ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿಗೆ ₹ 62 ಸಾವಿರ ಕೋಟಿ ವೆಚ್ಚ

Last Updated 29 ಏಪ್ರಿಲ್ 2017, 6:03 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ  ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ₹ 62 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರು.ಪಟ್ಟಣದಲ್ಲಿ ಸಂಚಾರ ಪೊಲೀಸ್‌ ಠಾಣೆ, ಶ್ರವಣಬೆಳಗೊಳದಲ್ಲಿ ನಿರ್ಮಿಸಿರುವ ಪೊಲೀಸ್‌ ಸಿಬ್ಬಂದಿಯ ವಸತಿಗೃಹಗಳು, ನುಗ್ಗೇಹಳ್ಳಿಯಲ್ಲಿ ಪೊಲೀಸ್‌ ಠಾಣೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. ನೀರಾವರಿ ಯೋಜನೆಗಳ ಜಾರಿಗೊಳಿಸುವ ವಿಚಾರದಲ್ಲಿ ಸರ್ಕಾರಕ್ಕೆ ಬದ್ಧತೆ  ಇದೆ. ಪ್ರತಿವರ್ಷ ನೀರಾವರಿ ಯೋಜನೆಗಳಿಗೆ ₹ 10 ಸಾವಿರ ಕೋಟಿ ಖರ್ಚು ಮಾಡಲಾಗುವುದು ಎಂದು ಘೋಷಿಸಲಾಗಿತ್ತು. ಆದರೆ ಅದಕ್ಕಿಂತ ಹೆಚ್ಚು ಹಣ ವ್ಯಯಮಾಡಲಾಗುತ್ತಿದೆ ಎಂದರು.

‘ಈ ಸಲ ಬರಗಾಲದ ತೀವ್ರತೆ ಹೆಚ್ಚಾಗಿದ್ದು, ನೀರಾವರಿ ಯೋಜನೆಗಳ ಮೂಲಕ ಕೆರೆ, ಕಟ್ಟೆಗಳನ್ನು ತುಂಬಿಸಿದರೆ ಅಂತರ್ಜಲವೃದ್ಧಿಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿನ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿದರು.ರೈತರ ಸಾಲಮನ್ನಾ ಮಾಡುವಂತೆ ಸಭಿಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ₹ 40ಸಾವಿರ ಕೋಟಿ ಸಾಲ ಇದೆ. ಸಹಕಾರಿ ಬ್ಯಾಂಕ್‌ಗಳಲ್ಲಿ ₹ 10 ಸಾವಿರ ಕೋಟಿ ಸಾಲ ಇದೆ. ರಾಷ್ಟ್ರೀಕೃತ ಬ್ಯಾಂಕ್‌ನಿಂದ ರೈತರು ಪಡೆದಿರುವ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದರೆ, ಸಹಕಾರಿ  ಬ್ಯಾಂಕ್‌ಗಳಿಂದ ರೈತರು ಪಡೆದಿರುವ ಸಾಲಮನ್ನಾ ಮಾಡಲು ಸಿದ್ಧ ಎಂದು ಪುನರುಚ್ಚರಿಸಿದರು.

ಕಳೆದ ವರ್ಷ ರಾಜ್ಯದಲ್ಲಿ ಒಂದು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಪ್ರತಿ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದಕ್ಕೆ ಪೊಲೀಸ್‌ ಇಲಾಖೆಯ ಜೊತೆ ಸಾರ್ವಜನಿಕರು ಕೈಜೋಡಿಸಬೇಕು. ಅದೇ ರೀತಿ ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು, ನುಗ್ಗೇಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಈ ಭಾಗದ ಜನರ ಬಹುದಿನದ ಕನಸು ಸದ್ಯದಲ್ಲಿ ನನಸಾಗಲಿದೆ ಎಂದರು.

ಶಾಸಕ ಸಿ.ಎನ್. ಬಾಲಕೃಷ್ಣ, ತಾಲ್ಲೂಕಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲಾಖೆಗೆ ಹೊಸ ವಾಹನಗಳನ್ನು ನೀಡಬೇಕು ಎಂದು ಮನವಿ ಮಾಡಿದರು.ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌. ಶ್ವೇತಾ ದೇವರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸೌಮ್ಯಾ ಚಂದ್ರೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ದೇವಮ್ಮ, ದಕ್ಷಿಣ ವಲಯದ ಐಜಿಪಿ ವಿಪುಲ್‌ಕುಮಾರ್‌, ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ರಾಹುಲ್‌ಕುಮಾರ್‌ ಶಹಪುರವಾಡ್‌, ಎಪಿಎಂಸಿ ಅಧ್ಯಕ್ಷ ವಿ.ಎನ್‌. ಮಂಜುನಾಥ್‌, ಪುರಸಭಾಧ್ಯಕ್ಷ ಕೆ.ಜೆ. ಸುರೇಶ್‌ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT