ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೆಡ್‌ ತೆರವು: ಜಿಲ್ಲಾಧಿಕಾರಿ ಕಚೇರಿ ಎದುರೇ ಬಿಜೆ‍ಪಿ ಪ್ರತಿಭಟನೆ

ಧರಣಿ ನಡೆಸಲು ನಿರ್ಮಿಸಿದ್ದ ಶೆಡ್ ತೆರವು ಮಾಡಿದ ನಗರಸಭೆ
Last Updated 31 ಆಗಸ್ಟ್ 2017, 8:44 IST
ಅಕ್ಷರ ಗಾತ್ರ

ಉಡುಪಿ: ಮರಳುಗಾರಿಕೆ ಆರಂಭಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಹಾಕಿದ್ದ ಶೆಡ್ ಅನ್ನು ನಗರಸಭೆ ತೆರವುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರೇ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸಾಂಪ್ರದಾಯಿಕವಾಗಿ ಮರಳುಗಾರಿಕೆ ನಡೆಸುವ ಎಲ್ಲ 164 ಮಂದಿಗೆ ಅನುಮತಿ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

ಸರ್ವೀಸ್ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿ ಬರಲು ಡಿಸಿ ಕಚೇರಿಗೆ ಪಾದಯಾತ್ರೆ ಹೊರಟರು. ಮನವಿ ಸಲ್ಲಿಸಿ ಬಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಅವರು ತೀರ್ಮಾನಿಸಿದ್ದರು. ಅದಕ್ಕಾಗಿ ಸರ್ವೀಸ್ ಬಸ್ ನಿಲ್ದಾಣದ ಎದುರು ತಾತ್ಕಾಲಿಕ ಶೆಡ್ ಹಾಕಿದ್ದರು. ಆದರೆ ಅನಿರ್ದಿಷ್ಟಾವಧಿ ಧರಣಿ ನಡೆಸಲು ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ ನಗರಸಭೆ ಸಿಬ್ಬಂದಿ ಶೆಡ್ ತೆರವು ಮಾಡಿದರು.

ಪಾದಯಾತ್ರೆ ಮೂಲಕ ಡಿಸಿ ಕಚೇರಿ ತಲುಪಿದ್ದ ಪ್ರತಿಭಟನಾಕಾರರಿಗೆ ಈ ವಿಷಯ ಗೊತ್ತಾದ ನಂತರ ಅಲ್ಲಿಯೇ ಧರಣಿ ಕುಳಿತರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದೇಶ ಭಕ್ತಿ ಗೀತೆ ಹಾಡಿದರು.

ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಎಸ್ಪಿ ಡಾ. ಸಂಜೀವ ಎಂ. ಪಾಟೀಲ್ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕ ಕೆ. ರಘುಪತಿ ಭಟ್ ಹಾಗೂ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತುಕತೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

‘ಒಟ್ಟು 170 ಮಂದಿ ಸಾಂಪ್ರದಾಯಿಕ ಮರಳುಗಾರರ ಪಟ್ಟಿ ಇದೆ. ಅವರಲ್ಲಿ 134 ಮಂದಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಆದರೆ, ಮರಳು ದಕ್ಕೆ ಇರುವ ಗ್ರಾಮದಲ್ಲಿ ವಾಸ ಇಲ್ಲದ, ಕ್ರಿಮಿನಲ್ ಪ್ರಕರಣ ಇರುವ ಹಾಗೂ ಜನಪ್ರತಿನಿಧಿಗಳಿಗೆ ಅನುಮತಿ ನೀಡದಿರಲು ನಿರ್ಧರಿಸಲಾಗಿತ್ತು. ಬಿಜೆಪಿ ಮುಖಂಡರ ಬೇಡಿಕೆ ಬಗ್ಗೆ ಸೆಪ್ಟೆಂಬರ್ 2ರಂದು ನಡೆಯುವ ಮರಳು ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ಕೆಲವು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರೂ ಈ ಪಟ್ಟಿಯಲ್ಲಿದ್ದಾರೆ. ಅವರಿಗೆ ಅನುಮತಿ ನೀಡಬಹುದೇ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಅಭಿಪ್ರಾಯ ಕೇಳಲಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು.

**

ಶೆಡ್ ತೆರವು ಮಾಡಿದ ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಅವರು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ಗುರುವಾರ ಸಂಜೆ ನಗರಸಭೆಗೆ ಮುತ್ತಿಗೆ ಹಾಕಲಾಗುತ್ತದೆ.

-ಕೆ. ರಘುಪತಿ ಭಟ್‌, ಮಾಜಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT