ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಸ್ತಾವ

Last Updated 14 ಜುಲೈ 2017, 7:10 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಗೆ ಅಗತ್ಯಕ್ಕಿಂತ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಪ್ರತಿ ಜಿಲ್ಲೆಗೂ ಸರ್ಕಾರ ಅನುದಾನ ನಿಗದಿಪಡಿಸಿದೆ. ಆದರೆ, ಜಿಲ್ಲೆಯ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಇತರೆ ಜಿಲ್ಲೆಗಳಿಗೆ ಕೊಡುವುಷ್ಟೇ ಅನುದಾನವನ್ನು ಜಿಲ್ಲೆಗೂ ಬಿಡುಗಡೆ ಮಾಡಿದರೆ ಸಮಸ್ಯೆಯಾಗುತ್ತದೆ’ ಎಂದರು.

‘ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ಬರ ಪರಿಸ್ಥಿತಿ ಇದೆ. ಕೆರೆ ಹಾಗೂ ಕೊಳವೆ ಬಾವಿಗಳಲ್ಲಿ ನೀರು ಬತ್ತಿದ್ದು, ಕೃಷಿ ನಿರ್ವಹಣೆ ಕಷ್ಟವಾಗಿದೆ. ಆದ ಕಾರಣ ಅಧಿಕಾರಿಗಳು ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಬೇಕು. ಅನುದಾನ ಪ್ರಮಾಣವು ಅಧಿಕಾರಿಗಳು ಕಳುಹಿಸುವ ಪ್ರಸ್ತಾವದ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಹೇಳಿದರು.

ಸಮಗ್ರ ಅಭಿಯಾನ: ‘ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಸಮಗ್ರ ಕೃಷಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಯೋಜನೆಗಳ ಬಗ್ಗೆ ಪ್ರಚಾರ ನಡೆಸಲಾಗುತ್ತಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ವಿವರಿಸಿದರು.

‘ಇಲಾಖೆ ಸಹಾಯಕ ನಿರ್ದೇಶಕರು ಪ್ರತಿ ಹೋಬಳಿ ಕೇಂದ್ರದಲ್ಲಿ ಅಭಿಯಾನ ನಡೆಸಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ 8,590 ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, ಈವರೆಗೆ 32 ಕ್ವಿಂಟಾಲ್‌ ಬಿತ್ತನೆ ಬೀಜ ವಿತರಿಸಲಾಗಿದೆ. ರಾಗಿ, ತೊಗರಿ, ಅಲಸಂದೆ, ಉರುಳಿ ಬಿತ್ತನೆ ಬೀಜ ದಾಸ್ತಾನು ಇದೆ.

ಬಿತ್ತನೆ ಬೀಜಕ್ಕಾಗಿ ಅರ್ಜಿ ಹಾಕಿರುವ ಸಾಮಾನ್ಯ ವರ್ಗದ ರೈತರಿಗೆ ಶೇ 50 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 75ರ ರಿಯಾಯಿತಿ ದರದಲ್ಲಿ ಬೀಜ ವಿತರಿಸಲಾಗುತ್ತಿದೆ’ ಎಂದರು.

ಅಧಿಕಾರಿಗಳು ಸಿಗಲ್ಲ: ‘ಬಂಗಾರಪೇಟೆ ತಾಲ್ಲೂಕಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಯಾರೆಂಬುದು ಗೊತ್ತಿಲ್ಲ. ಕಚೇರಿಗೆ ಹೋದರೂ ಅಧಿಕಾರಿಗಳು ಸಿಗುವುದಿಲ್ಲ. ಮೊಬೈಲ್‌ಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಏನೇ ಕಾರ್ಯಕ್ರಮ ಮಾಡಿದರೂ ಜನಪ್ರತಿನಿಧಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇಂತಹ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆಯೇ’ ಎಂದು ಸಮಿತಿ ಸದಸ್ಯೆ ಪಾರ್ವತಮ್ಮ ಪ್ರಶ್ನಿಸಿದರು.

ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ, ‘ರೈತರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ ಪರಿಹರಿಸುವಂತೆ ಪ್ರತಿ ಸಭೆಯಲ್ಲೂ ಹೇಳುತ್ತೇವೆ. ಆದರೂ ಅಧಿಕಾರಿಗಳ ಧೋರಣೆ ಬದಲಾಗಿಲ್ಲ. ಅಧಿಕಾರಿಗಳಿಗೆ ಜನಪರವಾಗಿ ಕೆಲಸ ಮಾಡುವ ಬದ್ಧತೆ ಇಲ್ಲ’ ಎಂದು ಕಿಡಿಕಾರಿದರು.

ಸದಸ್ಯೆ ನಾಗವೇಣಿ ಮಾತನಾಡಿ, ‘ರೈತರ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಕ್ಕಿರುವ ಬಗ್ಗೆ ಮಾಹಿತಿ ನೀಡುತ್ತೀರಿ. ಬೆಳೆಗೆ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇರುತ್ತದೆ. ಆದರೆ, ಹೊಸ ತಂತ್ರಜ್ಞಾನದ ಬಗ್ಗೆ ರೈತರಿಗೆ ತರಬೇತಿ ಕೊಡುವುದಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.

ನೀಲಗಿರಿ ತೆರವು: ‘ನೀಲಗಿರಿ ಮರಗಳನ್ನು ತೆರವುಗೊಳಿಸಿ ತೋಟಗಾರಿಕೆ ಬೆಳೆಬೆಳೆಯುತ್ತಿರುವ ರೈತರಿಗೆ ಇಲಾಖೆಯಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಜತೆಗೆ ನೀಲಗಿರಿ ಮರಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹೀಗಾಗಿ ರೈತರು ಸ್ವಪ್ರೇರಣೆಯಿಂದ ನೀಲಗಿರಿ ತೆರವಿಗೆ ಮುಂದಾಗುತ್ತಿದ್ದಾರೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ.ಎಸ್.ರಾಜು ತಿಳಿಸಿದರು.

‘ರೈತರಿಗೆ ಒತ್ತಾಯ ಮಾಡಿ ನೀಲಗಿರಿ ತೆರವುಗೊಳಿಸುವಂತೆ ಹೇಳಲು ಆಗುವುದಿಲ್ಲ. ನೀಲಗಿರಿ ಮರಗಳನ್ನು ಕಡಿದು ಹಾಕಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ತೋರುವ ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಈಗಾಗಲೇ ಸಾಕಷ್ಟು ರೈತರಿಗೆ ನರೇಗಾ ಅಡಿ ಪ್ರೋತ್ಸಾಹಧನ ನೀಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಬಿ.ಬಿ. ಕಾವೇರಿ ಹೇಳಿದರು. ಸಮಿತಿ ಸದಸ್ಯ ಅರವಿಂದ್, ಜಿಲ್ಲಾ ಪಂಚಾಯಿತಿ ಉಪ ನಿರ್ದೇಶಕ ಲಕ್ಷ್ಮೀ ನಾರಾಯಣ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT