ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಮಕ್ಕಳನ್ನು ವಂಚಿಸುತ್ತಿರುವ ಶಿಕ್ಷಣ ಸಂಸ್ಥೆಗಳು

Last Updated 23 ಮೇ 2017, 4:50 IST
ಅಕ್ಷರ ಗಾತ್ರ

ಕೋಲಾರ: ‘ಖಾಸಗಿ ಶಿಕ್ಷಣ ಸಂಸ್ಥೆಗಳು ಬಡ ಮಕ್ಕಳಿಗೆ ಶಿಕ್ಷಣ ನೀಡದೆ ವಂಚಿಸುತ್ತಿವೆ. ಇದನ್ನು ತಪ್ಪಿಸಲು ಸರ್ಕಾರಿ ಶಾಲೆಗಳ ಬಲವರ್ಧನೆಯ ಅಗತ್ಯವಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಅಳ್ವ ಅಭಿಪ್ರಾಯಪಟ್ಟರು.

ನಗರದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂಬ ಉದ್ದೇಶದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿಸುತ್ತಾರೆ. ಆದರೆ, ಸಕಾಲಕ್ಕೆ ಶುಲ್ಕ ಪಾವತಿಸದಿದ್ದರೆ ಶಿಕ್ಷಣ ಸಂಸ್ಥೆಯವರು ಮಕ್ಕಳಿಗೆ ಕಿರುಕುಳ ನೀಡುತ್ತಾರೆ. ಇಂತಹ ಪ್ರಕರಣಗಳು ರಾಜ್ಯದ ಹಲವೆಡೆ ನಡೆದಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ಮೂಲಕ ಮಕ್ಕಳ ದಾಖಲಾತಿ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕಲಿಕೆಗೆ ಅಗತ್ಯವಿರುವ ಸೌಕರ್ಯಗಳನ್ನು ಸರ್ಕಾರಿ ಶಾಲೆಗಳಿಗೆ ಒದಗಿಸಬೇಕು. ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರದಿಂದ ಜಾರಿಗೊಳ್ಳುವ ಯೋಜನೆಗಳ ಬಗ್ಗೆ ಅರಿವು ಮೂಡಿಸಿದಾಗ ಮಕ್ಕಳ ದಾಖಲಾತಿ ಹೆಚ್ಚುತ್ತದೆ’ ಎಂದು ಹೇಳಿದರು.

‘ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ, ಡೆಸ್ಕ್ ಸೌಲಭ್ಯ ಹಾಗೂ ವಿದ್ಯುತ್ ಸಂಪರ್ಕವನ್ನು ಕಡ್ಡಾಯವಾಗಿ ಕಲ್ಪಿಸಿರಬೇಕು. ಮುಂದಿನ ಶೈಕ್ಷಣಿಕ ವರ್ಷದೊಳಗೆ ಜಿಲ್ಲೆಯ ಯಾವುದೇ ಸರ್ಕಾರಿ ಶಾಲೆಯಲ್ಲಿ ಮೂಲಸೌಕರ್ಯ ಸಮಸ್ಯೆ ಇರಬಾರದು. ಗುಣಮಟ್ಟದ ಶಿಕ್ಷಣ ಹೆಚ್ಚು ಒತ್ತು ಕೊಡಿ’ ಎಂದು ಸಲಹೆ ನೀಡಿದರು.

ಸಾಮಾಜಿಕ ಹೊಣೆಗಾರಿಕೆ: ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಮಾತನಾಡಿ, ‘ಜಿಲ್ಲೆಯಲ್ಲಿ 1,832 ಸರ್ಕಾರಿ ಶಾಲೆಗಳಿದ್ದು, ಈ ಶಾಲೆಗಳಿಗೆ ಸಕಾಲಕ್ಕೆ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಜತೆಗೆ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್) ಕಾರ್ಪೊರೇಟ್‌ ಕಂಪೆನಿಗಳಿಂದ ಆರ್ಥಿಕ ನೆರವು ಪಡೆದು ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಕೆಲ ಶಾಲೆಗಳಿಗೆ ಆಟದ ಮೈದಾನ, ಗ್ರಂಥಾಲಯ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಪ್ರತಿ ವಾರ ಬಿಆರ್‌ಪಿ, ಸಿಆರ್‌ಪಿ ಹಾಗೂ ಮುಖ್ಯೋಪಾಧ್ಯಾಯರ ಸಭೆ ನಡೆಸಿ ಮಕ್ಕಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ವಿವರಿಸಿದರು.

ಶೌಚಾಲಯ ನಿರ್ಮಾಣ: ‘ಸರ್ಕಾರಿ ಶಾಲೆಗಳಲ್ಲಿನ್ನು ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ. ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಬಾಕಿ ಇರುವ ಶಾಲೆಗಳನ್ನು ಪಟ್ಟಿ ಮಾಡಿ ವಿಶೇಷ ಅನುದಾನ ಅಥವಾ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅನುದಾನದಲ್ಲಿ ಶೌಚಾಲಯ ನಿರ್ಮಿಸಲಾಗುತ್ತದೆ’ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಮಾಹಿತಿ ನೀಡಿದರು.

‘ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಏಳನೇ ಸ್ಥಾನ ಗಳಿಸಿದೆ. ಮಕ್ಕಳ ಶೈಕ್ಷಣಿಕ ಪ್ರಗತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಬಿಆರ್‌ಪಿ, ಸಿಆರ್‌ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ’ ಎಂದರು.

‘ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಶಿಕ್ಷಕರನ್ನು ನೇಮಕ ಮಾಡಿದರೆ ಪಠ್ಯ ಬೋಧನೆಗೆ ಅನುಕೂಲವಾಗುತ್ತದೆ. ಕೊಠಡಿಗಳ ಸಮಸ್ಯೆ ಇರುವ ಶಾಲೆಗಳ ಪಟ್ಟಿ ಮಾಡಿ, ಕೊಠಡಿಗಳ ನಿರ್ಮಾಣಕ್ಕೆ ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತದೆ’ ಎಂದು ತಿಳಿಸಿದರು. ಆಯೋಗದ ಸದಸ್ಯ ವೈ.ಮರಿಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

* * 

ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಣ ಇಲಾಖೆ ಮೇಲಿದೆ. ಮಕ್ಕಳನ್ನು ಶೋಷಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಲ್ಲಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ.
ಕೃಪಾ ಅಳ್ವ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT