ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಐ ಕಾರ್ಯಕರ್ತರ ಪ್ರತಿಭಟನೆ

ಹೈದರಾಬಾದ್‌ ಕರ್ನಾಟಕದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ
Last Updated 11 ಜುಲೈ 2017, 7:15 IST
ಅಕ್ಷರ ಗಾತ್ರ

ಬೀದರ್: ಹೈದರಾಬಾದ್ ಕರ್ನಾಟಕ ಭಾಗದ ಆರೂ ಜಿಲ್ಲೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಸಿಪಿಐ)ದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.

ಸಂವಿಧಾನದ 371(ಜೆ) ಕಲಂಗೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ. ಆದರೆ, ಈ ಭಾಗದ ಶಾಸಕರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತಿದ್ದುಪಡಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಶಿಕ್ಷಣ, ಆರೋಗ್ಯ ಮತ್ತು ಕೃಷಿ ಇಲಾಖೆಗಳಲ್ಲಿ ಪ್ರಭಾರ ಅಧಿಕಾರಿಗಳೇ ಕೆಲಸ ನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳ ನಡುವೆ ಹುದ್ದೆಗಳ ಪ್ರಭಾರ ಪಡೆಯಲು ಜಿದ್ದಾಜಿದ್ದಿ ಏರ್ಪಟ್ಟು ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಡುತ್ತಿದೆ ಎಂದು ದೂರಿದರು.

ಪಹಣಿಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಆದೇಶ ನೀಡಿದ್ದರೂ ಅಧಿಕಾರಿಗಳು ಕಂದಾಯ ಅದಾಲತ್ ನಡೆಸುತ್ತಿಲ್ಲ. ಪಹಣಿ ತಿದ್ದುಪಡಿಗಾಗಿ ಜನರಿಂದ ಅರ್ಜಿ ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು. ಆರೂ ಜಿಲ್ಲೆಗಳ ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಯಲ್ಲಿನ ಎಲ್ಲ ಖಾಲಿ ಹುದ್ದೆಗಳನ್ನು ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಪ್ರಕಾರ ತುಂಬಬೇಕು. 

ರಾಜ್ಯದ ಇತರ ಭಾಗಗಳಲ್ಲಿ ನೇಮಕಾತಿಯಲ್ಲಿ ಈ ಭಾಗದವರಿಗೆ ಶೇ 8 ರಷ್ಟು ಮೀಸಲು ಜಾರಿಗೊಳಿಸಬೇಕು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಮತ್ತಿತರ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು.

ಕೈಗಾರಿಕೆ ಮತ್ತು ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಬೇಕು. ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಬೇಕು. ಪಹಣಿ ತಿದ್ದುಪಡಿಗಾಗಿ ಕಂದಾಯ ಅದಾಲತ್ ನಡೆಸಬೇಕು. ರೈತರ ಹೊಲಗಳ ಸರ್ವೇ ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ಸಹ ಕಾರ್ಯದರ್ಶಿಗಳಾದ ಪ್ರಭುರಾಜ ಕರನಾಯಕ್, ಶಂಕರರಾವ್ ಕಮಠಾಣ, ಸದಸ್ಯರಾದ ವೀರಶೆಟ್ಟಿ ಕುಂಬಾರ, ಬಸವರಾಜ ಮಾಲಿಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT