ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಳು ಬಿದ್ದ ‘ಆಸರೆ’ ಮನೆಗಳು

Last Updated 5 ಸೆಪ್ಟೆಂಬರ್ 2017, 6:52 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನ ನದಿ ಪಾತ್ರದ ಗ್ರಾಮ ದೇವಿಪುರ ಸ್ಥಳಾಂತರಕ್ಕಾಗಿ ನಿರ್ಮಿಸಲಾಗಿದ್ದ ‘ಆಸರೆ’ ಮನೆಗಳು ಬಳಕೆಯಾಗದೆ ಪಾಳು ಬಿದ್ದಿವೆ. 2009ರ ನೆರೆಹಾವಳಿ ಸಂದರ್ಭದಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದ ಚಿಕ್ಕಕೊಟ್ನೇಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಿಪುರ ಗ್ರಾಮದ ಸ್ಥಳಾಂತರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿತ್ತು.

ಈ ನಿಟ್ಟಿನಲ್ಲಿ ಗ್ರಾಮದ ಹೊರ ವಲಯದ 12 ಎಕರೆ ಪ್ರದೇಶದಲ್ಲಿ 138 ಆಸರೆ ಮನೆಗಳ ಮಂಜೂರು ಮಾಡಿ, 2010ರಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗಿದೆ. ನಿರ್ಮಾಣಗೊಂಡ ಮನೆಗಳನ್ನು ಈಗಾಗಲೇ ನೆರೆ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗಿದೆ. ಆದರೆ ‘ಆಸರೆ’ ಕಾಲೊನಿಗೆ ಸಂಪರ್ಕ ರಸ್ತೆ ಇಲ್ಲದ ಕಾರಣ ಗ್ರಾಮಸ್ಥರು ಇದುವರೆಗೂ ಮನೆಗಳನ್ನು ಸ್ಥಳಾಂತರ ಮಾಡಿಲ್ಲ.

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ನೀರಿನ ಟ್ಯಾಂಕ್‌ ನಿರ್ಮಿಸಲಾಗಿದೆ. ಆದರೆ ಟ್ಯಾಂಕ್‌ಗೆ ಶುದ್ಧ ಕುಡಿಯುವ ನೀರು ಪೂರೈಕೆ ಕುರಿತು ಅಗತ್ಯ ಕ್ರಮ ಕೈಗೊಂಡಿಲ್ಲ. ಆಸರೆ ಮನೆ ನಿರ್ಮಾಣಗೊಂಡು ಏಳು ವರ್ಷ ಕಳೆದರೂ ಗ್ರಾಮಸ್ಥರು ಸ್ಥಳಾಂತರಕ್ಕೆ ಮುಂದಾಗದ ಕಾರಣ ಪಾಳು ಬಿದ್ದಿವೆ. ಮನೆಗಳ ಕಿಟಕಿ, ಬಾಗಿಲುಗಳು ಕಿತ್ತು ಹೋಗಿವೆ. ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಮನೆಗಳು ತಾಲ್ಲೂಕು ಆಡಳಿತದ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಆರಂಭದಲ್ಲಿ ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದ ಜನಪ್ರತಿನಿಧಿಗಳು ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ‘ಆಸರೆ’ ಕಾಲೊನಿಗೆ ಸಂಪರ್ಕ ರಸ್ತೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿದರೆ ಮನೆಗಳನ್ನು ಸ್ಥಳಾಂತರಗೊಳಿಸುತ್ತೇವೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದರು.

‘ಗ್ರಾಮದಲ್ಲಿ ಹಲವು ಮೂಲ ಸೌಕರ್ಯಗಳ ಕೊರತೆ ಇದೆ. ಶುದ್ಧ ಕುಡಿಯುವ ನೀರಿನ ಪೂರೈಕೆ ಇಲ್ಲ. ಬೇಸಿಗೆ ಸಂದರ್ಭದಲ್ಲಿ ಇಲ್ಲಿನ ಹಳ್ಳದ ನೀರು ಬತ್ತಿದರೆ ಇಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುತ್ತದೆ. ಪೋತ್ನಾಳ–ಚೀಕಲಪರ್ವಿ ರಸ್ತೆಗೆ ಸಂಪರ್ಕ ಕಲ್ಪಿಸುವ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಆಸರೆ’ ಕಾಲೊನಿಯ ಸಂಪರ್ಕ ರಸ್ತೆ ನಿರ್ಮಿಸಿ ಅಗತ್ಯ ಸೌಕರ್ಯ ಒದಗಿಸಬೇಕು’ ಎಂಬುದು ಗ್ರಾಮಸ್ಥರ ಒತ್ತಾಯ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT