ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜೆ ಸ್ಮಾರಕ ಭವನಕ್ಕೆ ₹1.66 ಕೋಟಿ ಬಿಡುಗಡೆ

Last Updated 19 ಸೆಪ್ಟೆಂಬರ್ 2017, 8:55 IST
ಅಕ್ಷರ ಗಾತ್ರ

ಮಂಗಳೂರು: ಬಂಟ್ವಾಳದಲ್ಲಿ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಿಸಲಾಗುತ್ತಿದ್ದು, ₹5 ಕೋಟಿ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ. ಈಗಾಗಲೇ ಸರ್ಕಾರದಿಂದ ₹.166 ಕೋಟಿ ಬಿಡುಗಡೆಯಾಗಿದೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಹೆಚ್ಚುವರಿ ಅನುದಾನದ ಅವಶ್ಯತೆ ಇದ್ದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪಡೆಯಲಾಗುವುದು. ಸ್ಮಾರಕ ಭವನದ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಇದೇ ವೇಳೆ ಮಹಾನಗರ ಪಾಲಿಕೆಯ ಕೆಲ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕರೋಪಾಡಿ ಮತ್ತು ಇತರ 79 ಜನವಸತಿ ಪ್ರದೇಶಗಳಿಗೆ ನೀರು ಪೂರೈಸುವ ₹25.82 ಕೋಟಿ ಮೊತ್ತದ ಯೋಜನೆ, ಸಂಗಬೆಟ್ಟು ಮತ್ತು ಇತರ 65 ಜನವಸತಿ ಪ್ರದೇಶಗಳಿಗೆ ನೀರು ಒದಗಿಸುವ ₹34.95 ಕೋಟಿ ವೆಚ್ಚದಲ್ಲಿ ಯೋಜನೆಯ ಕಾಮಗಾ ರಿಗಳು ಪೂರ್ಣಗೊಂಡಿದ್ದು, ಮುಖ್ಯ ಮಂತ್ರಿ ಉದ್ಘಾಟಿಸಲಿದ್ದಾರೆ. ಇದೇ ವೇಳೆ ನರಿಕೊಂಬು, ಸರಪಾಡಿ ಹಾಗೂ ಜಕ್ರಿಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಅವುಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ವಿವರಿಸಿದರು.

ಬಂಟ್ವಾಳ ತಾಲ್ಲೂಕಿನಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ ಸಿದ್ಧಗೊಂಡಿದ್ದು, ಬಾಕಿ ಇರುವ ಸಣ್ಣಪುಟ್ಟ ಕಾಮ ಗಾರಿಗಳನ್ನು 10 ದಿನಗಳಲ್ಲಿ ಪೂರ್ಣ ಗೊಳಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಬಂಟ್ವಾಳದಲ್ಲಿ ₹3 ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರ, ಬಂಟ್ವಾಳ ತಾಲ್ಲೂಕಿನ ಬಿ. ಮೂಡ ಗ್ರಾಮದಲ್ಲಿ 1.50 ಎಕರೆ ಪ್ರದೇಶದಲ್ಲಿ ₹10.07 ಕೋಟಿ ವೆಚ್ಚದಲ್ಲಿ ಸಾರಿಗೆ ನಿಗಮದ ಬಸ್‌ ನಿಲ್ದಾಣ, ಬಂಟ್ವಾಳದ ಕನ್ಯಾನ ಗ್ರಾಮದ ಹಳೆಯ ಸರ್ಕಾರಿ ಆಸ್ಪತ್ರೆಯನ್ನು ಹೆಚ್ಚುವರಿ 30 ಹಾಸಿಗೆ ಗಳೊಂದಿಗೆ ₹6.15 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವುದು, ₹5.16 ಕೋಟಿ ವೆಚ್ಚದ ಮೆಸ್ಕಾಂ ಕಟ್ಟಡ ಕಾಮಗಾರಿಗಳು ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮೂಲ್ಕಿ ಬಸ್‌ ನಿಲ್ದಾಣಕ್ಕೆ ಭೂಮಿ ಖರೀದಿಸಲು ಸರ್ಕಾರದಿಂದ ₹3 ಕೋಟಿ ಬಿಡುಗಡೆಯಾಗಿ ಆರು ತಿಂಗಳು ಕಳೆದಿವೆ. ಆದರೆ, ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ಶಾಸಕ ಅಭಯಚಂದ್ರ ಜೈನ್‌ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಸಚಿವ ರಮಾನಾಥ ರೈ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೇಯರ್‌ ಕವಿತಾ ಸನಿಲ್‌, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್‌, ಪಾಲಿಕೆ ಆಯುಕ್ತ ಮುಹಮ್ಮದ್‌ ನಜೀರ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಉಮೇಶ್‌, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT