ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಬಳಿವಾರು ನರೇಗಾ ಅದಾಲತ್ ನಡೆಸಿ

Last Updated 18 ಏಪ್ರಿಲ್ 2017, 5:59 IST
ಅಕ್ಷರ ಗಾತ್ರ

ವಿಜಯಪುರ: ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೋಬಳಿವಾರು ನರೇಗಾ ಅದಾಲತ್‌ಗಳನ್ನು ನಡೆಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ಸೂಚಿಸಿದರು.ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಬರ ಪರಿಹಾರ ಕಾಮಗಾರಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶ ನೀಡುವ ಜತೆಗೆ ಅಭಿವೃದ್ಧಿ ಕೆಲಸಗಳಿಗೂ ಹೆಚ್ಚಿನ ವೇಗ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಬಂದಲ್ಲಿ ಸ್ಥಳೀಯವಾಗಿ ದುರಸ್ತಿಯಾಗಬೇಕು. ಇದಕ್ಕಾಗಿ ಸ್ಥಳೀಯವಾಗಿ ಲಭ್ಯವಿರುವ ಡಿಪ್ಲೊಮಾ ವಿದ್ಯಾರ್ಥಿಗಳನ್ನೇ ತರಬೇತಿಗೊಳಿಸಿ ಹೋಬಳಿವಾರು ನೇಮಕ ಮಾಡುವ ಮೂಲಕ ಇಂತಹ ಘಟಕಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಬರುವ ಜೂನ್ ನಂತರ ಈ ಕೆಲಸ ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ಕಾಲ-ಕಾಲಕ್ಕೆ ನಿರಂತರ ಭೇಟಿ ನೀಡುವ ಮೂಲಕ ಕಾಮಗಾರಿಗಳನ್ನು ಪರಿಶೀಲಿಸುವಂತೆ ಸೂಚಿಸಿದ ಅವರು, ಯೋಜನೆಗಳು ಶೀಘ್ರ ಅನುಷ್ಠಾನಗೊಂಡು ನೀರು ದೊರೆಯುವಂತಾಗಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಖಾಲಿಯಿರುವ ಆಶಾ ಕಾರ್ಯಕರ್ತೆಯರ ಮತ್ತು ವೈದ್ಯರ ಹುದ್ದೆಗಳು ಆದ್ಯತೆ ಮೇಲೆ ಭರ್ತಿಯಾಗುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಆಶಾ ಕಾರ್ಯಕರ್ತೆಯರ ಹುದ್ದೆಗಳನ್ನು ಆಯಾ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಉಸ್ತುವಾರಿಯೊಂದಿಗೆ ಗ್ರಾಮ ಸಭೆ ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಆಗುವ ಜತೆಗೆ ತಕ್ಷಣ ನೇಮಕಾತಿ ಮಾಡಿ ಅವರಿಗೆ ತರಬೇತಿಗೊಳಿಸಬೇಕು. ಈ ವಿಷಯವನ್ನು ಆರೋಗ್ಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗಾಗಿ ಜಾರಿಯಿರುವ ಬಿಸಿಯೂಟ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಬಗ್ಗೆ ಜಿಲ್ಲಾ ಮಟ್ಟದ ಮತ್ತು ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಸ್ವತಃ ತಾವೇ ಆಹಾರ ಸೇವಿಸಿ ಗುಣಮಟ್ಟ ಪರೀಕ್ಷಿಸಲು ಸೂಚಿಸಿದ ಅವರು, ವಿದ್ಯಾರ್ಥಿಗಳಿಗೆ ಯಾವುದೇ ಪರಿಸ್ಥಿತಿಯಲ್ಲಿ ಕಳಪೆ ಮಟ್ಟದ ಆಹಾರ ಪೂರೈಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಮುಂಬರುವ ವರ್ಷದ ಕ್ರಿಯಾ ಯೋಜನೆಗಳನ್ನು ಈಗಿನಿಂದಲೇ ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದ ಅವರು, ಕುಡಿಯುವ ನೀರು ಮತ್ತು ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ತಕ್ಷಣ ಅನುಮೋದನೆ ಸಹ ಪಡೆಯಲು ಸೂಚಿಸಿದ ಅವರು, ಬರುವ ಮೇ ಅಂತ್ಯದೊಳಗೆ ಮುಂದಿನ ವರ್ಷದ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿ, ತೊಗರಿ ಖರೀದಿ ಸಮಸ್ಯೆಗಳ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

284 ಟ್ಯಾಂಕರ್ ಮೂಲಕ ನೀರು ಪೂರೈಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಮಾತನಾಡಿ ಜಿಲ್ಲೆಯ 96 ಗ್ರಾಮಗಳಿಗೆ, ದೇವರಹಿಪ್ಪರಗಿಯ 17 ವಾರ್ಡ್‌ ಸೇರಿದಂತೆ ಒಟ್ಟು 284 ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇನ್ನೂ ಮುಂದೆ ಟ್ಯಾಂಕರ್‌ಗಳ ಮಂಜೂರಾತಿಗಾಗಿ ಆಯಾ ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳ ಮೂಲಕ ಸಲ್ಲಿಸಲಾಗುವ ಪ್ರಸ್ತಾವನೆಗಳಿಗೆ ತಕ್ಷಣ ಮಂಜೂರಾತಿ ನೀಡಲಾಗುವುದು.

42 ಜನ ವಸತಿಗಳಿಗೆ ಖಾಸಗಿ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ನೂತನವಾಗಿ 208 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ. ಪ್ರತಿ ಹೋಬಳಿ ಮಟ್ಟದಲ್ಲಿ ಒಂದು ಮೇವು ಬ್ಯಾಂಕ್ ಸ್ಥಾಪನೆಗೆ ಈಗಾಗಲೇ ಆದೇಶ ನೀಡಲಾಗಿದೆ. ಜಿಲ್ಲೆಯಲ್ಲಿ 61 ತೊಗರಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈವರೆಗೆ ಸುಮಾರು 13 ಸಾವಿರಕ್ಕೂ ಹೆಚ್ಚು ರೈತರಿಂದ ತೊಗರಿ ಖರೀದಿಸಲಾಗಿದೆ. ತೊಗರಿ ಖರೀದಿ ಸಮಸ್ಯೆ ಬಗ್ಗೆ  ಗಮನ ನೀಡಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT