ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ’

Last Updated 22 ಜುಲೈ 2017, 9:02 IST
ಅಕ್ಷರ ಗಾತ್ರ

ಬಾಗಲಕೋಟೆ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಇದೇ 29 ರಂದು ನಗರದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಗೊಳ್ಳಿ ರಾಯಣ್ಣಾ ಯುವ ಘರ್ಜನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ವೀರಣ್ಣ ಹಳೇಗೌಡರ ಹೇಳಿದರು. ‘ಸಮಾಜದ ಈ ಬೇಡಿಕೆಯ ಈಡೇರಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಈ ಸಮಾವೇಶದ ಮೂಲಕ ಸ್ಪಷ್ಟ ಎಚ್ಚರಿಕೆ ನೀಡಲಾಗುವುದು’ ಎಂದು ಹೇಳಿದರು.

ಸಮಾವೇಶದ ಭಿತ್ತಿಪತ್ರಗಳನ್ನು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಜಿಲ್ಲಾ ಕುರುಬರ ಸಂಘ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ನೇತೃತ್ವದಲ್ಲಿ ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾಜದ ಲಕ್ಷಾಂತರ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶಾಸಕರಾದ ವರ್ತೂರು ಪ್ರಕಾಶ್, ಎಚ್.ವೈ.ಮೇಟಿ, ಬಿ.ಬಿ.ಚಿಮ್ಮನಕಟ್ಟಿ, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಮಾಜಿ ಸಚಿವರಾದ ಎಚ್. ವಿಶ್ವನಾಥ್, ಬಂಡೆಪ್ಪ ಕಾಶಂಪುರ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಅಹಿಂದ ಮುಖಂಡ ಕೆ.ಮುಕುಡಪ್ಪ, ಚಿತ್ರನಟ ಯೋಗೀಶ್‌ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸಮಾಜದ ಮುಖಂಡರಾದ ಅರವಿಂದ ದಳವಾಯಿ, ಶ್ರೀಶೈಲ ದಳವಾಯಿ, ರಾಜಶೇಖರ ದೊಡ್ಡಣ್ಣ, ಡಾ.ದೇವರಾಜ ಪಾಟೀಲ, ಟಿ.ಪಿ.ಸಿದ್ದರಾಜು, ಮಹೇಶ ಹೊಸಗೌಡರ, ಎಸ್.ವೈ.ಕುಳಗೇರಿ, ವಿಠ್ಠಲ ಯಾಕನಿ, ಕಾಶಿನಾಥ ಹುಡೇದ, ಎಂ.ಎಲ್.ಶಾಂತಗಿರಿ, ಎಸ್.ಎಸ್.ಪಾಟೀಲ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಬಾಯಕ್ಕಾ ಮೇಟಿ, ಹನುಮವ್ವ ಕರಿಹೊಳೆ, ಸುಜಾತ ಸಿಂಗಾಡೆ, ಕವಿತಾ ದಡ್ಡಿ, ಚಂದವ್ವ ಓಲೇಕಾರ, ವಿರೇಶ ಉಂಡೋಡಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕುರುಬ ಸಮಾಜ ಅತ್ಯಂತ ಹಿಂದುಳಿದಿದೆ. ಪರಿಶಿಷ್ಟ ಪಂಗಡದ ಮೀಸಲಾತಿ ಸೌಲಭ್ಯ ಕಲ್ಪಿಸಿದಲ್ಲಿ ಮಾತ್ರ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಪ್ರಗತಿ ಕಾಣಲು ಸಾಧ್ಯವಿದೆ. ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡ ಬರಲಾಗಿದೆ.

ಆದರೆ ಯಾವುದೇ ಸರ್ಕಾರ ನಮ್ಮ ಬೇಡಿಕೆಗೆ ಸರಿಯಾಗಿ ಸ್ಪಂದಿಸಿಲ್ಲ. ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೂಡ ಅದೇ ಧೋರಣೆ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಪೊಳ್ಳು ಭರವಸೆ ನೀಡುವುದರಲ್ಲಿಯೆ ಕಾಲಹರಣ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ಸಿದ್ದಾಪುರ, ಸಂಗೊಳ್ಳಿ ರಾಯಣ್ಣ ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ರಾಧಾ ಆಕಳವಾಡಿ, ಮುಖಂಡರಾದ ಕಲಾವತಿ ರಾಜೂರ, ಮಲ್ಲಿಕಾರ್ಜುನ ಹುನಗುಂದ, ಶಿವು ಹನುಮಕ್ಕನ್ನವರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT