ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯ

Last Updated 23 ಆಗಸ್ಟ್ 2017, 9:29 IST
ಅಕ್ಷರ ಗಾತ್ರ

ಕೋಲಾರ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಕೂಲಿಕಾರ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.

ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಧರಣಿನಿರತರು, ರಾಜ್ಯದಲ್ಲಿ ನಾಲ್ಕೈದು ವರ್ಷಗಳಿಂದ ಬರ ಪರಿಸ್ಥಿತಿ ಇದೆ. ಬರದಿಂದ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಮಾತನಾಡಿ, ‘ಸತತ ಬರವು ರೈತರನ್ನು ಹೈರಾಣಾಗಿಸಿದೆ. ಬಡ್ಡಿ ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರು ಬೆಳೆ ನಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲೇ ಈಗಾಗಲೇ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಹಿತ ಕಾಯುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ’ ಎಂದು ಆರೋಪಿಸಿದರು.

‘ರಾಜ್ಯ ಸರ್ಕಾರ ಸಹಕಾರಿ ರಂಗದ ಬ್ಯಾಂಕ್‌ಗಳಲ್ಲಿನ ಗರಿಷ್ಠ ₹ 50 ಸಾವಿರದವರೆಗಿನ ಸಾಲ ಮನ್ನಾ ಮಾಡಿದೆ. ಇದರಿಂದ 22.27 ಲಕ್ಷ ರೈತ ಕುಟುಂಬಗಳ ₹ 8,165 ಕೋಟಿ ಸಾಲ ಮನ್ನಾ ಆಗಿದೆ’ ಎಂದರು.

‘₹ 50 ಸಾವಿರಕ್ಕಿಂತ ಹೆಚ್ಚಿನ ಸಾಲದ ಮೊತ್ತ ಪಾವತಿಸಿದರೆ ಮಾತ್ರ ಸಾಲ ಮನ್ನಾ ಎಂಬ ಷರತ್ತು ವಿಧಿಸಲಾಗಿದೆ. ಇದರಿಂದ ಹೆಚ್ಚಿನ ರೈತರಿಗೆ ಅನುಕೂಲವಾಗಿಲ್ಲ. ಆದ ಕಾರಣ ಈ ಷರತ್ತು ಹಿಂಪಡೆದು ಉಳಿಕೆ ₹ 2578 ಕೋಟಿ ಸಾಲವನ್ನೂ ಮನ್ನಾ ಮಾಡಬೇಕು’ ಎಂದು ಅವರು ಹೇಳಿದರು.

ರೈತರನ್ನು ಬೆದರಿಸುತ್ತಿದ್ದಾರೆ: ಬೆಳೆ ನಷ್ಟದಿಂದಾಗಿ ರೈತರಿಗೆ ಸಾಲದ ಕಂತು ಕಟ್ಟಲು ಕಷ್ಟವಾಗಿದೆ. ಮತ್ತೊಂದೆಡೆ ರೈತರು ಕೃಷಿ ನಿರ್ವಹಣೆ ಮಾಡಲಾಗದೆ ಪಟ್ಟಣ ಹಾಗೂ ನಗರ ಪ್ರದೇಶಕ್ಕೆ ಗುಳೆ ಹೋಗುತ್ತಿದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಅಧಿಕಾರಿಗಳು ಸಾಲದ ಕಂತು ಕಟ್ಟುವಂತೆ ರೈತರಿಗೆ ನೋಟಿಸ್‌ ಜಾರಿ ಮಾಡುತ್ತಿದ್ದಾರೆ. ಅಲ್ಲದೇ, ಸಾಲಕ್ಕೆ ಅಡವಿಟ್ಟಿರುವ ಜಮೀನು, ಮನೆ ಹಾಗೂ ಚಿನ್ನಾಭರಣ ಹರಾಜು ಹಾಕುವುದಾಗಿ ರೈತರನ್ನು ಬೆದರಿಸುತ್ತಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು.

ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು. ಕೃಷಿಕರ ಪರವಾದ ಬೆಳೆ ವಿಮೆ ನೀತಿ ಜಾರಿ ಮಾಡಬೇಕು. ಜಾನುವಾರು ಮಾರುಕಟ್ಟೆ ನಿಯಂತ್ರಣ ಕಾಯ್ದೆ–2017 ವಾಪಸ್ ಪಡೆಯಬೇಕು. ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗದಂತೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ ತೆರೆಯಬೇಕು. ಕೃಷಿ ಸಹಾಯಧನ ಮೊತ್ತವನ್ನು ಹೆಚ್ಚಿಸಬೇಕು. ನರೇಗಾ ಅಡಿ ದಿನಕ್ಕೆ ₹ 400 ಕೂಲಿ ಹಾಗೂ ವರ್ಷಕ್ಕೆ 200 ದಿನಗಳ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್‌, ತಾಲ್ಲೂಕು ಘಟಕದ ಕಾರ್ಯದರ್ಶಿ ಶ್ರೀರಾಮ್‌, ದಲಿತ ಸಂಘರ್ಷ ಸಮಿತಿ ಸದಸ್ಯ ರವಿ ಧರಣಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT