ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕ ಮಕ್ಕಳ ಸಮೀಕ್ಷೆಗೆ ಡಿ.ಸಿ ಸೂಚನೆ

Last Updated 16 ಜುಲೈ 2017, 10:30 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು  ಪಂಗಡದ ಅಪೌಷ್ಟಿಕಮಕ್ಕಳಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿ ಅವರ ಆರೋಗ್ಯದಲ್ಲಿ ಸುಧಾರಣೆಯಾದ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಶನಿವಾರ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಪೌಷ್ಟಿಕ ಮಕ್ಕಳನ್ನು ಶಿಶು ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಂಟಿಯಾಗಿ ಸಮೀಕ್ಷೆ ನಡೆಸಿ ನೈಜ ಅಂಕಿ–ಅಂಶದ ಮಾಹಿತಿ ನೀಡುವಂತೆ ಸೂಚಿಸಲಾಯಿತು.

ಶಾಲೆಗಳಲ್ಲಿ ಬಿಸಿಯೂಟದ ಕೋಣೆಯನ್ನು ಸ್ವಚ್ಛವಾಗಿಡುವಂತೆ ಜಿಲ್ಲಾಧಿಕಾರಿ ಇದೇ ವೇಳೆ ಸೂಚಿಸಿದರು. ಜಿಲ್ಲೆಯಲ್ಲಿರುವ ಒಟ್ಟು ಮಕ್ಕಳ ಪೈಕಿ ಪರಿಶಿಷ್ಟ ಜಾತಿಯ 60,699 ಹಾಗೂ ಪರಿಶಿಷ್ಟ ಪಂಗಡದ 17,241 ಮಕ್ಕಳು ಇದ್ದಾರೆ ಎಂದು ಸಭೆಗೆ ತಿಳಿಸಲಾಯಿತು. ನಗರಾಭಿವೃದ್ದಿ ಯೋಜನೆಯಡಿ ನಗರಸಭೆ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಚುರುಕಾಗಿ ಕೆಲಸ ನಿರ್ವಹಿಸಬೇಕು ಎಂದರು. ನಂತರ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.

ವಿಶೇಷ ಘಟಕ ಯೋಜನೆಯಡಿ ₹ 10.06 ಕೋಟಿ ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ ₹ 2.48 ಕೋಟಿ ಖರ್ಚು ಮಾಡಲಾಗಿದೆ. ಗಿರಿಜನ ಉಪಯೋಜನೆಯಡಿ ₹ 4.81 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ₹ 1.95 ಖರ್ಚು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಶಿವಾನಂದ ಕುಂಬಾರ ಸಭೆಗೆ ತಿಳಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎಸ್‌. ಕರಿಚನ್ನವರ, ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎ.ಎನ್. ದೇಸಾಯಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT