ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಅನುಷ್ಠಾನದಲ್ಲಿ ಹಿನ್ನಡೆ ಸಲ್ಲದು

Last Updated 27 ಜುಲೈ 2017, 4:56 IST
ಅಕ್ಷರ ಗಾತ್ರ

ಸೊರಬ: ಜನಸಂಖ್ಯೆ ಹೆಚ್ಚುತ್ತಿರುವಂತೆ ಅಪರಾಧಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಹೀಗಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ನೈತಿಕ ಶಿಕ್ಷಣದ ಅವಶ್ಯಕತೆ ಇದೆ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲನ್ಯಾಯ ಕಾಯ್ದೆ 2000 ಹಾಗೂ ತಿದ್ದುಪಡಿ ಕಾಯ್ದೆ 2016ರ ಅನುಷ್ಠಾನ ಕುರಿತು ವಿವಿಧ ಇಲಾಖಾಧಿಕಾರಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ  ಶಿಕ್ಷಣವು ವ್ಯಾಪಾರೀಕರಣವಾಗಿದೆ. ಮೌಲ್ಯಯುತ ಮತ್ತು ಗುಣಾತ್ಮಕ ಶಿಕ್ಷಣದ ಅಗತ್ಯವಿದೆ. ಕಡ್ಡಾಯ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದ್ದರೂ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ವಿವಿಧ ಕಾಯ್ದೆ-ಕಾನೂನುಗಳು ರಚನೆಯಾದರೂ ಅವುಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗದೆ ಕಾನೂನಿನ ದುರ್ಬಳಕೆಯಾಗುತ್ತಿದೆ. ಹೀಗಾಗಿ ಕಾನೂನುಗಳನ್ನು ಜಾರಿಗೆ ತರುವಲ್ಲಿ ಆಡಳಿತ ವ್ಯವಸ್ಥೆ ಹಿಂದೆ ಬೀಳಬಾರದು ಎಂದು ಹೇಳಿದರು.

ಇಂದು ಪಾಲಕರು ಧಾವಂತದ ದುಡಿಮೆಯಲ್ಲಿ ಮಕ್ಕಳ ಬೆಳವಣಿಗೆಯ ಕಡೆ ಗಮನ ನೀಡುತ್ತಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಕ್ಕಳ ಭವಿಷ್ಯದ ಬಗ್ಗೆ ಗಮನ ನೀಡಬೇಕು. ಜತೆಗೆ ಅವರ ನೈತಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಂಜುನಾಥ್ ಮಾತನಾಡಿ, ‘ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಗುಣಮಟ್ಟದ ಶಿಕ್ಷಣ ಸಿಕ್ಕರೆ ಪರಿಪೂರ್ಣ ವ್ಯಕ್ತಿಗಳಾಗಿ ಮಕ್ಕಳು ರೂಪುಗೊಳ್ಳುತ್ತಾರೆ. ಮೌಲ್ಯಯುತ ಶಿಕ್ಷಣ ನೀಡುವುದರಿಂದ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆಗಳನ್ನು ತಪ್ಪಿಸಬಹುದಾಗಿದೆ’ ಎಂದು ತಿಳಿಸಿದರು.

ಶಿಶು ಅಭಿವೃದ್ಧಿ ಅಧಿಕಾರಿ ಕೆ.ಸಿ.ದಿವಾಕರ್, ಮಕ್ಕಳ ಸಂರಕ್ಷಣಾಧಿಕಾರಿ ನಾಗರತ್ನಾ, ಎಎಸ್‌ಐ ರಮೇಶ್, ಜಿಲ್ಲಾ ಮಕ್ಕಳ ಘಟಕ ರಕ್ಷಣಾಧಿಕಾರಿ ಗಣೇಶ್, ರಘುನಾಥ್, ಸಂಪನ್ಮೂಲ ವ್ಯಕ್ತಿ ಪ್ರಶಾಂತ್, ಚೌಡಪ್ಪ, ನೇತ್ರಾವತಿ, ವಿಜಯಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT