ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ 10 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ

Last Updated 8 ಸೆಪ್ಟೆಂಬರ್ 2017, 9:40 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ 10 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಲು ಮುಂದಿನ ತಿಂಗಳು ಕುವೆಂಪು ರಂಗಮಂದಿರ–ಆಚಾರ ತುಳಸಿ ರಾಷ್ಟ್ರೀಯ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ.

ಈ ಎರಡು ಸ್ಥಳಗಳಿಗೂ ಗುರುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ನೇತೃತ್ವದ ತಂಡ ಉದ್ಯೊಗಮೇಳ ಆಯೋಜನೆ ಬಗ್ಗೆ ಎನ್‌.ಇ.ಎಸ್‌. ಆಡಳಿತ ಮಂಡಳಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿತು.

ನಿರುದ್ಯೋಗಿ ಯುವಕ, ಯುವತಿಯರ ಜತೆಗೆ, ಈಗಾಗಲೇ ಒಂದು ಉದ್ಯೋಗದಲ್ಲಿದ್ದು ಉತ್ತಮ ಅವಕಾಶ ಎದುರು ನೋಡುತ್ತಿರುವವರಿಗೂ ಒಳ್ಳೆಯ ವೇದಿಕೆಯಾಗುತ್ತದೆ. ಕನಿಷ್ಠ, ಗರಿಷ್ಠ ಶೈಕ್ಷಣಿಕ ಹಿನ್ನೆಲೆ ಹೊಂದಿದವರಿಗೆ ಸೂಕ್ತ ಉದ್ಯೋಗವಕಾಶ ಕಲ್ಪಿಸುವುದು. ಹಲವು ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಉದ್ಯೋಗ ಮೇಳದ ಮೂಲಕ ಉದ್ಯೋಗ ಆಕಾಂಕ್ಷಿಗಳು ಹಾಗೂ ಉದ್ಯೋಗದಾತರನ್ನು ಒಂದೆಡೆ ಸೇರಿಸುವ ಕಾರ್ಯ ಮಾಡಲಾಗುತ್ತಿದೆ. ಉದ್ಯೋಗ ಮೇಳದಲ್ಲಿ 125ರಿಂದ
150 ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಸುಮಾರು 10 ಸಾವಿರ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಒದಗಿಸಬಹುದಾದ ಕಂಪೆನಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ವಿವರ ನೀಡಿದರು. ಎರಡು ದಿನ ಉದ್ಯೋಗ ಮೇಳ ನಡೆಯಲಿದೆ. ಪ್ರಥಮ ದಿನ ನೋಂದಣಿ ಮಾಡಿದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಉಳಿದ ಅಭ್ಯರ್ಥಿಗಳಿಗೆ ಎರಡನೇ ದಿನ ಸಂದರ್ಶನಕ್ಕೆ ಅವಕಾಶ ನೀಡಲಾಗುವುದು.

ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸೂಕ್ತ ಮಾಹಿತಿ ನೀಡಲು ಹಲವು ಕೌಂಟರ್‌ ತೆರೆಯಲಾಗುವುದು. ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಬೆಂಗಳೂರಿನಿಂದ ಗರಿಷ್ಠ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ಪ್ರತಿನಿಧಿಗಳನ್ನು ಕರೆ ತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪ್ರತಿನಿಧಿಗಳಿಗೂ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಸ್ಥಳೀಯ ಹಾಗೂ ಇತರ ಜಿಲ್ಲೆಗಳ ಕಂಪೆನಿಗಳಿಗೂ ಅವಕಾಶ ನೀಡಲಾಗುವುದು ಎಂದರು.

ಅಂತರ್ಜಾಲದ ಮೂಲಕ ನೋಂದಣಿ: ಭಾಗವಹಿಸುವ ಕಂಪೆನಿಗಳು ಹಾಗೂ ಅಭ್ಯರ್ಥಿಗಳು ಅಂತರ್ಜಾಲದ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ವೆಬ್‌ಸೈಟ್‌ ಆರಂಭಿಸಲಾಗುವುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ವಿವರ, ನೋಂದಣಿ ಮಾಹಿತಿ, ಅಭ್ಯರ್ಥಿಗಳಿಗೆ ಸೂಚನೆಗಳು ಇತ್ಯಾದಿ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ತಾಲ್ಲೂಕುಮಟ್ಟದಲ್ಲೂ ಮಾಹಿತಿ ಕೇಂದ್ರ ತೆರೆಯಲಾಗುವುದು. ಅಭ್ಯರ್ಥಿಗಳು ಸಮರ್ಪಕವಾಗಿ ಸ್ವ–ವಿವರ ಸಿದ್ಧಪಡಿಸಲು ಹಾಗೂ ಸಂದರ್ಶನ ಎದುರಿಸಲು ಅವರನ್ನು ಸಜ್ಜುಗೊಳಿಸಲು ತಾಲ್ಲೂಕುಮಟ್ಟದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು.

ಸಂಪನ್ಮೂಲ ವ್ಯಕ್ತಿಗಳ ಆಯ್ಕೆ, ಉದ್ಯೋಗ ಮೇಳದ ವಿವಿಧ ಕಾರ್ಯ ಚಟುವಟಿಕೆಗಳ ಅನುಷ್ಠಾನಕ್ಕಾಗಿ ವಿವಿಧ ಸಮಿತಿ ರಚಿಸಲಾಗಿದೆ. ನೀಡಲಾಗಿರುವ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.‌ಚನ್ನಬಸಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT