ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್ ನಾಯಕರ ಭಿನ್ನಮತ ಶಮನಕ್ಕೆ ಕ್ರಮ’

Last Updated 27 ಮೇ 2017, 7:08 IST
ಅಕ್ಷರ ಗಾತ್ರ

ಕಲಬುರ್ಗಿ: ‘ಶಾಸಕರು ಮತ್ತು ಬ್ಲಾಕ್‌ ಸಮಿತಿ ಅಧ್ಯಕ್ಷರ ನಡುವೆ ಇರುವ ಭಿನ್ನಾಭಿಪ್ರಾಯ ಶಮನಗೊಳಿಸಲು ಜೂನ್‌ ಮೊದಲ ವಾರದಲ್ಲಿ ಸಭೆ ಕರೆಯಲಾಗುವುದು’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಎಲ್ಲರ ಅಹವಾಲು ಆಲಿಸಿ, ಪರಿಹರಿಸಲಾಗುವುದು. ಅವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು’ ಎಂದು ಹೇಳಿದರು.

‘ಬೆಂಗಳೂರಿನಲ್ಲಿ ಈಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೂ ಶಾಸಕರು ಮತ್ತು ಪಕ್ಷದ ಮುಖಂಡರಲ್ಲಿ ಭಿನ್ನಾಭಿಪ್ರಾಯ ಮರೆತು ಮುಂದಿನ ಚುನಾವಣೆವರೆಗೆ ಒಗ್ಗಟ್ಟು ಕಾಯ್ದುಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು.

‘ನಾಯಕತ್ವದ ಬಗ್ಗೆ ಬಹಿರಂಗವಾಗಿ ಟೀಕಿಸಿರುವ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ಎ.ಬಿ.ಮಾಲಕರೆಡ್ಡಿ, ಬಾಬುರಾವ್ ಚಿಂಚನಸೂರ ಮತ್ತು ಖಮರುಲ್‌ ಇಸ್ಲಾಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕೆಪಿಸಿಸಿಗೆ ಪತ್ರ ಬರೆಯಲಾಗಿದೆ’ ಎಂದರು.

‘ಇತ್ತೀಚೆಗೆ ನಡೆದ ಸಭೆಯಲ್ಲಿ ಶಾಸಕ ಖಮರುಲ್‌ ಇಸ್ಲಾಂ ಅವರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಲಬುರ್ಗಿ ನಗರ ಘಟಕ ರಚಿಸಿ, ಅದಕ್ಕೆ ಅಧ್ಯಕ್ಷರನ್ನು ನೇಮಿಸಲು ಒತ್ತಾಯಿಸಿದ್ದರು. ಆದರೆ ಅಂತಹ ಘಟಕ ರಚಿಸುವ ಅಗತ್ಯವಿಲ್ಲ’ ಎಂದು ತಿಳಿಸಿದರು.  

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಇದರ ಕುರಿತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಜನರಿಗೆ ತಿಳಿಸಬೇಕು. ಅವರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT