ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಯ ಅಪಪ್ರಚಾರದಲ್ಲಿ ತೊಡಗಿರುವ ಶಾಸಕ

Last Updated 6 ಸೆಪ್ಟೆಂಬರ್ 2017, 6:31 IST
ಅಕ್ಷರ ಗಾತ್ರ

ಪಾಂಡವಪುರ: ‘4 ವರ್ಷಗಳಲ್ಲಿ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು ₹ 900 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ, ಕೆ.ಆರ್‌.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅವರು ಈ ಕೆಲಸಗಳೆಲ್ಲ ಸಂಸದ ಸಿ.ಎಸ್.ಪುಟ್ಟರಾಜು ಅವರು ಮಾಡಿಸಿದ್ದು ಎಂದು ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ’ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹರಿಹಾಯ್ದರು.

ತಾಲ್ಲೂಕಿನ ವಿವಿಧೆಡೆ ಮಂಗಳವಾರ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಕೆಲವು ದಿನಗಳ ಹಿಂದೆ ತಾಲ್ಲೂಕಿನ ಬನ್ನಂಗಾಡಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಕೆ.ಸಿ.ನಾರಾಯಣಗೌಡ ಅವರು, ಈ ಭಾಗದ 65 ಗ್ರಾಮಗಳಿಗೆ ಸಂಸದ ಕುಡಿಯುವ ನೀರನ್ನು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಸುಮಾರು ₹ 53 ಕೋಟಿ ಅಂದಾಜು ವೆಚ್ಚದಲ್ಲಿ 65 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ ಹಣ ಬಿಡುಗಡೆಗೊಳಿಸಿ ಆಡಳಿತಾತ್ಮಕ ಮಂಜೂರಾತಿ ಮಾಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. 2 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಂಡು ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ ಎಂಬುದನ್ನು ನಾರಾಯಣಗೌಡ ಅರಿಯಲಿ’ ಎಂದರು. ‘ತಮ್ಮ ಕ್ಷೇತ್ರವನ್ನು ಬಿಟ್ಟು ಮತ್ತೊಂದು ಕ್ಷೇತ್ರಕ್ಕೆ ಬಂದು ಅಭಿವೃದ್ಧಿ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸರಿಯೇ’ ಎಂದು ಪ್ರಶ್ನಿಸಿದರು.

ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ:
ತಾಲ್ಲೂಕಿನ ಕನಗನಹಳ್ಳಿ–ಮೊಸರನಹಳ್ಳಿ ಮಾರ್ಗವಾಗಿ ಲಿಂಗಾಪುರ ಗ್ರಾಮಕ್ಕೆ ಸಂಪರ್ಕಿಸುವ ₹ 2.94 ಕೋಟಿ ಅಂದಾಜು ವೆಚ್ಚದ ರಸ್ತೆ ಅಭಿವೃದ್ಧಿಗೆ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು. ಇಂಗಲಗುಪ್ಪೆ– ಟಿ.ಎಸ್.ಛತ್ರ ಗ್ರಾಮದಿಂದ ಬಳೇ ಅತ್ತಿಗುಪ್ಪೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ₹ 2.5 ಕೋಟಿ ಅಂದಾಜು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ.ಅಶೋಕ, ಶಾಂತಲಾ, ಮಾಜಿ ಸದಸ್ಯರಾದ ಎ.ಎಲ್.ಕೆಂಪೂಗೌಡ, ಕೆ.ಟಿ.ಗೋವಿಂದೇಗೌಡ, ಚಿನಕುರಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಮ್ಮ, ಉಪಾಧ್ಯಕ್ಷ ನಾಗರಾಜು,ಸದಸ್ಯರಾದ ಪ್ರಕಾಶ್‌, ವೀರಶೈವ ಮುಖಂಡರಾದ ಷಡಕ್ಷರಪ್ಪ, ಕೈಲಾಸ್‌ ಮೂರ್ತಿ, ರೈತ ಸಂಘದ ಲೋಕೇಶ್‌, ಎಂಜಿನಿರ್‌ಗಳಾದ ಪ್ರಶಾಂತ್‌, ಪ್ರಕಾಶ್, ಗುತ್ತಿಗೆದಾರ ನಾಗರಾಜು ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT