ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಲುವಿಗೆ ಬೇಕಿರುವುದು ಜಾತಿಯಲ್ಲ; ಆತ್ಮಬಲ

Last Updated 11 ನವೆಂಬರ್ 2017, 7:10 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ’ಜಾತಿ ಅಥವಾ ಹಣ ಬಲದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಆತ್ಮ ಬಲದಿಂದ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ’ ಎಂದು ಆರೋಗ್ಯ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು. ತಾಲ್ಲೂಕಿನ ದಿಂಬಾಲ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಂಗ್ರೆಸ್‌ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮತದಾರರ ಮನಸ್ಸು ಗೆಲ್ಲಬೇಕು. ಆಗ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕರ್ತರು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರ ಗಮನಕ್ಕೆ ತರಬೇಕು. ರಾಜ್ಯ ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಅರ್ಹ ಫಲಾನುಭವಿಗಳಿಗೆ 18ಸಾವಿರ ಮನೆ ನಿರ್ಮಿಸಿಕೊಡಲಾಗಿದೆ. 6 ಸಾವಿರ ಮಂದಿಗೆ ವಿವಿಧ ಮಾಸಾಶನ ಮಂಜೂರು ಮಾಡಲಾಗಿದೆ. ಗ್ರಾಮ ವಿಕಾಸ ಯೋಜನೆಯಡಿ ₹ 67 ಲಕ್ಷ ಖರ್ಚು ಮಾಡಲಾಗಿದೆ. ಶುದ್ಧ ಕುಡಿಯುವ ನೀರು ಘಟಕ ಸ್ಥಾಪಿಸಲಾಗಿದೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಸಿಮೆಂಟ್‌ ರಸ್ತೆ ನಿರ್ಮಿಸಲಾಗಿದೆ. ಡಿಸಿಸಿ ಬ್ಯಾಂಕ್‌ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಯಕ್ಷಿ ಗೌಡ ಮಾತನಾಡಿ, ’ಕರ್ನಾಟಕ ಕಾಂಗ್ರೆಸ್‌ನ ಭದ್ರ ಕೋಟೆ. ಬಿಜೆಪಿಯನ್ನು ಮಣಿಸಿ ಅಧಿಕಾರಕ್ಕೆ ಬಂದಿದೆ. ಅನ್ನ ಭಾಗ್ಯ, ಕ್ಷೀರ ಭಾಗ್ಯದಂತಹ ಹಲವು ಯೋಜನೆಗಳ ಮೂಲಕ ಜನಪರವಾಗಿ ಕೆಲಸಮಾಡುತ್ತಿದೆ. ಇದು ಮುಂದುವರಿಯಲು ಮತ್ತೆ ಕಾಂಗ್ರೆಸ್‌ ಅಧಿಕಾಕ್ಕೆ ಬರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು’ ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ನೋಟ್‌ ಬ್ಯಾನ್‌ ಹಾಗೂ ಜಿಎಸ್‌ಟಿ ಜಾರಿಯಿಂದಾಗಿ ದೇಶಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಬಿಜೆಪಿ, ಭಾರತೀಯ ಜೂಟ್‌ ಪಾರ್ಟಿಯಾಗಿದ್ದು, ಸುಳ್ಳು ಹೇಳುವುದರ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ದೂರಿದರು.

ಸಂಸದ ಕೆ.ಎಚ್‌.ಮುನಿಯಪ್ಪ ಮಾತನಾಡಿ, ’ಕೇಂದ್ರ ಸರ್ಕಾರಕ್ಕೆ ರೈತರು, ಬಡವರು ಹಾಗೂ ಸಣ್ಣ ವ್ಯಾಪಾರಿಗಳ ಬಗ್ಗೆ ಕಾಳಜಿ ಇಲ್ಲ. ನೋಟ್‌ ಬ್ಯಾನ್‌ನಿಂದ ಬಡವರು ತೊಂದರೆಗೆ ಒಳಗಾದರು. ಜಿಎಸ್‌ಟಿ ಜಾರಿಯಿಂದ ಸಣ್ಣ ವ್ಯಾಪಾರಿಗಳು ಪರಿತಪಿಸುವಂತಾಗಿದೆ. ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ. ಕಾಂಗ್ರೆಸ್‌ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುಖ್ಯಮಂತ್ರಿ ಚಂದ್ರು, ಕೆಪಿಸಿಸಿ ಕಾರ್ಯದರ್ಶಿ ಕಾರ್ತಿಕ್‌, ಡಿಸಿಸಿ ಅಧ್ಯಕ್ಷ ಚಂದ್ರಾರೆಡ್ಡಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಅಕ್ಬರ್‌ ಷರೀಫ್‌, ಸಂಜಯ್‌ ರೆಡ್ಡಿ, ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌, ಮುಖಂಡರಾದ ವಿ.ವೆಂಕಟ ಮುನಿಯಪ್ಪ, ದಿಂಬಾಲ ನಾರಾಯಣಸ್ವಾಮಿ, ಸುಗಣಾ ಮಾಮಚಂದ್ರ, ಗೋವಿಂದಸ್ವಾಮಿ, ಬಿ.ಎಂ.ಪ್ರಕಾಶ್‌, ವಿ.ಶಂಕರ್‌, ಟಿಎಂವಿ ಮುಕ್ತಿಯಾರ್,ಮಂಜುನಾಥರೆಡ್ಡಿ, ಎನ್‌.ಜಿ.ಬ್ಯಾಟಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT