ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಇಲ್ಲಿಗೆ ಕೈಬಿಡಿ– ಪರಮೇಶ್ವರ

Last Updated 2 ಅಕ್ಟೋಬರ್ 2017, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂದಿನ ಮುಖ್ಯಮಂತ್ರಿ ಯಾರು ಎಂದು ಮತ್ತೆ ಮತ್ತೆ ಪ್ರಶ್ನೆ ಕೇಳಬೇಡಿ, ಈ ವಿಚಾರವನ್ನು ಇಲ್ಲಿಗೆ ಬಿಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು, ಪ್ರಶ್ನೆ ಕೇಳಿದ ಮಾಧ್ಯಮದವರ ವಿರುದ್ಧ ಸಿಡಿಮಿಡಿಗೊಂಡರು.

‘ಮುಂದಿನ ಬಾರಿಯೂ ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರಲ್ಲ’ ಎಂಬ ಪ್ರಶ್ನೆಗೆ, ‘ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ. ಆದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಸಿದ್ದರಾಮಯ್ಯ ಅವರೇ ಮುಂದುವರಿಯಲಿ ಎಂದರೆ ಅದನ್ನೂ ನಾವು ಒಪ್ಪಿಕೊಳ್ಳುತ್ತೇವೆ’ ಎಂದು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ. ಆದರೆ, ಯಾರಾದರೊಬ್ಬರು ಮುಂದಾಳತ್ವ ವಹಿಸಬೇಕು. ಹೀಗಾಗಿ ಸಿದ್ದರಾಮಯ್ಯ ಹೆಸರನ್ನು ಹೈಕಮಾಂಡ್ ಸೂಚಿಸಿದೆ. ನಮ್ಮ ಮಧ್ಯೆ ಯಾವುದೇ ಗೊಂದಲ ಇಲ್ಲ. ಪಕ್ಷದ ಅಧ್ಯಕ್ಷನಾಗಿ ನಾನು ಹೇಳುವುದೇ ಅಧಿಕೃತ. ಬೇರೆ ಯಾರಾದರೂ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತು ಕೊಡಬೇಡಿ’ ಎಂದು ಮನವಿ ಮಾಡಿದರು.

‘ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಎಂದು ಯಡಿಯೂರಪ್ಪ ಹೇಳಿದ್ದಾರಲ್ಲ’ ಎಂಬ ಪ್ರಶ್ನೆಗೆ, ‘ಅವರು ಹೇಳಿದ್ದಕ್ಕೆ ನಾನು ಯಾಕೆ ಪ್ರತಿಕ್ರಿಯೆ ನೀಡಬೇಕು. ಅವರು ಹೇಳಿದರು ಎಂದು ನಮ್ಮ ಬಳಿ, ನಾವು ಹೇಳಿದೆವು ಎಂದು ಅವರ ಬಳಿ ಹೋಗ್ತೀರಾ. ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳಿಗೆ ಮಾತ್ರ ನಾನು ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಹೇಳುತ್ತಾ, ಮಾಧ್ಯಮದವರ ಮೇಲೆ ಪರಮೇಶ್ವರ ಮತ್ತೊಮ್ಮೆ ಗರಂ ಆದರು.

ಮೊದಲು ಕಾಂಗ್ರೆಸ್ ಗೆಲುವು; ನಂತರ ಮುಖ್ಯಮಂತ್ರಿ ವಿಚಾರ

ತುಮಕೂರು: ‘ನಮ್ಮಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತ್ರ ಆಯ್ಕೆ ಮಾಡಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಲು ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ರಾಜಕೀಯ ಕಾರಣಕ್ಕಾಗಿ. ಈ ರೀತಿ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮೊದಲು ಕಾಂಗ್ರೆಸ್ ಬಹುಮತ ಪಡೆಯಲು ಪ್ರಯತ್ನಿಸುತ್ತೇವೆ. ತದನಂತರ ಮುಖ್ಯಮಂತ್ರಿ ಪಟ್ಟದ ವಿಚಾರ. ಆ ಬಗ್ಗೆ ಯಾವುದೇ ಗೊಂದಲ ಪಕ್ಷದಲ್ಲಿ ಇಲ್ಲ ಎಂದರು.

ಸಿದ್ದರಾಮಯ್ಯ ಮುಂದೆಯೂ ಸಿ.ಎಂ

ಕೋಲಾರ: ‘ಕಾಂಗ್ರೆಸ್‌ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ 2018ರ ವಿಧಾನಸಭಾ ಚುನಾವಣೆ ಎದುರಿಸಲಿದೆ. ಮುಂದೆಯೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗುತ್ತಾರೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆಯಾ ರಾಜಕೀಯ ಪಕ್ಷಗಳ ಮುಖಂಡರಿಗೆ ಮುಖ್ಯಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ. ಬೇಡ ಎನ್ನಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಸಹಜ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT