ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳಿಗೆ ಮೂಲಸೌಕರ್ಯಕ್ಕೆ ಒತ್ತಾಯ

Last Updated 22 ಆಗಸ್ಟ್ 2017, 9:13 IST
ಅಕ್ಷರ ಗಾತ್ರ

ಕೋಲಾರ: ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಲ್ಲಿನ ಜಿಲ್ಲಾ ಪಂಚಾಯಿತಿ ಎದುರು ಸೋಮವಾರ ಧರಣಿ ನಡೆಸಿದರು. ‘ಜಿಲ್ಲೆಯಲ್ಲಿ ಶೇ 40ರಷ್ಟು ಮಂದಿ ದಲಿತ ಹಾಗೂ ಹಿಂದುಳಿದ ವರ್ಗಗಳ ಜನಸಂಖ್ಯೆ ಇದೆ. ರಾಜಕೀಯವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ತುಳಿತಕ್ಕೆ ಒಳಗಾಗಿರುವ ಈ ಸಮುದಾಯಗಳಿಗೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ’ ಎಂದು ಧರಣಿ ನಿರತರು ಆರೋಪಿಸಿದರು.

ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕ ವಿ.ನಾರಾಯಣಸ್ವಾಮಿ ಮಾತನಾಡಿ, ‘ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ದಲಿತ ಕಾಲೊನಿಗಳ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆಯಡಿ (ಟಿಎಸ್‌ಪಿ) ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಆದರೆ, ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಶಾಮೀಲಾಗಿ ಈ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.

‘ಹಲವೆಡೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕಾಮಗಾರಿ ನಡೆಯದಿದ್ದರೂ ಗುತ್ತಿಗೆದಾರರಿಗೆ ಬಿಲ್‌ ಮಂಜೂರು ಮಾಡಲಾಗಿದೆ. ಕಾಮಗಾರಿಯ ಗುಣಮಟ್ಟ ಕಳಪೆಯಾಗಿದ್ದು, ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಅಲ್ಲದೇ, ಯೋಜನೆಗಳ ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋಗುತ್ತಿದೆ’ ಎಂದು ಹೇಳಿದರು.

ಶೋಚನೀಯ: ‘ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್‌ಗಳ ಸ್ಥಿತಿ ಶೋಚನೀಯವಾಗಿದೆ. ವಿದ್ಯಾರ್ಥಿಗಳಲ್ಲಿ ಆಹಾರದ ಗುಣಮಟ್ಟ ಕಳಪೆಯಾಗಿದ್ದು, ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಬಹುಪಾಲು ವಿದ್ಯಾರ್ಥಿನಿಲಯಗಳಲ್ಲಿ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ಶೌಚಾಲಯ ಸೌಕರ್ಯವಿಲ್ಲ. ಜತೆಗೆ ಹಾಸ್ಟೆಲ್‌ ಕಟ್ಟಡಗಳು ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಜೀವ ಭಯದಲ್ಲಿ ದಿನ ದೂಡುವಂತಾಗಿದೆ’ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರದ ಸವಲತ್ತುಗಳನ್ನು ಸಕಾಲಕ್ಕೆ ವಿತರಿಸಿ ಜನರ ಅಲೆದಾಟ ತಪ್ಪಿಸಬೇಕು. ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಬಗೆಹರಿಸಬೇಕು. ದಲಿತರು ಹಾಗೂ ಹಿಂದುಳಿದ ವರ್ಗದವರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ದಲಿತ ಕಾಲೊನಿಗಳಲ್ಲಿ ರಸ್ತೆ ಮತ್ತು ಚರಂಡಿ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.

ದಲಿತ ಶಕ್ತಿ ಸೇನೆ ಅಧ್ಯಕ್ಷ ಭಾರಧ್ವಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸಂಚಾಲಕರಾದ ಸುಭಾಷ್ ಚಂದ್ರಮೂರ್ತಿ, ಶ್ರೀನಿವಾಸ್, ಎಸ್.ಪ್ರಭಾವತಿ, ಕೆ.ಆರ್.ಮುನಿಯಪ್ಪ, ಸದಸ್ಯರಾದ ಅಮೃತಾ, ಯಲ್ಲಮ್ಮ, ನಾರಾಯಣಮ್ಮ, ಸಾಕಮ್ಮ, ಅನಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT