ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲಿನ್ಯ ನಿಯಂತ್ರಣ ಮಂಡಳಿಗೆ ಪರಿಣತರನ್ನೇ ನೇಮಿಸಿ

Last Updated 22 ಸೆಪ್ಟೆಂಬರ್ 2017, 20:14 IST
ಅಕ್ಷರ ಗಾತ್ರ

ನವದೆಹಲಿ: ‘ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥ ಮತ್ತು ಸದಸ್ಯರ ಸ್ಥಾನಕ್ಕೆ ವೃತ್ತಿಪರರು ಮತ್ತು ಪರಿಣತರನ್ನೇ ನೇಮಕ ಮಾಡಲು ಅಗತ್ಯವಾದ ಮಾರ್ಗಸೂಚಿಗಳನ್ನು ರಚಿಸಿ’ ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೂ ನಿರ್ದೇಶನ ನೀಡಿದೆ.

‘ಪರಿಣತರ ಸಂಖ್ಯೆ ಅಗಾಧವಾಗಿದ್ದರೂ ಅನರ್ಹ ವ್ಯಕ್ತಿಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಪರಿಣತರಲ್ಲದವರಿಗೆ ಮಾಲಿನ್ಯ ನಿಯಂತ್ರಣದ ಬಗ್ಗೆ ತಿಳಿದಿಲ್ಲ ಎಂಬುದಷ್ಟೇ ಕಳವಳದ ವಿಷಯವಲ್ಲ. ಬದಲಿಗೆ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕೆಲಸ ಮಾಡುವ ಬದ್ಧತೆ ಮತ್ತು ಇಚ್ಛಾಶಕ್ತಿ ಅವರಲ್ಲಿ ಇರುವುದಿಲ್ಲ. ಅಂತಹವರು ಮುಖ್ಯಸ್ಥರಾದಾಗ ಅವರ ಆಪ್ತರು ಆ ಅಧಿಕಾರದ ಲಾಭ ಪಡೆದುಕೊಳ್ಳುತ್ತಾರೆ. ಇದರಿಂದ ಮಾಲಿನ್ಯ ನಿಯಂತ್ರಣದ ಉದ್ದೇಶಕ್ಕೇ ಧಕ್ಕೆಯಾಗುತ್ತದೆ. ಪರಿಸರಕ್ಕೆ ಮಾಡಿದ ಹಾನಿ ಶಾಶ್ವತವಾದುದು ಮತ್ತು ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂಬುದನ್ನು ನೆನಪಿನಲ್ಲಿಡಿ’ ಎಂದು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

‘ಮಂಡಳಿಗಳಿಗೆ ಮುಖ್ಯಸ್ಥರು ಮತ್ತು ಸದಸ್ಯರನ್ನು ನೇಮಕ ಮಾಡಿದ ನಂತರ ಆ ವಿಚಾರವಾಗಿ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಇರಬೇಕು’ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2013ರಲ್ಲಿ ದೇಶದ ಹಲವು ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರ ಸ್ಥಾನಕ್ಕೆ ಪರಿಣತರಲ್ಲದವರನ್ನು ನೇಮಿಸಲಾಗಿದೆ ಎಂದು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ ತನ್ನ ಅಧ್ಯಯನ ವರದಿಯೊಂದರಲ್ಲಿ ಹೇಳಿತ್ತು. ಆ ನೇಮಕಾತಿಗಳಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ ನಾಯಕ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಬೆಂಬಲಿಗ, ಅರುಣಾಚಲ ಪ್ರದೇಶದಲ್ಲಿ ಎನ್‌ಸಿಪಿ ಶಾಸಕ, ಮಣಿಪುರದಲ್ಲಿ ಶಾಸಕ ಮತ್ತು ಮಹಾರಾಷ್ಟ್ರದಲ್ಲಿ ನಿವೃತ್ತ ಅಧಿಕಾರಿಯೊಬ್ಬರನ್ನು ಮಾಲಿನ್ಯ ನಿಯಂತ್ರಣ ಮಂಡಳಿಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು 2016ರಲ್ಲಿ ಅಂತಹ ನೇಮಕಾತಿಗಳನ್ನು ರದ್ದುಪಡಿಸಿತ್ತು. ನ್ಯಾಯಮಂಡಳಿಯ ಈ ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಪೀಠವು ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT