ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರ ಸಹಕಾರದಿಂದ ಹಳ್ಳಿಗಳ ಅಭಿವೃದ್ಧಿ

Last Updated 21 ಮೇ 2017, 10:36 IST
ಅಕ್ಷರ ಗಾತ್ರ

ಕೋಲಾರ: ‘ಗ್ರಾಮಸ್ಥರು ಸಹಕಾರ ನೀಡಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ’ ಎಂದು ಉರಿಗಿಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಉರಿಗಿಲಿ ಗ್ರಾಮ ಪಂಚಾಯಿತಿಯಿಂದ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗ್ರಾಮ ಸಭೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಳ್ಳಿಗಳ ಅಭಿವೃದ್ಧಿಯಲ್ಲಿ ಅಧಿಕಾರಿಗಳಷ್ಟೇ ಸ್ಥಳೀಯರ ಪಾತ್ರವೂ ಇದೆ’ ಎಂದರು.

‘ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಆದರೆ, ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮತ್ತೊಂದೆಡೆ ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲವಾಗಿದೆ. ಇದರಿಂದು ಯೋಜನೆಗಳು ಯಶಸ್ವಿಯಾಗುತ್ತಿಲ್ಲ’ ಎಂದು ಹೇಳಿದರು.

ಗ್ರಾಮ ಸಭೆ ನೋಡಲ್ ಅಧಿಕಾರಿ ಕೃಷ್ಣಪ್ಪ ಮಾತನಾಡಿ, ‘ಸುಖಿ ರಾಜ್ಯ ನಿರ್ಮಾಣ ಗ್ರಾಮ ಪಂಚಾಯಿತಿಗಳಿಂದಲೇ ಸಾಧ್ಯ. ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ಇಲಾಖೆಗಳಿದ್ದು, ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅಧಿಕಾರಿಗಳು ಈ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಮೂಲಸೌಕರ್ಯ ಅಭಿವೃದ್ಧಿಯಿಂದ ಗ್ರಾಮಗಳು ಅಭಿವೃದ್ಧಿಯಾಗುತ್ತವೆ. ಸಮುದಾಯದ ಆಸ್ತಿ ರಕ್ಷಣೆಗೆ ಮತ್ತು ಗ್ರಾಮಾಭಿವೃದ್ಧಿಗೆ ಜನ ಸಹಕಾರ ನೀಡಬೇಕು’ ಎಂದು ತಿಳಿಸಿದರು.

ಕಚೇರಿಗೆ ಅಲೆಸುತ್ತಾರೆ: ‘ಪಹಣಿ ಕೊಡಲು ಕಂದಾಯ ಇಲಾಖೆ ಅಧಿಕಾರಿಗಳು ಜನರನ್ನು ಪದೇ ಪದೇ ಕಚೇರಿಗೆ ಅಲೆಸುತ್ತಾರೆ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಪಹಣಿ ಸಿಗುವಂತೆ ಮಾಡಿದರೆ ಅನುಕೂಲವಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸರ್ಕಾರ ನಿಗದಿಪಡಿಸಿರುವ ಹಳೆ ದರಕ್ಕೆ ಕೊಳವೆ ಬಾವಿ ಕೊರೆಯಲು ಗುತ್ತಿಗೆದಾರರು ಒಪ್ಪುತ್ತಿಲ್ಲ. ಈ ಸಂಗತಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಬೇಕು’ ಎಂದು ಉರಿಗಿಲಿ ಗ್ರಾಮ ಪಂಚಾಯಿತಿ ಸದಸ್ಯ ರುದ್ರಸ್ವಾಮಿ ಸಭೆಯಲ್ಲಿ ಮನವಿ ಮಾಡಿದರು.

ನೀರಿನ ಸಮಸ್ಯೆ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಮಾತನಾಡಿ, ‘ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ₹ 4 ಲಕ್ಷ ಅನುದಾನ ಮೀಸಲಿರಿಸಲಾಗಿದೆ. 2015–16ನೇ ಸಾಲಿನಲ್ಲಿ ಪಂಚಾಯಿತಿಗೆ ಬಂದಿದ್ದ ₹ 40 ಲಕ್ಷ ಅನುದಾನದಲ್ಲಿ ₹ 10 ಲಕ್ಷ ಬಳಕೆಯಾಗದೆ ಉಳಿದಿದೆ. ಇದರಲ್ಲಿ ₹ 3 ಲಕ್ಷವನ್ನು ಕಚೇರಿ ನವೀಕರಣಕ್ಕೆ ಬಳಸಲಾಗಿದೆ. ಉಳಿದ ಅನುದಾನವನ್ನು ನೀರಿನ ಸಮಸ್ಯೆ ಪರಿಹಾರಕ್ಕೆ ಬಳಕೆ ಮಾಡಲಾಗುತ್ತದೆ’ ಎಂದರು.

‘ಪ್ರಸಕ್ತ ಸಾಲಿನಲ್ಲಿ ಪಂಚಾಯಿತಿ ವ್ಯಾಪ್ತಿಗೆ 400 ಮನೆಗಳು ಮಂಜೂರಾಗಿದ್ದು, ಈ ಪೈಕಿ ಕೇವಲ 262 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 138 ಫಲಾನುಭವಿಗಳು ಮನೆ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿಲ್ಲ. ಈ ಫಲಾನುಭವಿಗಳಿಗೆ ಈಗಾಗಲೇ ತಿಳುವಳಿಕೆ ಪತ್ರ ಕಳುಹಿಸಲಾಗಿದೆ. ಇವರು ಮನೆ ನಿರ್ಮಿಸದಿದ್ದರೆ ಅನುದಾನ ಸರ್ಕಾರಕ್ಕೆ ವಾಪಸ್‌ ಹೋಗುತ್ತದೆ’ ಎಂದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಫಲಾನುಭವಿಗಳಿಗೆ ಕುರಿ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್, ಸದಸ್ಯರಾದ ವಿ.ನಾರಾಯಣರೆಡ್ಡಿ, ನಾಗೇಶ್, ಪಾಪಣ್ಣ, ಸುಗುಣಮ್ಮ, ಅರುಣಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT