ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ದರ ಏರಿಕೆ ಖಂಡಿಸಿ ಪ್ರತಿಭಟನೆ

Last Updated 22 ಸೆಪ್ಟೆಂಬರ್ 2017, 8:48 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಹಾಗೂ ಐಡಿಎಸ್‌ಜಿ ಸರ್ಕಾರಿ ಕಾಲೇಜನ್ನು ಕುವೆಂಪು ವಿಶ್ವವಿದ್ಯಾಲಯದ ಘಟಕ ಕಾಲೇಜನ್ನಾಗಿ ಪರಿವರ್ತಿಸಬಾರದು ಎಂದು ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಎತ್ತಿನಗಾಡಿಯಲ್ಲಿ ಬೈಕು, ಎಲ್‌ಪಿಜಿ ಸಿಲಿಂಡರ್ ಇಟ್ಟು ಹನುಮಂತಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಬೆಲೆ ಕಡಿಮೆ ಮಾಡಿಲ್ಲ. ಬೊಕ್ಕಸ ತುಂಬಿಸಿಕೊಳ್ಳುತ್ತಿದೆ. ತೈಲೋತ್ಪನ್ನಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವರು ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ’ ಎಂದರು.

ಕಾಂಗ್ರೆಸ್ ಮುಖಂಡ ಎಂ.ಎಲ್.ಮೂರ್ತಿ ಮಾತನಾಡಿ, ‘ಕೇಂದ್ರದ ಬಿಜೆಪಿ ಸರ್ಕಾರ ಯುವಜನರನ್ನು ಭ್ರಮನಿರಸನ ಮಾಡುವ ಪ್ರಯತ್ನ ನಡೆಸುತ್ತಿದೆ. ಇದೇ 29ರಿಂದ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಲಿದ್ದಾರೆ’ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ‘ಉಜ್ವಲ ಯೋಜನೆಯಡಿ ಕೇಂದ್ರ ಸರ್ಕಾರವು ಬಡವರಿಗೆ ಉಚಿತವಾಗಿ ಎಪಿಜಿ ಸೌಲಭ್ಯ ಒದಗಿಸುತ್ತಿದೆ. ಎಲ್‌ಪಿಜಿ ಬೆಲೆ ಹೆಚ್ಚು ಸಂಗ್ರಹ ಮಾಡುತ್ತಿದೆ’ ಎಂದು ಆರೋಪಿಸಿದರು. ಮುಂಖಂಡರಾದ ಬಿ.ಎಂ.ಸಂದೀಪ್, ಶಿವಕುಮಾರ್, ರೂಬೆನ್ ಮೊಸೆಸ್ ಎಚ್.ಪಿ.ಮಂಜೇಗೌಡ ಇದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ: ನಗರದ ಐಡಿಎಸ್‌ಜಿ ಕಾಲೇಜು ಬಳಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಐಡಿಎಸ್‌ಜಿ ಕಾಲೇಜಿನ ವಿವಿಧ ವಿಭಾಗಗಳಲ್ಲಿ 3,600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.16 ಎಕರೆ ವಿಶಾಲವಾದ ಆಟದ ಮೈದಾನ, ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ ಹೊಂದಿದೆ. ಐಡಿಎಸ್‌ಜಿ ಕಾಲೇಜನ್ನು ಕುವೆಂಪು ವಿಶ್ವವಿದ್ಯಾಲಯದ ಘಟಕ ಕಾಲೇಜಾಗಿ ಪರಿವರ್ತಿಸಿದರೆ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

ವಿಶ್ವವಿದ್ಯಾಲಯವು ಸಿಂಡಿಕೇಟ್‌ ನಿಯಮದಂತೆ ಸರ್ಕಾರದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ನಿಗದಿಪಡಿಸುತ್ತದೆ. ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶಾತಿ ಅರ್ಜಿ ಶುಲ್ಕ ಉಚಿತವಾಗಿದ್ದರೆ ವಿಶ್ವವಿದ್ಯಾಲಯದ ಪ್ರವೇಶಾತಿ ಅರ್ಜಿ ಶುಲ್ಕ ₹ 500 ಇರುತ್ತದೆ. ವಿಶ್ವವಿದ್ಯಾಲಯ ಪ್ರತಿ ವರ್ಷ ಶುಲ್ಕ ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಆದ್ಯತೆ ನೀಡುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದು ದೂಷಿಸಿದರು.

ಸರ್ಕಾರದಿಂದ ಕಾಲೇಜಿಗೆ ಬಿಡುಗಡೆಯಾಗುವ ಗ್ರಂಥಾಲಯ, ಪ್ರಯೋಗಾಲಯ, ಕ್ರೀಡೆ ಮತ್ತು ಸಾಂಸ್ಕೃತಿಕ ಅನುದಾನಗಳು ಮತ್ತು ಯುಜಿಸಿಯಿಂದ ನೀಡುವ ಅನುದಾನಗಳು ರದ್ದಾಗುತ್ತವೆ. ಐಡಿಎಸ್‌ಜಿ ಕಾಲೇಜನ್ನು ಕುವೆಂಪು ವಿಶ್ವವಿದ್ಯಾಲಯದ ಘಟಕ ಕಾಲೇಜನ್ನಾಗಿ ಪರಿವರ್ತಿಸಿದರೆ ತರಗತಿ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವಿದ್ಯಾರ್ಥಿಗಳಾದ ಅಭಿಷೇಕ್, ಪದ್ಮನಾಭ್, ಸಾಗರ್, ಪವನ್, ಸಂದೇಶ್, ಸಂಗೀತ, ಮಾನಸ, ಸೌರಭ್, ಅಶ್ವಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT