ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ

Last Updated 19 ಮೇ 2017, 5:10 IST
ಅಕ್ಷರ ಗಾತ್ರ

ಕೋಲಾರ: ‘ಸರ್ಕಾರಿ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ದಾಖಲಾತಿ ಕುಸಿಯುತ್ತಿದ್ದು, ಶಿಕ್ಷಣದ ಗುಣಮಟ್ಟ ಕಾಯ್ದುಕೊಂಡು ಶಾಲೆಗಳನ್ನು ಉಳಿಸುವ ಜವಾಬ್ದಾರಿ ಶಿಕ್ಷಕರದು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ಸರ್ಕಾರಿ ಶಾಲೆಗಳ ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿಗಳು (ಸಿಆರ್‌ಪಿ), ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು (ಬಿಆರ್‌ಪಿ) ಮತ್ತು ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಶಿಕ್ಷಣ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆಯಾಗುತ್ತಿರುವುದು ವಿಷಾದನೀಯ’ ಎಂದರು.

‘ಸರ್ಕಾರ ಪ್ರಾಥಮಿಕ ಶಿಕ್ಷಣ ನೀಡಲು ವರ್ಷಕ್ಕೆ ಒಂದು ಮಗುವಿಗೆ ಸುಮಾರು ₹ 21,000 ಖರ್ಚು ಮಾಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸಲು ಶಿಕ್ಷಕರು ಕಾಳಜಿ ವಹಿಸಬೇಕು. ಪಠ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪಠ್ಯೇತರ ಚಟುವಟಿಕೆಗಳನ್ನು ನಡೆಸಬೇಕು. ಪಠ್ಯೇತರ ಚಟುವಟಿಕೆಗಳಿಗೆ ಶಿಕ್ಷಕರನ್ನು ಹೊರಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಬೇಕು’ ಎಂದು ಹೇಳಿದರು.

‘ಶಾಲೆಗಳಲ್ಲಿ ಕುಡಿಯುವ ನೀರು, ಕಾಂಪೌಂಡ್, ಶೌಚಾಲಯ, ಮೈದಾನ, ಕಟ್ಟಡ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ಮುಖ್ಯ ಶಿಕ್ಷಕರು ಪಟ್ಟಿ ಮಾಡಿ ಕೊಟ್ಟರೆ ಅವುಗಳನ್ನು ಬಗೆಹರಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳಲ್ಲಿ ಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲು ಸೂಕ್ತ ನಿರ್ದೇಶನ ನೀಡಲಾಗುವುದು. ತಾಲ್ಲೂಕಿನ ಎಲ್ಲಾ ಅಂಗನವಾಡಿಗಳಿಗೆ ಸುಮಾರು 10 ಲಕ್ಷ ಪುಸ್ತಕಗಳನ್ನು ವಿತರಿಸಲಾಗುತ್ತದೆ. ಜತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮೇ 20ರಂದು ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು.

ಗ್ರಹವಿದ್ದಂತೆ: ‘ಶಿಕ್ಷಕರು ನವಗ್ರಹಗಳಲ್ಲಿ ಒಂದು ಗ್ರಹವಿದ್ದಂತೆ. ವಿದ್ಯಾರ್ಥಿಗಳು ಉತ್ತಮವಾಗಿ ಬೆಳೆದು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿದರೆ ಶಿಕ್ಷಕರ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ. ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದು. ಆದ ಕಾರಣ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಪ್ರತಿ ವರ್ಷ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಪ್ರತಿ ವರ್ಷ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಶಾಲೆ ತೊರೆದು ಖಾಸಗಿ ಶಾಲೆಗಳಿಗೆ ಸೇರುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣಗಳೇನು ಎಂಬುದನ್ನು ತಿಳಿದು ಸರ್ಕಾರಿ ಶಾಲೆಗಳ ಸ್ಥಿತಿಗತಿ ಸುಧಾರಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕಾಳಜಿ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT