ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನಪರ ಕಾಳಜಿ ಮರೆತ ರಾಜ್ಯ ಸರ್ಕಾರ’

Last Updated 17 ಮೇ 2017, 5:41 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬೆಳೆನಷ್ಟ ಪರಿಹಾರವನ್ನು ರೈತರ ಖಾತೆಗಳಿಗೆ ಸಕಾಲಕ್ಕೆ ಜಮೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಎಸ್. ತಿಪ್ಪೇಸ್ವಾಮಿ ಆರೋಪಿಸಿದರು.

ಸಮೀಪದ ಏಕಾಂತೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.
ಸತತ ಬರದಿಂದ ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ರೈತರ ಹಿತಕಾಯುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ದಿನದಿಂದಲೂ ರೈತರ ಸಾಲಮನ್ನಾ ಮಾಡಿಲ್ಲ. ಹಲವು ಭಾಗ್ಯಗಳ ಬದಲಿಗೆ ರೈತರ ಸಾಲ ಮನ್ನಾ ಮಾಡಿದರೆ ಹೆಚ್ಚು ಅನುಕೂಲವಾಗುತ್ತದೆ  ಎಂದು ಹೇಳಿದರು.

ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಮೂಲಕ ಜನರನ್ನು ಜಾಗೃತಿಗೊಳಿಸುವ ಕಾರ್ಯ ಮಾಡಲಾಗುವುದು ಎಂದರು. ಪಕ್ಷದಲ್ಲಿ ಯಾವುದೇ ಬಿನ್ನಾಭಿಪ್ರಾಯಗಳಿಲ್ಲ. ಬಿಜೆಪಿ ಶಿಸ್ತಿನ ಪಕ್ಷ. ಎಲ್ಲ ಪಕ್ಷದಲ್ಲೂ ಆಂತರಿಕ ಸಮಸ್ಯೆಗಳಿರುವುದು ಸಹಜ. ಆದರೆ, ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಉಂಟಾಗಿದ್ದ ಬಿನ್ನಾಭಿಪ್ರಾಯಗಳು ಬಗೆಹರಿದಿವೆ.

ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸ್ವತಃ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದರು.

ಚಿತ್ರದುರ್ಗದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ‘ರಾಜ್ಯ ಸರ್ಕಾರದ ಕೆಲ ಸಚಿವರು ಕೇಂದ್ರದ ಹಲವು ಯೋಜನೆಗಳನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಅನ್ನಭಾಗ್ಯ ಯೋಜನೆಗೆ ಕೇಂದ್ರದ ಶೇ 99 ಪಾಲಿದೆ. ಭದ್ರಾ ಮೇಲ್ದಂಡೆ ಯೋಜನೆ, ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಮಂಜೂರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮೋದನೆ ನೀಡಲಾಗಿತ್ತು ಎಂದು ಹೇಳಿದರು.

ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಸಾಧನಾ ಸಮಾವೇಶ ನಡೆಸಲಾಗುತ್ತಿದೆ. ಚಿತ್ರದುರ್ಗದಲ್ಲಿ ನಡೆದ ಸಾಧನಾ ಸಮಾವೇಶಕ್ಕೆ 9 ಜಿಲ್ಲೆಗಳಿಂದ ಜನರನ್ನು ಕರೆತರಲು ಹಾಗೂ ಕಾರ್ಯಕ್ರಮ ಆಯೋಜಿಸಲು ಅಂದಾಜು ₹ 30 ಕೋಟಿ ಖರ್ಚು ಮಾಡಲಾಗಿದೆ. ಸರ್ಕಾರದ ಹಣವನ್ನು ದುರುಪಯೋಗ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಭೀಕರ ಬರಗಾಲದಲ್ಲಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಮಾತನಾಡಿ, ಬಿಜೆಪಿಯು  ರಾಜಕೀಯ ಹಾಗೂ ಸಂಘಟನೆ ಜತೆಗೆ ಪರಿಸರ ಸಂರಕ್ಷಣೆ, ಸ್ವಚ್ಛತೆಗೂ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕಾರಿಣಿಯ ಎಲ್ಲ ಸದಸ್ಯರೂ ಅವರ ಗ್ರಾಮಗಳಲ್ಲಿ, ಮಂಡಲಗಳ ವ್ಯಾಪ್ತಿಯಲ್ಲಿ ತಲಾ 50 ಗಿಡಗಳನ್ನು ನೆಡಬೇಕು ಎಂದು ಕರೆ ನೀಡಿದರು.

ಕಾರ್ಯಕರ್ತರು ಜಿಲ್ಲೆಯ ಆರೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು. ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಪೂರ್ಣಿಮಾ ಶ್ರೀನಿವಾಸ್, ಜಿ.ಎಂ.ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ, ಮಲ್ಲಿಕಾರ್ಜುನ್, ಜಯಪಾಲಯ್ಯ, ಮುರಳಿ, ಜಿಲ್ಲಾ ಉಪಾಧ್ಯಕ್ಷ ಎಂ.ವೈ.ಟಿ.ಸ್ವಾಮಿ, ಮಂಡಲ ಅಧ್ಯಕ್ಷ ರೇವಣ್ಣ ಅವರೂ ಇದ್ದರು.

ನಾಯಕನಹಟ್ಟಿ ಮಂಡಲ ರಚನೆ
ಮೊಳಕಾಲ್ಮುರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿ ದೊಡ್ಡದಿರುವ ಕಾರಣ ತಳಕು ಹಾಗೂ ನಾಯಕನಹಟ್ಟಿ ಹೋಬಳಿಯನ್ನು ಸೇರಿಸಿ ನೂತನ ಬಿಜೆಪಿ ಮಂಡಲ ರಚನೆ ಮಾಡಲಾಗಿದೆ. ಎಂ.ವೈ.ಟಿ.ಸ್ವಾಮಿ (ಅಧ್ಯಕ್ಷ), ಬಿ.ತಿಪ್ಪೇಶ್, ಪಿ.ಶಿವಣ್ಣ (ಪ್ರಧಾನ ಕಾರ್ಯದರ್ಶಿಗಳು) ಪದಾಧಿಕಾರಿಗಳಾಗಿ ಆಯ್ಕೆ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT