ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರಿಂದ ದಲಿತರ ಜಮೀನು ಒತ್ತುವರಿ: ಆರೋಪ

Last Updated 23 ಆಗಸ್ಟ್ 2017, 9:26 IST
ಅಕ್ಷರ ಗಾತ್ರ

ಕೋಲಾರ: ದಲಿತರಿಗೆ ಹಂಚಿಕೆಯಾಗಿರುವ ಜಮೀನನ್ನು ಕ್ಷೇತ್ರದ ಶಾಸಕ ವರ್ತೂರು ಪ್ರಕಾಶ್‌ ಅವರು ಒತ್ತುವರಿ ಮಾಡಿಕೊಂಡು ತಮ್ಮ ರಕ್ಷಿತ್ ಫಾರಂಗೆ ಬಳಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಸಿಐಡಿ ತನಿಖೆ ನಡೆಸಬೇಕು ಎಂದು ರಿಪಬ್ಲಿಕ್‌ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿಐ) ಸದಸ್ಯರು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅವರನ್ನು ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಆರ್‌ಪಿಐನ ಯುವ ಘಟಕದ ಅಧ್ಯಕ್ಷ ಅಂಬರೀಷ್‌, ‘ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ, ಜಂಗಾಲಹಳ್ಳಿ ಹಾಗೂ ಚೀನೇನಹಳ್ಳಿಯಲ್ಲಿನ ದಲಿತರ ಜಮೀನುಗಳನ್ನು ಶಾಸಕರು ಕಬಳಿಸಿದ್ದಾರೆ’ ಎಂದು ದೂರಿದರು.

ಮೃತ ದಲಿತರ ಹೆಸರಿನಲ್ಲಿದ ಸುಮಾರು ಸುಮಾರು 20 ಎಕರೆ ಜಮೀನನ್ನು ಶಾಸಕರು ತಮ್ಮ ಹೆಸರಿಗೆ ನೊಂದಣಿ ಮಾಡಿಸಿಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎಸ್‌.ವೆಂಕಟೇಶ್‌ ಅವರು ಮಾಲೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯದಲ್ಲಿ ದಲಿತ ಮುಖಂಡರು ಮೋಜು ಕೂಟ ನಡೆಸಿದ್ದಾರೆ ಸುಳ್ಳು ಆರೋಪ ಮಾಡಿದ್ದಾರೆ. ಅವರ ಹೇಳಿಕೆಯಿಂದ ದಲಿತರಿಗೆ ಅವಮಾನವಾಗಿದೆ. ಆದ ಕಾರಣ ಅವರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಬೇಕು ಎಂದರು.

ನ್ಯಾಯ ಸಿಗುತ್ತಿಲ್ಲ: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಾಕಷ್ಟು ಪ್ರಕರಣಗಳು ಸಾಕ್ಷ್ಯಾಧಾರವಿಲ್ಲದೆ ಮುಚ್ಚಿ ಹೋಗುತ್ತಿವೆ. ಇದಕ್ಕೆ ಪೊಲೀಸ್‌ ಅಧಿಕಾರಿಗಳ ಬೇಜವಾಬ್ದಾರಿ ಮುಖ್ಯ ಕಾರಣ. ಪೊಲೀಸರು ಪ್ರಕರಣಗಳ ಸಂಬಂಧ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಾಧಾರ ಒದಗಿಸುತ್ತಿಲ್ಲ. ಇದರಿಂದ ದಲಿತರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸವರ್ಣೀಯರು ದಲಿತ ವ್ಯಕ್ತಿಯನ್ನು ಮನಬಂದಂತೆ ಥಳಿಸಿದ್ದಾರೆ. ಆದರೂ ಪೊಲೀಸರು ಸವರ್ಣೀಯರ ವಿರುದ್ಧ ದೂರು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆಯಲ್ಲಿ ದಲಿತರಿಗೆ ಅಂತ್ಯಸಂಸ್ಕಾರ ಮಾಡಲು ಸ್ಥಳಾವಕಾಶವಿಲ್ಲ. ಇತ್ತೀಚೆಗೆ ಮೃತಪಟ್ಟ ದಲಿತ ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರಕ್ಕೆ ಒಂದು ದಿನ ಕಾಯಬೇಕಾಯಿತು’ ಎಂದು ದಲಿತ ಮುಖಂಡ ವೆಂಕಟೇಶ್ ದೂರಿದರು.

ವರದಿ ಕೊಡಿ: ಜಿಲ್ಲಾಧಿಕಾರಿ ತ್ರಿಲೋಕಚಂದ್ರ ಮಾತನಾಡಿ, ‘ಮಾಲೂರಿನ ವಿದ್ಯಾರ್ಥಿನಿಲಯದಲ್ಲಿ ಏನು ನಡೆಯಿತು ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಕೊಡಿ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ತಡೆಗೆ ಕ್ರಮ ಕೈಗೊಳ್ಳಿ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೂಲಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ಕೊಡಿ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಯಣ್ಣ ಅವರಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೋಹಿಣಿ ಕಟೋಚ್‌ ಸೆಪಟ್, ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಲೋಕೇಶ್, ಉಪ ವಿಭಾಗಾಧಿಕಾರಿ ಶುಭಾ ಕಲ್ಯಾಣಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ರಾಜೀವ್ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT