ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ನಿಯೋಗ

Last Updated 20 ಸೆಪ್ಟೆಂಬರ್ 2017, 9:08 IST
ಅಕ್ಷರ ಗಾತ್ರ

ದಾವಣಗೆರೆ: ‘ಉಪ್ಪಾರ ಸಮಾಜವು ಆರ್ಥಿಕವಾಗಿ ಹಿಂದುಳಿದಿದ್ದು, ಸಮುದಾಯದ ಶಾಸಕರು ಹಾಗೂ ಮುಖಂಡರು ಕೇಂದ್ರಕ್ಕೆ ನಿಯೋಗ ತೆರಳಿ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಬೇಕು’ ಎಂದು ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಸಲಹೆ ನೀಡಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಉಪ್ಪಾರ ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಬಡ್ತಿ ಹೊಂದಿದ ನೌಕರರಿಗೆ ಹಾಗೂ ನಿವೃತ್ತಿ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ದಶಕಗಳಿಂದಲೂ ಹೋರಾಟ, ಪ್ರತಿಭಟನೆ ನಡೆಸುತ್ತಲೇ ಬರಲಾಗಿದೆ. ಆಡಳಿತ ಸರ್ಕಾರಗಳು ಸಮುದಾಯದ ಜನರ ಬೇಡಿಕೆಯನ್ನು ನಿರ್ಲಕ್ಷಿಸುತ್ತಾ ಬಂದಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ, ಹುದ್ದೆ ಪಡೆಯಬೇಕಾದರೆ, ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಸಮುದಾಯದ ಅಭ್ಯರ್ಥಿಗಳಿಗೆ ಅನುಕೂಲವಾಗಲು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಆರಂಭಿಸುವ ಚಿಂತನೆ ಇದೆ. ಇದಕ್ಕೆ ಎಲ್ಲರ ಸಹಕಾರ ಅವಶ್ಯ ಎಂದರು.

ಮುಂಬರುವ ದಿನಗಳಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ರಾಜ್ಯಮಟ್ಟದಲ್ಲಿ ಆಯೋಜಿಸಬೇಕು ಎಂದು ಸಂಘದ ಮುಖ್ಯಸ್ಥರಿಗೆ ಸಲಹೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಎಲ್ಲಾ ಪಕ್ಷದವರು ಸಮುದಾಯದ ಐದು ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸಿದರು.

ನಿವೃತ್ತ ನ್ಯಾಯಮೂರ್ತಿ ಎಚ್‌.ಬಿಲ್ಲಪ್ಪ ಮಾತನಾಡಿ, ‘ಸಮುದಾಯದ ಜನರ ಸಂಘಟನೆಗೆ ಇಂತಹ ಕಾರ್ಯಕ್ರಮಗಳ ಅವಶ್ಯವಿದೆ. ಶಿಕ್ಷಣ, ಸಂಘಟನೆ ಹಾಗೂ ಹೋರಾಟದಿಂದ ಮಾತ್ರ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯ’ ಎಂದು ಹೇಳಿದರು.

ಪರಿಶಿಷ್ಟ ಪಂಗಡದ ಸ್ಥಾನಮಾನ ಪಡೆಯಲು ಸಮುದಾಯದ ಜನರಲ್ಲಿ ನಿರಂತರ ಹೋರಾಟದ ಅವಶ್ಯವಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ಶಿಕ್ಷಣ ರಹಿತ ಸಮಾಜ ಎಂದಿಗೂ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಮಕ್ಕಳಿಗೆ ಕಡ್ಡಾಯವಾಗಿ ಉನ್ನತ ಶಿಕ್ಷಣ ಕೊಡಿಸಬೇಕು. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅವರನ್ನು ತಯಾರಿಸಬೇಕು’ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಎಸ್‌.ಗುಳೇದ ಮಾತನಾಡಿ, ‘ಇಂದಿನ ಮಕ್ಕಳು ಭಾಗ್ಯಶಾಲಿಗಳು. ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಗಳು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿವೆ. ಜೊತೆಗೆ ಸಮುದಾಯದಿಂದಲೂ ಪ್ರತಿಭಾ ಪುರಸ್ಕಾರ ಹಾಗೂ ಪ್ರೋತ್ಸಾಹ ದೊರೆಯುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶ್ರಮವಹಿಸಿ ಅಧ್ಯಯನ ನಡೆಸಬೇಕು. ಆಗ ಮಾತ್ರ ಉನ್ನತ ಹುದ್ದೆ ಪಡೆಯಲು ಸಾಧ್ಯ’ ಎಂದು ಹೇಳಿದರು.

ಉಪನ್ಯಾಸಕ ಟಿ.ಮಂಜುನಾಥ ಸ್ವಾಮಿ ಅವರು, ‘ಇಂದಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ನಡಾವಳಿಕೆ ಪರಿವರ್ತನೆ’ ವಿಷಯ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಯೋಗೇಶ್‌, ಸಮುದಾಯದ ಮುಖಂಡ ಹಾಲೇಶ್‌ ನಲ್ಕುಂದ ಅವರು ಮಾತನಾಡಿದರು. ಜಿಲ್ಲಾ ಉಪ್ಪಾರ ನೌಕರರ ಸಂಘದ ಖಜಾಂಚಿ ಯು.ಪ್ರಕಾಶ್‌ ಅವರು, ಸಂಘದ ವಾರ್ಷಿಕ ವರದಿಯನ್ನು ವಾಚಿಸಿದರು.

ಇದೇ ಸಮಯದಲ್ಲಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜಿಲ್ಲಾ ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಎನ್‌.ಎಸ್‌.ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪ ವಿಭಾಗಾಧಿಕಾರಿ ಸಿದ್ದರಾಜು, ಪಾಲಿಕೆ ಉಪ ಮೇಯರ್‌ ಮಂಜಮ್ಮ, ಬಸವರಾಜಪ್ಪ, ಎಚ್‌.ತಿಪ್ಪಣ್ಣ, ಹನುಮಂತಪ್ಪ, ಚನ್ನಬಸಪ್ಪ, ಬಂಗಾರಪ್ಪ, ಶಿವಮೂರ್ತಿ, ಗೋಪಾಲ್‌ ಹಾಗೂ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT