ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಕ್ಕೆ ಜಡತ್ವ

Last Updated 4 ಸೆಪ್ಟೆಂಬರ್ 2017, 8:55 IST
ಅಕ್ಷರ ಗಾತ್ರ

ತುರುವೇಕೆರ: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಶಿಕ್ಷಕರ ವೇತನ ತಾರತಮ್ಯ ಹಾಗೂ ಇನ್ನಿತರ ಬೇಡಿಕೆಯನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ಜಡತ್ವ ಭಾವನೆ ತಾಳಿದೆ’ ಎಂದು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅಸಮಧಾನ ವ್ಯಕ್ತಪಡಿಸಿದರು.

ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದೇಶದ ಭವಿಷ್ಯ ಕಟ್ಟುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ರಾಜ್ಯ ಸರ್ಕಾರ ನೌಕರರ ಹಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಶಿಕ್ಷಕರ ಬದುಕು ಅತಂತ್ರವಾಗಿದೆ’ ಎಂದರು.

ಈ ಭಾಗದ ಶಿಕ್ಷಕರ ಹಾಗೂ ಹಲವು ಶೈಕ್ಷಣಿಕ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಆಗಿದೆ. ಹೀಗಾಗಿ ತಾಲ್ಲೂಕಿನ ಎಲ್ಲಾ ಶಿಕ್ಷಕರುಗಳು ಗುಣಮಟ್ಟದ ಫಲಿತಾಂಶ ಹೆಚ್ಚಿಸಲು ಹೆಚ್ಚು ಶ್ರಮಿಸಬೇಕು ಎಂದರು.

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ‘ಬೇರೆ ಕ್ಷೇತ್ರಗಳಿಗಿಂತ ಶಿಕ್ಷಣ ವಲಯಕ್ಕೆ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡುವುದರ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆಯನ್ನು ಮಾಡಬೇಕು. ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಸಮಾಜ ಮತ್ತು ದೇಶದ ಅಭಿವೃದ್ಧಿ ಸಾದ್ಯ’ ಎಂದರು.

‘ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುತ್ತಿರುವ ಆರೋಗ್ಯ ಸೌಲಭ್ಯ ಜೊತೆಗೆ ಅನುದಾನಿತ ಶಾಲೆಗಳಿಗೂ ಸಹ ನೀಡಬೇಕು. ನನ್ನ ಅಧಿಕಾರಾವಧಿಯಲ್ಲಿ ತಾಲ್ಲೂಕಿಗೆ ಹೊಸದಾಗಿ ಶಾಲಾ ಕಾಲೇಜುಗಳನ್ನು ಮಂಜೂರು ಮಾಡಿಸಿಕೊಡಲಾಗಿದ್ದು, ಆ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ಶಿಕ್ಷಣ ದೊರೆಯುವಂತಾಗಿದೆ’ ಎಂದರು.

ಪ್ರೌಢಶಾಲಾ ಶಿಕ್ಷಕರ ಸಹಕಾರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ಅಭಿನಂದಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಮಂಜುನಾಥ್, ತಾಲ್ಲೂಕು ಕಸಾಪ ಅಧ್ಯಕ್ಷ ನಂ.ರಾಜು ಮುನಿಯೂರು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ, ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜೇಗೌಡ, ಉಪನ್ಯಾಸಕರುಗಳಾದ ಭೈರಪ್ಪ, ನರಸಿಂಹಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT