ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಪಾಮನಕಲ್ಲೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪ್ರತಿಭಟನೆ
Last Updated 22 ಏಪ್ರಿಲ್ 2017, 4:57 IST
ಅಕ್ಷರ ಗಾತ್ರ
ಕವಿತಾಳ: ಸಮೀಪದ ಪಾಮನಕಲ್ಲೂರು ಗ್ರಾಮಸ್ಥರು ಕುಡಿಯುವ ನೀರಿಗಾಗಿ  ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ ಶೆಟ್ಟಿ ಬಣ) ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
 
ಖಾಲಿ ಕೊಡಗಳೊಂದಿಗೆ ಬಂದಿದ್ದ ಮಹಿಳೆಯರು ಸ್ಥಳೀಯ ಆಡಳಿತ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದರು.
 
ಈ ವೇಳೆ ಕರವೇ ತಾಲ್ಲೂಕು ಘಟಕದ ಕಾರ್ಯದರ್ಶಿ ವೆಂಕಟೇಶ ಶಂಕ್ರಿ ದೇವತಗಲ್‌ ಮಾತನಾಡಿ, ‘ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.
 
ಗ್ರಾಮಸ್ಥರು ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಗುರುವಾರ ರಾತ್ರಿ ಗ್ರಾಮಕ್ಕೆ ನೀರು ಪೂರೈಸಿದ್ದಾರೆ ಎಂದರು.
 
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಾತನಾಡಿ, ‘ಸಮೀಪದ ಇರಕಲ್‌ ಕೆರೆಯಿಂದ ನೀರು ಸರಬರಾಜು ಮಾಡುವ ಕುರಿತು ಈಗಾಗಲೇ ಚರ್ಚಿಸಿದ್ದು, ಹೊಸದಾಗಿ ಕೊಳವೆಬಾವಿ ಕೊರೆಸಲಾಗುವುದು.

ಶನಿವಾರದಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದು ಭರವಸೆ ನೀಡಿದರು. ಹತ್ತು ದಿನಗಳ ಒಳಗೆ ನೀರಿನ ಸಮಸ್ಯೆ ಸಂಪೂರ್ಣ ಪರಿಹರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ವಿರೂಪಾಕ್ಷಪ್ಪ ತಿಳಿಸಿದರು.
 
 ರಮೇಶ ಕಂಟ್ಲೆ, ಕರವೇ ಲಿಂಗಸುಗೂರು ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ, ಲಕ್ಷ್ಮಣ ಚೌಡ್ಲಿ, ಲಕ್ಷ್ಮೀ ಕಂಟ್ಲೆ, ಮಲ್ಲು, ಆಂಜನೇಯ ಈಳಿಗೇರ, ಯಮನಮ್ಮ, ಯಲ್ಲಮ್ಮ, ಬಸ್ಸಮ್ಮ, ಯಂಕಪ್ಪ ಗುಡಿಹಾಳ, ಬಸವರಾಜ, ಮೌನೇಶ, ವಿರೇಶ ಮತ್ತು ಲಕ್‌ಮೀ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT