ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರ ಗೌರವಧನ ಹೆಚ್ಚಳಕ್ಕೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Last Updated 11 ಜುಲೈ 2017, 7:32 IST
ಅಕ್ಷರ ಗಾತ್ರ

ರಾಯಚೂರು: ‘ಅಂಗನವಾಡಿ ನೌಕರರ ಗೌರವಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿ ಬೇಡಿಕೆ ದಿನ ಆಚರಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿದರು.

‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನುದಾನ ಕಡಿತಗೊಳಿಸಿ ಅಂಗನವಾಡಿಗಳನ್ನು ಹಂತಹಂತವಾಗಿ ಖಾಸಗೀಕರಣಗೊಳಿಸುವ ಮೂಲಕ ಕಾರ್ಮಿಕರ ಸಂವಿಧಾನ ಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಕನಿಷ್ಠ ಕೂಲಿ ವ್ಯಾಪ್ತಿಗೂ ಕಾರ್ಮಿಕರನ್ನು ಒಳಪಡಿಸದೆ ದುಡಿಸಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ಆರಂಭಿಸಬೇಕು. ಅನುದಾನ ಕಡಿತಗೊಳಿಸದೆ ಖಾಸಗಿಕರಣ ಪ್ರಕ್ರಿಯೆ ಕೈಬಿಡಬೇಕು. ಸರ್ಕಾರಿ ಯೋಜನೆಗಳಡಿ ದುಡಿಯುವ ಎಲ್ಲರಿಗೂ ಕನಿಷ್ಠ ವೇತನ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಕೆಲಸದ ಭದ್ರತೆ ಒದಗಿಸಿ ಕಾರ್ಮಿಕರ ಹಿತಕ್ಕೆ ಮಾರಕವಾದ ಬದಲಾವಣೆ ಮಾಡಬಾರದು. ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳು, ಸಾಮಾಜಿಕ ಭದ್ರತಾ ನಿಧಿ ಸ್ಥಾಪನೆ ಹಾಗೂ ಸಾಮಾಜಿಕ ರಕ್ಷಣಾ ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸಬೇಕು. ವಸತಿ ಹೀನ ಕಾರ್ಮಿಕರಿಗೆ ವಸತಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣ ಮಾಡುವುದು ಸರಿಯಲ್ಲ’ ಎಂದು ದೂರಿದರು.

‘ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಲು ಕಾನೂನು ಜಾರಿಗೊಳಿಸಬೇಕು. ಕಾರ್ಮಿಕರ ಸಂಘಟನೆಗೆ ಮಾನ್ಯತೆ ನೀಡುವ ಕಾನೂನು ಜಾರಿಗೊಳಿಸಬೇಕು. ಸರ್ಕಾರಿ ಯೋಜನೆಗಳ ಖಾಸಗೀಕರಣ ಕೈಬಿಡಬೇಕು.

ಪ್ರತಿ ಜಿಲ್ಲೆಯಲ್ಲೂ ಕಾರ್ಮಿಕ ನ್ಯಾಯಾಲಯ ಸ್ಥಾಪನೆ ಮಾಡಬೇಕು. 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸು ಜಾರಿಗೊಳಿಸಬೇಕು. ಮಕ್ಕಳ ಹಾಜರಾತಿಗೆ ತಕ್ಕಂತೆ ವೇತನ ನೀಡುವ ಪ್ರಸ್ತಾವನೆ ಕೈಬಿಟ್ಟು, ದಿನದ ಕೆಲಸದ ಆಧಾರದಲ್ಲಿ ನೀಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕ ಅಧ್ಯಕ್ಷೆ ಎಚ್‌.ಪದ್ಮಾ, ಪಾರ್ವತಿ, ಗಂಗಮ್ಮ, ವರಲಕ್ಷ್ಮಿ, ಗೋಕರಮ್ಮ, ಮಲ್ಲಿಕಾ, ಆದಿಲಕ್ಷ್ಮಿ, ಸೀತಾ, ಪಾರ್ವತಿ, ಶರಣಬಸವ ಸೇರಿದಂತೆ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT