ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಅಗತ್ಯ

Last Updated 13 ನವೆಂಬರ್ 2017, 6:57 IST
ಅಕ್ಷರ ಗಾತ್ರ

ಅರಸೀಕೆರೆ: ಪ್ರಸ್ತುತ ಕೃಷಿರಂಗ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದೆ. ಸಾವಿರ ರೂಪಾಯಿಗಳ ಸಾಲ ಮಾಡಿದ ರೈತನಿಗೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇವುಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾಗಿದೆ ಎಂದು ದಾವಣಗೆರೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಟಿ.ಎನ್‌.ದೇವರಾಜ್‌ ಹೇಳಿದರು.
ತಾಲ್ಲೂಕಿನ ಮಾಡಾಳು ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಆಯೋಜಿಸಿದ್ದ ಮಾಸಿಕ ಶಿವಾನುಭವ ಸಮಾವೇಶ ಹಾಗೂ ನೀಲಾಂಬಿಕೆ ಜಯಂತಿ ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ಸವಾಲುಗಳು ಮತ್ತು ಅವಕಾಶಗಳು ಕುರಿತು ಉಪನ್ಯಾಸ ನೀಡಿದರು.

ಇಂದು ದೇಶದಲ್ಲಿ ಸಾವಿರಾರು ಕೋಟಿ ಸಾಲ ಮಾಡಿರುವ ಉದ್ಯಮಿಗಳು ನೆಮ್ಮದಿಯಿಂದ ಇದ್ದಾರೆ. ಆದರೆ ಜೀವನ ನಿರ್ವಹಣೆಗಾಗಿ ಕೇವಲ ₹ 10,000 ಸಾಲ ಮಾಡಿದ ರೈತನಿಗೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತ ಸಮುದಾಯ ಬರಗಾಲಕ್ಕೆ ತುತ್ತಾಗಿ ಮಾಡಿದ ಸಾಲ ತೀರಿಸಲಾಗದೇ ಸಂಕಷ್ಟಕ್ಕೆ ಸಿಲುಕಿದೆ. ಉದ್ಯಮಿಗಳು ನಡೆಸುವ ಕಾರ್ಖಾನೆಗಳಲ್ಲಿ ತಯಾರಿಸುವ ವಸ್ತುಗಳಿಗೆ ಬೆಲೆ ನಿಗದಿ ಮಾಡಲಾಗುತ್ತದೆ. ಆದರೆ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡದ ಹೊರತು ಅವರ ನೆರವಿಗೆ ಹತ್ತು ಹಲವು ಯೋಜನೆ ರೂಪಿಸಿದರೂ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌ ಮಾತನಾಡಿ, ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು. ದಾಸೋಹಿಗಳಾಗಲು ಮಕ್ಕಳನ್ನು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಬಾಗೇಶಪುರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಎಂ.ಶಿವಶಂಕರಪ್ಪ ಅವರು ಸಾಮಾಜಿಕ ಪರಿವರ್ತನೆಯಲ್ಲಿ ಮಠಗಳ ಪಾತ್ರ ಕುರಿತು ಉಪನ್ಯಾಸ ನೀಡಿದರು. ಹಾರನಹಳ್ಳಿ ಶಿವಲಿಂಗೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಪಿ. ಸರ್ವಜ್ಞ ಮೂರ್ತಿ ಮಾತನಾಡಿದರು.

ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಅವರು ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು. ಎಂ.ಎಸ್‌.ಪುಟ್ಟಮಲ್ಲಪ್ಪ, ವೈ.ಎಂ.ಚನ್ನಯ್ಯ, ಪ್ರಕಾಶ್‌ ತಿಮ್ಲಾಪುರ, ಗ್ರಾಮದ ಮುಖಂಡರಾದ ಚನ್ನಬಸಪ್ಪ, ಕೊಟ್ರೇಶ್‌, ಗಿರೀಶ್‌,ದಿನೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT