ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಸಿ ಬ್ಯಾಂಕ್‌ನಲ್ಲಿ ರಾಜಕಾರಣ ಬೇಡ

Last Updated 13 ಮೇ 2017, 8:31 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ರಾಜಕಾರಣ ಮಾಡುವುದು ಬೇಡ. ಬ್ಯಾಂಕನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದರಿಂದ ಸಹಕಾರಿ ಕ್ಷೇತ್ರಕ್ಕೆ ಅಪಾಯ’ ಎಂದು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕಡಗಟ್ಟೂರು ಗ್ರಾಮದಲ್ಲಿ ಶುಕ್ರವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಚೇರಿ ಮತ್ತು ಸ್ತ್ರೀಶಕ್ತಿ ಸಂಘಗಳು ಹಾಗೂ ರೇಷ್ಮೆ ಬೆಳೆಗಾರರಿಗೆ ಸಾಲ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಆರ್ಥಿಕವಾಗಿ ದಿವಾಳಿಯಾಗಿದ್ದ ಡಿಸಿಸಿ ಬ್ಯಾಂಕ್‌ ಚೇತರಿಸಿಕೊಳ್ಳುತ್ತಿದ್ದು, ಇದರಿಂದ ಜಿಲ್ಲೆಯ ಸಾವಿರಾರು ಸ್ತ್ರೀಶಕ್ತಿ ಸಂಘಗಳು ಮತ್ತು ರೈತರಿಗೆ ನೂರಾರು ಕೋಟಿ ಸಾಲ ಸಿಕ್ಕಿದೆ’ ಎಂದರು.

‘ಜಿಲ್ಲೆಯ ಜನಪ್ರತಿನಿಧಿಗಳು ವೈಯಕ್ತಿಕ ರಾಜಕಾರಣವನ್ನು ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೇರಿ ವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ. ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರು ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಸಾಲ ವಿತರಣೆ ಮತ್ತು ಮರು ಪಾವತಿಯಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ವೈಯಕ್ತಿಕ ಕಾರಣಕ್ಕೆ ಬ್ಯಾಂಕನ್ನು ಬಲಿ ಕೊಡುವುದು ಒಳ್ಳೆಯದಲ್ಲ’ ಎಂದು ಕಿವಿಮಾತು ಹೇಳಿದರು.

‘ಕುಟುಂಬವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮಹಿಳೆಯರು ಹಣಕಾಸು ವ್ಯವಹಾರದಲ್ಲೂ ನಾಜೂಕಿನಿಂದ ನಡೆದುಕೊಳ್ಳುತ್ತಿರುವುದು ಶ್ಲಾಘನೀಯ. ಬರಗಾಲ ಎದುರಿಸುತ್ತಿರುವ ಜಿಲ್ಲೆಯಲ್ಲಿ ಮಹಿಳೆಯರು ಡಿಸಿಸಿ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಸದ್ಬಳಕೆ ಮಾಡಿದರೆ ಆರ್ಥಿಕವಾಗಿ ಮತ್ತಷ್ಟು ಬಲಿಷ್ಠರಾಗಬಹುದು’ ಎಂದು ಅಭಿಪ್ರಾಯಪಟ್ಟರು.

ಅವಿಭಾಜ್ಯ ಅಂಗ: ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ‘ಸಹಕಾರಿ ಕ್ಷೇತ್ರಗಳು ರಾಜಕೀಯ ಮುಕ್ತವಾಗಿರಬೇಕು. ಏನಾದರೂ ಸಮಸ್ಯೆ ಎದುರಾದರೆ ಅದನ್ನು ಬಗೆಹರಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿಗಳು ಮತ್ತು ಸಹಕಾರಿ ಸಂಘಗಳು ಬದುಕಿನ ಅವಿಭಾಜ್ಯ ಅಂಗಗಳು. ಇದರಲ್ಲಿ ರಾಜಕಾರಣ ಮಾಡುವುದು ಒಳ್ಳೆಯದಲ್ಲ’ ಎಂದು ಹೇಳಿದರು.

‘ಜನಪ್ರತಿನಿಧಿಗಳು ವಿಧಾನಸೌಧದಲ್ಲಿ ರಾಜಕಾರಣ ಮಾಡಲಿ. ಜಿಲ್ಲಾ ಪಂಚಾಯಿತಿ ಚುನಾವಣೆ ಬಂದಾಗಲೂ ಬೇಕಾದಷ್ಟು ರಾಜಕೀಯ ನಡೆಯುತ್ತದೆ. ಆದರೆ, ಸಹಕಾರಿ ಸಂಘಗಳಲ್ಲಿ ರಾಜಕಾರಣ ಬೆರೆಸುವುದರಿಂದ ಇಡೀ ವ್ಯವಸ್ಥೆ ಹಾಳಾಗುತ್ತದೆ. ನೀರಿನ ವಿಚಾರದಲ್ಲೂ ತಾರತಮ್ಯ ಎಸಗುತ್ತಿರುವ ಬಗ್ಗೆ ದೂರು ಬಂದಿವೆ. ಇದೆಲ್ಲಾ ಒಳ್ಳೆಯದಲ್ಲ. ಕಡಗಟ್ಟೂರು ಗ್ರಾಮದಲ್ಲಿ ನಡೆಯುತ್ತಿರುವ ಸಾಲ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ವರ್ತೂರು ಪ್ರಕಾಶ್ ಅವರಿಗೂ ಆಹ್ವಾನ ನೀಡಬೇಕಿತ್ತು’ ಎಂದರು.

‘ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರಗಾಲದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಸಹಕಾರಿ ಬ್ಯಾಂಕ್‌ಗಳ ಮೂಲಕ ಹೆಚ್ಚು ಸಾಲ ವಿತರಿಸಿ ಅಲ್ಲಿನ ರೈತರು ಚೇತರಿಸಿಕೊಳ್ಳುವಂತೆ ಮಾಡುತ್ತಿರುವುದು ಶ್ಲಾಘನೀಯ. ಬಯಲು ಸೀಮೆಯ ಜಿಲ್ಲೆಗಳಿಗೆ ಇನ್ನೂ ಹೆಚ್ಚಿನ ಹಣಕಾಸು ನೆರವು ಸಿಗಬೇಕು’ ಎಂದು ಹೇಳಿದರು.ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ನಿರ್ದೇಶಕರಾದ ಸೋಮಣ್ಣ, ದಯಾನಂದ್, ಎಪಿಎಂಸಿ ನಿರ್ದೇಶಕಿ ರೇಖಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT