ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ವಾಪಸ್‌ ಹೋದರೆ ಶಿಸ್ತುಕ್ರಮ

Last Updated 20 ಜುಲೈ 2017, 6:50 IST
ಅಕ್ಷರ ಗಾತ್ರ

ಕೋಲಾರ: ‘ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಅನುದಾನ ಸಮರ್ಪಕವಾಗಿ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋದರೆ ಶಿಸ್ತುಕ್ರಮ ಜರುಗಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅಧಿಕಾರಿ ಗಳಿಗೆ ಎಚ್ಚರಿಕೆ ನೀಡಿದರು.

ನಗರದಲ್ಲಿ ಬುಧವಾರ ನಡೆದ ಎಸ್‌ಸಿಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಶೇ 35ರಷ್ಟು ಮಂದಿ ಪರಿಶಿಷ್ಟ ಜಾತಿ, ಪಂಗಡದವರಿದ್ದು, ಅವರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನು ದಾನ ಬಿಡುಗಡೆ ಮಾಡಿದೆ’ ಎಂದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಅರ್ಹರಿಗೆ ಸರ್ಕಾರದ ಸವಲತ್ತುಗಳು ಸಕಾಲಕ್ಕೆ ತಲುಪಬೇಕು. ಯೋಜನೆ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ ತಕ್ಷಣವೇ ನನ್ನ ಹಾಗೂ ಸಿಇಒ ಗಮನಕ್ಕೆ ತಂದು ಪರಿಹರಿಸಬೇಕು’ ಎಂದು ಸೂಚಿಸಿದರು.

‘ಸಮಾಜ ಕಲ್ಯಾಣ ಇಲಾಖೆ ಮಾರ್ಗಸೂಚಿ ಪ್ರಕಾರ ಕ್ರಿಯಾಯೋಜನೆ ರೂಪಿಸಿ ಅನುಮೋದನೆ ಪಡೆದ ನಂತರ ಫಲಾನುಭವಿಗಳ ಆಯ್ಕೆ, ಸೌಲಭ್ಯ ವಿತರಣೆ ಮತ್ತು ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು. ಹಳೇ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನ ಅನುದಾನ ಬಳಕೆ ಮಾಡಬೇಡಿ. ಯಾವ ವರ್ಷದ ಕೆಲಸವಾಗಿರುತ್ತದೆಯೊ ಅದೇ ವರ್ಷದ ಅನುದಾನ ಬಳಕೆ ಮಾಡಬೇಕು. ಅನುದಾನದ ಕೊರತೆಯಿದ್ದರೆ ಮಾತ್ರ ಮತ್ತೊಂದು ಸಾಲಿನ ಹಣ ಉಪಯೋಗಿಸಬೇಕು’ ಎಂದು ಹೇಳಿದರು.

ಅಧಿಕಾರಿಗಳಿಗೆ ತರಾಟೆ: ‘ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅನುಕೂಲಕ್ಕಾಗಿ ಭವನಗಳನ್ನು ನಿರ್ಮಿಸಲು ನಿವೇಶನ ನೀಡಲಾಗಿತ್ತು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಆರಂಭವಾಗಿಲ್ಲ. ಶೀಘ್ರವೇ ಟೆಂಡರ್ ಕರೆದು ಕೆಲಸ ಆರಂಭಿಸಲು ಸಮಸ್ಯೆ ಏನು’ ಎಂದು ಅಂಬೇಡ್ಕರ್ ನಿಗಮದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿ ವೇತನ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ‘2013–2014 ಹಾಗೂ 2014–2015ನೇ ಸಾಲಿನ ಬಾಕಿ ವಿದ್ಯಾರ್ಥಿವೇತನವನ್ನು ಸರ್ಕಾರದ ನಿಯಮದ ಪ್ರಕಾರ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು. ವಿದ್ಯಾರ್ಥಿವೇತನಕ್ಕೆ ಎಷ್ಟು ಹಣಬೇಕೆಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ವಿದ್ಯಾರ್ಥಿ ವೇತನ ಹಂಚಿಕೆ ಮಾಡಬೇಕು’ ಎಂದರು.

‘ಎಸ್‌ಸಿಪಿ ಹಾಗೂ ಟಿಎಸ್‌ಪಿ ಅಡಿ ಬಿಡುಗಡೆಯಾಗಿರುವ ಅನುದಾನವನ್ನು ಮೊದಲ ಹಂತದಲ್ಲಿ ವಿವಿಧ ಇಲಾಖೆ ಗಳಿಗೆ ಹಂಚಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಯಣ್ಣ ಮಾಹಿತಿ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಪ್ರಭಾರ) ಕೆ.ಜಿ.ರಂಗಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ಭಾಸ್ಕರ್‌ ಸಭೆಯಲ್ಲಿ ಹಾಜರಿದ್ದರು.

**

ಸಭೆಗೆ ಕೆಲ ಅಧಿಕಾರಿಗಳು ಕಚೇರಿ ಸಿಬ್ಬಂದಿ ಕಳುಹಿಸಿ ದ್ದಾರೆ. ಗೈರಾಗಿರುವ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಕಾರಣ ಕೇಳಿ ಶೋಕಾಸ್‌ ನೋಟಿಸ್ ಜಾರಿ ಮಾಡಬೇಕು.
-ಕೆ.ವಿ.ತ್ರಿಲೋಕಚಂದ್ರ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT