ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ನದ್ದು ದ್ವಂದ್ವ ನೀತಿ’

Last Updated 20 ಏಪ್ರಿಲ್ 2017, 5:11 IST
ಅಕ್ಷರ ಗಾತ್ರ

ಹಿರಿಯೂರು: ಈಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿನ ಸೋಲನ್ನು ಅರಗಿಸಿಕೊಳ್ಳಲಾಗದ ಕಾಂಗ್ರೆಸ್ ವಿದ್ಯುನ್ಮಾನ ಮತಯಂತ್ರದಲ್ಲಿ ದೋಷವಿದೆ ಎಂದು ರಾಷ್ಟ್ರಪತಿ ಅವರಿಗೆ ದೂರು ಕೊಡಲು ಹೋಗಿರುವುದು ಆ ಪಕ್ಷದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಸೀಮಾಂಧ್ರದ ಬಿಜೆಪಿ ರಾಜ್ಯಾಧ್ಯಕ್ಷ ಡಾ.ಕೆ.ಹರಿಬಾಬು ಆರೋಪಿಸಿದರು.ನಗರದಲ್ಲಿ ಬುಧವಾರ ಬಿಜೆಪಿಯಿಂದ ಏರ್ಪಡಿಸಿದ್ದ ಪಂಡಿತ್ ದೀನ್ ದಯಾಳ್ ಜನ್ಮ ಶತಮಾನೋತ್ಸವ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದರ ಬಗ್ಗೆ ಆ ಪಕ್ಷದ ಮುಖಂಡರು ತುಟಿ ಬಿಚ್ಚುತ್ತಿಲ್ಲ. ಎಲೆಕ್ಟ್ರಾನಿಕ್ ಓಟಿಂಗ್ ಮಷಿನ್ ಗುಣಮಟ್ಟ ಕುರಿತು ಆ ಪಕ್ಷದ ಮುಖಂಡರಲ್ಲೇ ಒಮ್ಮತವಿಲ್ಲ. ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಸಾಮಾನ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿಗೆ ಪೂರಕ ವಾತಾವರಣವಿದೆ. ನಮ್ಮ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಗ್ರಾಮೀಣ ಜನರಲ್ಲಿ ತಿಳಿವಳಿಕೆ ಮೂಡಿಸುವ ಜತೆಗೆ ಯೋಜನೆಗಳ ಪ್ರಯೋಜನವನ್ನು ಜನರಿಗೆ ತಲುಪಿಸಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಕೇಂದ್ರದ ಬಿಜೆಪಿ ಸರ್ಕಾರ ದೇಶದ ಆರ್ಥಿಕ ಅಭಿವೃದ್ಧಿ, ಮೂಲಸೌಲಭ್ಯ, ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಉದ್ದೇಶ ಹೊಂದಿದೆ. ₹ 4,000 ಕೋಟಿ ವೆಚ್ಚದಲ್ಲಿ ಚಿತ್ರದುರ್ಗ–ಹೊಸಪೇಟೆ ಮಧ್ಯದ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುವುದು. ಸಂವಿಧಾನದ ಆಶಯದಂತೆ ಹಿಂದುಳಿದ ವರ್ಗಗಳಿಗೆ ಸೌಲಭ್ಯ ನೀಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಹರಿಬಾಬು ತಿಳಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್ ಮಾತನಾಡಿ, ‘ಸ್ಥಳೀಯ ಶಾಸಕರು ವಿವಿ ಸಾಗರಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಿಂದ 5 ಟಿಎಂಸಿ ನೀರು ಬರುತ್ತದೆ ಎಂದು ನೀಡುತ್ತಿರುವ ಹೇಳಿಕೆ ಅವಾಸ್ತವಿಕ. ಯೋಜನೆಯ ಮುಖ್ಯ ಎಂಜಿನಿಯರ್ ಪ್ರಕಾರ ಜಲಾಶಯಕ್ಕೆ ಕೇವಲ 2 ಟಿಎಂಸಿ ನೀರು ಬರಲಿದೆ. ಈ ಸಂಬಂಧ ಅಧಿಕೃತ ದಾಖಲೆ ಇದೆ’ ಎಂದು ಹೇಳಿದರು.

ಬಿಬಿಎಂಪಿ ಸದಸ್ಯೆ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ‘ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 150 ಸ್ಥಾನ ಗಳಿಸುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕನಸು ಹಿರಿಯೂರು ಕ್ಷೇತ್ರದಿಂದ ನನಸಾಗಲಿದೆ’ ಎಂದರುಸಭೆಯಲ್ಲಿ ನಗರಸಭೆ ಅಧ್ಯಕ್ಷ ಟಿ.ಚಂದ್ರಶೇಖರ್, ಜಿಲ್ಲಾ ಪಂಚಾಯ್ತಿ ಸದಸ್ಯೆ ರಾಜೇಶ್ವರಿ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಯಶವಂತ ರಾಜ್, ಜಯರಾಮಯ್ಯ, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ದ್ಯಾಮೇಗೌಡ, ಮುಖಂಡರಾದ ಡಿ.ಟಿ. ಶ್ರೀನಿವಾಸ್, ಸಿದ್ದೇಶ್ ಯಾದವ್, ಎನ್.ಆರ್.ಲಕ್ಷ್ಮೀಕಾಂತ್, ಕೇಶವ ಮೂರ್ತಿ, ನಿರಂಜನ್, ಚಿತ್ತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT