ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ಪ್ರತಿನಿಧಿಗಳ ರಕ್ಷಣೆಗೆ ಆದ್ಯತೆ

Last Updated 28 ಜುಲೈ 2017, 6:36 IST
ಅಕ್ಷರ ಗಾತ್ರ

ಧಾರವಾಡ: ‘ದೌರ್ಜನ್ಯ ಅಥವಾ ಕಿರುಕುಳಕ್ಕೆ ಒಳಗಾದ ಮಾಧ್ಯಮ ಪ್ರತಿನಿಧಿಗಳು ತಕ್ಷಣವೇ ಸಂಬಂಧಿಸಿದ ಪೊಲೀಸ್‌ ಠಾಣೆ ಅಥವಾ ಜಿಲ್ಲಾಡಳಿತಕ್ಕೆ ದೂರು ನೀಡಿದರೆ ತಪ್ಪತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಕರ್ತರ ಮೇಲಿನ ದೌರ್ಜನ್ಯ ತಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿರುವ ಯಾವುದೇ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿಲ್ಲ. ಸಾಮಾಜಿಕ ಕಾಳಜಿಯೊಂದಿಗೆ ಕರ್ತವ್ಯ ನಿರ್ವಹಿಸುವ ಮಾಧ್ಯಮ ಪ್ರತಿನಿಧಿಗಳು ತಮ್ಮ ಮೇಲೆ ದೌರ್ಜನ್ಯ ನಡೆದಾಗ ಲಿಖಿತ ದೂರು ನೀಡಿದರೆ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ಸಮಿತಿ ಸದಸ್ಯ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ ಮಾತನಾಡಿ, ‘ಈ ಹಿಂದೆ ನಡೆದ ಸುಮಾರು ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮದ ಛಾಯಾಗ್ರಾಹಕರಿಗೆ ರಕ್ಷಣೆಯ ಅಗತ್ಯವಿದೆ. ಇದರೊಂದಿಗೆ ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ಮತ್ತೊಬ್ಬ ಸದಸ್ಯ ಪುಂಡಲೀಕ ಹಡಪದ ಮಾತನಾಡಿ, ಎಲೆಕ್ಟ್ರಾನಿಕ್‌ ಮಾಧ್ಯಮಗಳ ಮುಖ್ಯ ಕಚೇರಿಗಳು ಬಹುತೇಕ ಬೆಂಗಳೂರಿನಲ್ಲಿರುತ್ತವೆ. ಜಿಲ್ಲಾ ಮಟ್ಟದಲ್ಲಿ ಒಬ್ಬರೇ ಕಾರ್ಯ ನಿರ್ವಹಿಸಬೇಕಾಗುತ್ತದೆ. ಅನೇಕ ಘಟನೆಗಳಲ್ಲಿ ಕ್ಯಾಮೆರಾಗಳು ಧ್ವಂಸಗೊಂಡ ಉದಾಹರಣೆಗಳಿವೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಿದರೆ ಅನುಕೂಲವಾಗುತ್ತದೆ’ ಎಂದರು.

ಸಹಾಯಕ ಪೊಲೀಸ್ ಆಯುಕ್ತ ಎಲ್.ವೇಣುಗೋಪಾಲ ಮಾತನಾಡಿ, ‘ಮಾಧ್ಯಮ ಪ್ರತಿನಿಧಿಗಳು ತಮ್ಮ ಮೇಲೆ ದೌರ್ಜನ್ಯಗಳು ನಡೆದಾಗ ಲಿಖಿತ ದೂರು ಸಲ್ಲಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಗ್ರಾಮೀಣ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಶಾಂತ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT