ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ನಲ್ಲಿ ಬಡ್ತಿ ಮೀಸಲಾತಿ ಮಸೂದೆ ಮಂಡಿಸಿ

ಕೇಂದ್ರ ಸರ್ಕಾರಕ್ಕೆ ಬಿಎಸ್‌ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಆಗ್ರಹ
Last Updated 12 ಮೇ 2017, 3:58 IST
ಅಕ್ಷರ ಗಾತ್ರ
ದಾವಣಗೆರೆ: ‘ದಲಿತರ ಬಗ್ಗೆ ಈಚೆಗೆ ಹೆಚ್ಚಿನ ಕಾಳಜಿ ತೋರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಡ್ತಿ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಿ’ ಎಂದು ಬಿಎಸ್‌ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಸವಾಲು ಹಾಕಿದರು.
 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘ ದಾವಣಗೆರೆ ವಿಭಾಗ ಗುರುವಾರ ಹಮ್ಮಿಕೊಂಡಿದ್ದ ಬೆಳ್ಳಿಹಬ್ಬ ಮಹೋತ್ಸವ ಹಾಗೂ ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. 
 
2012ರಲ್ಲಿ ಬಡ್ತಿ ಮೀಸಲಾತಿ ಮಸೂದೆಯನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ರಾಜ್ಯಸಭೆಯಲ್ಲಿ ಮಂಡಿಸಿದಾಗ ಅದು ಅಂಗೀಕಾರ ವಾಗಿತ್ತು. ಆದರೆ ಲೋಕಸಭೆಯಲ್ಲಿ ಅಂಗೀಕಾರವಾಗದೆ ಇನ್ನೂ ನನೆಗುದಿಗೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಎಲ್ಲ ಶ್ರೇಣಿಯಲ್ಲಿನ ಹುದ್ದೆಗಳ ಬಡ್ತಿಯಲ್ಲಿ ಮೀಸಲಾತಿಗೆ ಒತ್ತು ನೀಡಿದಾಗ ಅನ್ಯಾಯ ಸರಿಪಡಿಸಲು ಸಾಧ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಆದೇಶವನ್ನು ಪುನರ್ ಪರಿಶೀಲಿಸುವಂತೆ ಅರ್ಜಿ ಸಲ್ಲಿಸುವ ಮೂಲಕ ದಲಿತರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದರು.
 
ಜಾತಿ, ಧರ್ಮಗಳಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಅಗತ್ಯ ಎಂದು ಪ್ರತಿಪಾದಿಸಿದ ಅವರು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
 
‘ಸ್ವಾತಂತ್ರ್ಯ ಪೂರ್ವದಲ್ಲೇ ಆಗಿನ ಮೈಸೂರು ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಸ್ಥಾನದಲ್ಲಿ ವಿದ್ವಾಂಸರ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಿದ್ದರು. ಅಂದು ಅನುಷ್ಠಾನಗೊಂಡಿದ್ದರಿಂದಲೇ ಇಂದು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯವಾಯಿತು’ ಎಂದು ಹೇಳಿದರು.
 
ರಾಜ್ಯ ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ.ಬಸವರಾಜ್ ಮಾತ ನಾಡಿ, ‘ದೇಶದ ಒಟ್ಟು ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನ ಶೇ 24.10ರಷ್ಟಿದ್ದಾರೆ. ಮೀಸಲಾತಿ ಯನ್ನೂ ಇದೇ ಅನುಪಾತದಲ್ಲಿ ಜಾರಿಗೊಳಿಸಲು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕು’ ಎಂದು ಒತ್ತಾಯಿಸಿದರು.
 
‘ಪ್ರಸ್ತುತ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪ ಯೋಜನೆ ಮಸೂದೆ ಜಾರಿಗೊಳಿಸಿ ಈ ವರ್ಷದ ಬಜೆಟ್‌ನಲ್ಲಿ ದಾಖಲೆ ಅನುದಾನ ₹ 27,400 ಕೋಟಿ ಮೀಸಲಿಟ್ಟಿದೆ. ಆದರೆ, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಕೇವಲ ₹ 53 ಸಾವಿರ ಕೋಟಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಕುರಿತು ಚಿಂತಕ ಪ್ರೊ.ಸಿ.ಕೆ.ಮಹೇಶ್ ವಿಶೇಷ ಉಪನ್ಯಾಸ ನೀಡಿದರು. ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ನೌಕರರ ಸಂಘದ ಗೌರವಾಧ್ಯಕ್ಷ ಮಾವಳ್ಳಿ ಶಂಕರ್, ಶಾಸಕ ಎಚ್‌.ಪಿ.ರಾಜೇಶ್, ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಡಾ.ಎಚ್‌. ವಿಶ್ವನಾಥ್, ಚಿತ್ರದುರ್ಗ ಜಿಲ್ಲಾ ನೀರಾ ವರಿ ಹೋರಾಟ ಸಮಿತಿ ಅಧ್ಯಕ್ಷ ಎಂ. ಜಯಣ್ಣ, ಮುಖಂಡ ಮುರುಘ ರಾಜೇಂದ್ರ ಒಡೆಯರ್‌, ಕೆಎಸ್‌ಆರ್‌ಟಿಸಿ ಸಹಾಯಕ ಲೆಕ್ಕಾಧಿಕಾರಿ ಟಿ.ಆರ್‌. ಮಂಜುನಾಥ್, ತಾಲ್ಲೂಕು ಪಂಚಾಯ್ತಿ ಸದಸ್ಯ ಆಲೂರು ಲಿಂಗರಾಜು, ಮುಖಂಡರಾದ ಕೆ.ಎಸ್‌. ಜಯಪ್ಪ, ಟಿ.ಆನಂದ, ವಿ.ವೆಂಕಟೇಶ್ವರಲು, ಎಚ್‌.ಕೆ.ಬಸವರಾಜು, ಎನ್‌. ಬಸವ ರಾಜು, ಬಿ.ಎಚ್‌.ಬಳ್ಳಾರಿ, ಆರ್‌. ಬಾಬು ರಾಜ್ ಅವರೂ ಇದ್ದರು. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಚ್‌.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಸಾಂಸ್ಕೃತಿಕ ಕಲಾತಂಡ ಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT