟನಾ ಕಾರ್ಯದರ್ಶಿ ಆಲಿಬಾಬಾ, ಜಿಲ್ಲಾ ಘಟಕದ ಅಧ್ಯಕ್ಷ ಸುಭಾನ್‌ ಖಾನ್, ಮುಖಂಡರಾದ ಎಂ.ಆರ್.ಅನಿಲ್, ಅಮೃತರಾವ್, ಮುನಿಸ್ವಾಮಿ, ಯೋಗೇಶ್ವರಿ, ಮುನಿನಾರಾಯಣ, ತಾಲೂಕು ಅಧ್ಯಕ್ಷರಾದ ಮುನಿಕೃಷ್ಣಪ್ಪ, ವಿ.ಎಂ.ರಾಜು, ಗಣೇಶ್, ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT