ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಡಿವೈಎಸ್ಪಿ ಅಹವಾಲು ಸ್ವೀಕಾರ

Last Updated 26 ಮೇ 2017, 5:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಕೆಲಸಕ್ಕಾಗಿ ಅಲೆದಾಡಿಸಿದರೆ, ಲಂಚಕ್ಕೆ ಬೇಡಿಕೆ ಇಟ್ಟರೆ ಅಥವಾ ಅನುದಾನಗಳನ್ನು ದುರುಪಯೋಗಪಡಿಸಿಕೊಂಡಿದ್ದು ಗಮನಕ್ಕೆ ಬಂದರೆ ಸಾರ್ವಜನಿಕರು ಲೋಕಾಯುಕ್ತದಲ್ಲಿ ದೂರು ನೀಡಬೇಕು’ ಎಂದು ಲೋಕಾಯುಕ್ತ ಡಿವೈಎಸ್ಪಿ ಅಶೋಕ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ‘ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಅಡಿ ಪ್ರವೇಶ ನೀಡುವಾಗ ಹಣ ಪಡೆದರೆ, ಅಧಿಕಾರಿಗಳು ಸಕಾಲಕ್ಕೆ ಕಡತ ವಿಲೇವಾರಿ ಮಾಡದಿದ್ದರೆ, ಕೆಲಸದಲ್ಲಿ ಲೋಪ ಎಸಗಿದ್ದರೆ ನಾಗರಿಕರು ಲೋಕಾಯುಕ್ತಕ್ಕೆ ದೂರು ನೀಡಿದರೆ, ಕರ್ತವ್ಯಲೋಪ ಎಸಗುವ ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.

‘ಅಧಿಕಾರಿಗಳು ಇಲ್ಲದ ಸಬೂಬುಗಳನ್ನು ಹೇಳದೆ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ಸಕಾಲದಲ್ಲಿ ಸಾರ್ವಜನಿಕರಿಗೆ ಸೇವೆ ಹಾಗೂ ಸೌಲಭ್ಯಗಳನ್ನು ತಲುಪಿಸಬೇಕು. ಅಹವಾಲು ಸ್ವೀಕಾರ ಸಭೆಯ ಕುರಿತು ಪ್ರಚಾರ ಕೊರತೆ ಇರುವ ಕಾರಣ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರಲಿಲ್ಲ. ಸಮಸ್ಯೆಗಳನ್ನು ಎದುರಿಸುವ ಸ್ಥಳೀಯ ಲೋಕಾಯುಕ್ತ ಕಚೇರಿ ಸಂಪರ್ಕಿಸಿ ಸಹಾಯ ಪಡೆಯಬಹುದು’ ಎಂದರು.

ಸಭೆಯಲ್ಲಿ ಐದು ಜನರು ಭೂವ್ಯಾಜ್ಯ, ಭೂಪರಿವರ್ತನೆ ಮತ್ತು ನಗರಸಭೆ ಖಾತೆ ವಿಚಾರವಾಗಿ ಡಿವೈಎಸ್‌ಪಿ ಅವರಿಗೆ ದೂರು ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಿರಿಜಾಶಂಕರ್, ತಹಸೀಲ್ದಾರ್ ನರಸಿಂಹಮೂರ್ತಿ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT