ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ತಲೆಕೆಟ್ಟ ರಾಜಕಾರಣಿ: ಸಚಿವ ರೇವಣ್ಣ ತಿರುಗೇಟು

Last Updated 24 ಸೆಪ್ಟೆಂಬರ್ 2017, 9:01 IST
ಅಕ್ಷರ ಗಾತ್ರ

ಯಾದಗಿರಿ: ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಕಳ್ಳರ ನಡಿಗೆ ಎಂದು ಟೀಕಿಸಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಒಬ್ಬ ತಲೆಕೆಟ್ಟ ರಾಜಕಾರಣಿ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿರುಗೇಟು ನೀಡಿದರು.

ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ರಾಜ್ಯದ ಬೊಕ್ಕಸವನ್ನು ಕೊಳ್ಳೆ ಹೊಡೆದ ಬಿಜೆಪಿ ಇದೀಗ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಜನಪರ ಯೋಜನೆಗಳನ್ನು ಈಶ್ವರಪ್ಪ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಅವರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಜನಮನ್ನಣೆ ಪಡೆದ ನಾಯಕ. ಅವರ ಅಧಿಕಾರಾವಧಿಯಲ್ಲಿ ರಾಜ್ಯ ಅಭಿವೃದ್ಧಿ ಕಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಹಲವು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಕೇವಲ ತಾತ್ಕಾಲಿಕ. ಯಡಿಯೂರಪ್ಪ ವಿರುದ್ಧದ ಪ್ರಕರಣ ಖುಲಾಸೆಯಾಗಿಲ್ಲ ಎಂದರು.

ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ  ಭರವಸೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು. ಯೋಜನೆಗಳನ್ನು ಜನರಿಗೆ ತಿಳಿಸಲು ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಮಾಡಲಾಗುತ್ತಿದೆ. ದೇಶದಲ್ಲಿಯೇ ಅತಿ ಹೆಚ್ಚು ಬಜೆಟ್ ಸಿದ್ದರಾಮಯ್ಯ ನೀಡಿದ್ದಾರೆ ಎಂದು ಹೇಳಿದರು.

ಶಾಕ್ ಟ್ರೀಟ್ಮೆಂಟ್:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬಂದು ಶಾಕ್ ಟ್ರೀಟ್ಮೆಂಟ್ ಕೊಟ್ಟ ಮೇಲೆ ಬಿಜೆಪಿಯವರು ಎಚ್ಚೆತ್ತುಕೊಂಡಿದ್ದಾರೆ. ಅಧಿಕಾರಕ್ಕಾಗಿ ರಾಜಕೀಯ ಪಕ್ಷಗಳು ಏನು ಮಾಡಬೇಕೋ ಅದನ್ನೆ ಬಿಜೆಪಿ ಮಾಡುತ್ತಿದೆ. ಐಟಿ ದಾಳಿ ‘ಆಯ್ಕೆ ದಾಳಿ’ಯಾಗಿದ್ದಕ್ಕೆ ನಮ್ಮ ವಿರೋಧವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT