ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ನಿಲ್ದಾಣಗಳಲ್ಲಿ ಹಿಂದಿ ಫಲಕಗಳಿಗೆ ಮಸಿ: 36 ಎಫ್‌ಐಆರ್‌ ದಾಖಲು

Last Updated 21 ಜುಲೈ 2017, 20:19 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ನಿಲ್ದಾಣಗಳಲ್ಲಿ ಗುರುವಾರ ಹಿಂದಿ ಫಲಕಗಳಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ ‘ಕರ್ನಾಟಕ ರಕ್ಷಣಾ ವೇದಿಕೆ’ (ನಾರಾಯಣಗೌಡ ಬಣ) ಕಾರ್ಯಕರ್ತರ ವಿರುದ್ಧ ಪೊಲೀಸರು, 36 ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

‘ಸಮಾಜದ ಸಾಮರಸ್ಯ ಹಾಳು ಮಾಡಿದ (ಐಪಿಸಿ 153–ಎ) ಆರೋಪದಡಿ ರಾಜಾಜಿನಗರ, ಪೀಣ್ಯ, ಮಹಾಲಕ್ಷ್ಮಿ ಲೇಔಟ್‌, ಕಬ್ಬನ್ ಪಾರ್ಕ್, ಹಲಸೂರು ಗೇಟ್, ಉಪ್ಪಾರಪೇಟೆ, ಮಾಗಡಿ ರಸ್ತೆ, ಇಂದಿರಾನಗರ  ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದರು.

‘ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೂ ಕಾರ್ಯಕರ್ತರು ಹಾನಿಯನ್ನುಂಟು ಮಾಡಿದ್ದಾರೆ. ಆ ಸಂಬಂಧವೂ ಕೆಲವರ ಮೇಲೆ ಪ್ರಕರಣ ದಾಖಲಿಸಿದ್ದೇವೆ’ ಎಂದರು.

ಈ ಬಗ್ಗೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, ‘ಹಿಂದಿ ಹೇರಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಸಾಂಕೇತಿಕವಾಗಿ ಹಿಂದಿ ಫಲಕಗಳಿಗೆ ಮಸಿ ಬಳಿದಿದ್ದೇವೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಮಾಡಿಲ್ಲ.  ಆದರೆ, ಪೊಲೀಸರು  ಸಮಾಜದ ಸಾಮರಸ್ಯ ಹಾಳು ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ನಗರದಲ್ಲಿ ಹಿಂದಿ ಭಾಷೆಯ ಐಪಿಎಸ್‌ ಅಧಿಕಾರಿಗಳು ಹೆಚ್ಚಿದ್ದಾರೆ. ಅವರ ಒತ್ತಡದಿಂದಾಗಿ ಕೆಳಹಂತದ ಅಧಿಕಾರಿಗಳು, ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ’ ಎಂದು ದೂರಿದರು.

‘ಎಫ್‌ಐಆರ್‌ ದಾಖಲಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಮೆಟ್ರೊದಲ್ಲಿ ಹಿಂದಿ ನಿಷೇಧ ಮಾಡುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT