ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಯಾಶೀಲರಾಗಿ ಗುಣಮಟ್ಟದ ಶಿಕ್ಷಣ ನೀಡಿ

Last Updated 23 ಮೇ 2017, 5:01 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಅನೇಕ ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಪ್ರಮುಖ ಪರಿಹಾರವಾಗಿರುವ ಕಾರಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಪ್ರತಿಯೊಬ್ಬರೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ‘ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತ ಜಿಲ್ಲಾಮಟ್ಟದ ಸಮಾಲೋಚನಾ ಸಭೆ’ಯಲ್ಲಿ ಅವರು ಮಾತನಾಡಿದರು. ‘ಇವತ್ತು ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳು ಹೆಚ್ಚಳವಾಗುವ ಜತೆಗೆ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠೇತ್ಯರವಾಗಿ ಗುಣಾತ್ಮಕ ಶಿಕ್ಷಣ ದೊರೆಯಬೇಕಾಗಿದೆ.

ಆದ್ದರಿಂದ ಶಾಲೆಗಳಲ್ಲಿ ಯಾವ ಬಗೆಯ ಮೂಲಸೌಕರ್ಯದ ಕೊರತೆ ಇದೆ ಮಾಹಿತಿ ಕೊಡಿ. ಈಗಾಗಲೇ 9 ಜಿಲ್ಲೆಗಳಲ್ಲಿ ಸಭೆ ನಡೆಸಿ ಮಾಹಿತಿ ಕಲೆ ಹಾಕಲಾಗಿದೆ. ಇಡೀ ರಾಜ್ಯ ಪ್ರವಾಸ ಮುಗಿದ ಬಳಿಕ ಈ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಗುತ್ತದೆ’ ಎಂದು ತಿಳಿಸಿದರು.

‘ವಿದ್ಯಾವಂತರಲ್ಲಿ ಸಮಾಜ ಪರಿವರ್ತನೆ ಮಾಡುವ ಶಕ್ತಿ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಗಂಭೀರವಾಗಿ ತೊಡಗಿಸಿಕೊಂಡು ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿಕೊಂಡು ಬೋಧನೆ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕು’ ಎಂದರು.

‘ಇವತ್ತು ಅಂಗನವಾಡಿಯಿಂದಲೇ ಮಕ್ಕಳನ್ನು ನೇರವಾಗಿ ಖಾಸಗಿ ಶಾಲೆಗಳಿಗೆ ಸೇರಿಸುವ ಪ್ರವೃತ್ತಿ ಕಾಣುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಜತೆಗೆ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಾಳ ಹಾಕಿ ಕಿತ್ತುಕೊಳ್ಳುತ್ತಿವೆ. ಇಂತಹ ಸ್ಥಿತಿಯಲ್ಲಿ ನಾವು ಅಭ್ಯಾಸದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಇಟ್ಟುಕೊಂಡು ಏನು ಮಾಡೋಣ’ ಎಂದು ಸಭೆಯಲ್ಲಿದ್ದ ಕೆಲ ಅಧಿಕಾರಿಗಳು ಪ್ರಶ್ನೆ ಎತ್ತಿದರು.

ಅದಕ್ಕೆ ಪ್ರತಿಕ್ರಿಯಿಸಿದ ಕೃಪಾ, ‘ಸರ್ಕಾರಿ ಶಾಲೆಗಳ ಶಿಕ್ಷಕರು ಮೊದಲು ತಮ್ಮೊಳಗಿನ ಕೀಳರಿಮೆ ತೊಡೆದು ಹಾಕಬೇಕು. ನನ್ನ ಶಾಲೆಯನ್ನು ನಾನು ಅಭಿವೃದ್ಧಿಪಡಿಸುತ್ತೇನೆ ಎನ್ನುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಪ್ರತಿ ಬಾರಿ ಉತ್ತಮ ಫಲಿತಾಂಶಕ್ಕೆ ಪ್ರಯತ್ನಿಸಬೇಕು. ಉತ್ತಮ ಮೂಲ ಸೌಕರ್ಯ ಮತ್ತು ಫಲಿತಾಂಶ ಇರುವ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಕೊರತೆ ಇರುವುದಿಲ್ಲ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಬೇಕು. ಆಯೋಗದ ವತಿಯಿಂದ ಕಳೆದ 6 ತಿಂಗಳಲ್ಲಿ ರಾಜ್ಯದಾದ್ಯಂತ ಬಾಲ್ಯ ವಿವಾಹ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಅಭಿಯಾನ ಮಾಡಿದ್ದೇವೆ. ಈಗ ಅದರ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಎರಡು ಬಸ್‌ಗಳ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಕಿರುಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜೆ. ಮಂಜುನಾಥ್ ಮಾತನಾಡಿ, ‘ಸರ್ಕಾರಿ ಶಿಕ್ಷಕರು ಖಾಸಗಿ ಶಾಲೆಗಳ ಶಿಕ್ಷಕರಿಗಿಂತ ದುಪ್ಪಟ್ಟು ಸಂಬಳ ಪಡೆಯುತ್ತಾರೆ. ಜತೆಗೆ ಶಾಲೆಗಳಿಗೆ ಸರ್ಕಾರ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಿ ಕೊಡುತ್ತದೆ. ಇಷ್ಟಾದರೂ ಖಾಸಗಿ ಶಿಕ್ಷಕರಲ್ಲಿರುವ ಕ್ಷಮತೆ, ಬದ್ಧತೆ ಸರ್ಕಾರಿ ಶಿಕ್ಷಕರಲ್ಲಿ ಏಕೆ ಕಂಡು ಬರುತ್ತಿಲ್ಲ? ಈ ಬಾರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕಳಪೆಯಾಗಿದೆ. ಈ ಬಗ್ಗೆ ಶಾಲೆ, ವಿಷಯವಾರು ವಿಶ್ಲೇಷಣೆ ನಡೆಸಿ ಕ್ರಮಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುನಿರಾಜು ಮಾತನಾಡಿ, ‘ಅಂಗನವಾಡಿ ಮಕ್ಕಳು ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಪ್ರಾಯೋಗಿಕವಾಗಿ ಅಂಗನವಾಡಿ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳಿಗೆ ಕೂಡ ವರ್ಗಾವಣೆ ಪ್ರಮಾಣ ಪತ್ರ ನೀಡುವ ವ್ಯವಸ್ಥಿತ ಪದ್ಧತಿ ಜಾರಿಗೆ ತರುತ್ತಿದ್ದೇವೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್. ಅನುರಾಧಾ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ವೈ.ಮರಿಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಶ್ವತ್ಥರೆಡ್ಡಿ, ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್‌ಪಿ) ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ (ಬಿಆರ್‌ಪಿ), ಶೈಕ್ಷಣಿಕ ಸಮನ್ವಯಾಧಿಕಾರಿಗಳು (ಇಸಿಒ), ಉಪ ಯೋಜನಾ ಸಮನ್ವಯಾಧಿಕಾರಿಗಳು, ವಿಷಯ ಪರಿವೀಕ್ಷಕರು ಭಾಗವಹಿಸಿದ್ದರು.

* * 

ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರತಿಯೊಬ್ಬರು ಕೈಜೋಡಿಸಿ ಕೆಲಸ ಮಾಡಿದರೆ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಜತೆಗೆ ಮಕ್ಕಳಿಗೆ ಉತ್ಕೃಷ್ಟ ಶಿಕ್ಷಣ ಕೊಡಲು ಸಾಧ್ಯವಿದೆ
ಕೃಪಾ ಆಳ್ವ
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT