ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ

Last Updated 17 ನವೆಂಬರ್ 2017, 9:32 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಮೋದಿಸಬೇಕು. ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಒತ್ತಾಯಿಸಿ ನಗರದ ಜಿಲ್ಲಾಡಳಿತ ಭವನದ ಎದುರು ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್‌.ಗಂಗಾಧರಪ್ಪ ಮಾತನಾಡಿ, ‘ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕವಾಗಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ 5 ವರ್ಷವಾಗಿದೆ. ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸುವಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಹಾಗೂ ಕಾಂಗ್ರಸ್‌ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಗ ನೀಡಿರುವ ವರದಿಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಶೋಷಿತರಿಗೆ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿ ಸಾಕಾರವಾಗಲು ಸಂವಿಧಾನಬದ್ಧವಾಗಿ ಮೂಲಭೂತ ಹಕ್ಕು ನೀಡಲಾಗಿದೆ. ಆದರೆ ಅದು ಈ ಎಲ್ಲ ಉಪಜಾತಿಗಳ ನಡುವೆ ಇನ್ನೂ ಸರಿಯಾಗಿ ಹಂಚಿಕೆಯಾಗಿಲ್ಲ’ ಎಂದು ದೂರಿದರು.

‘ದಲಿತರ ಆರ್ಥಿಕ ಅಭಿವೃದ್ಧಿಗಾಗಿ ಮೀಸಲಿರುವ ಯೋಜನೆಗಳ ಅನುದಾನವನ್ನು ಹೆಚ್ಚಿಸಿ, ಅದರ ಅನುಷ್ಠಾನದ ಜವಾಬ್ದಾರಿಯನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗೆ ವಹಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಸಂಘಟನಾ ಸಂಚಾಲಕ ವೈ.ಎ.ಕಡ್ಡೀಲ್‌ ವೆಂಕರಮಣ ಮಾತನಾಡಿ, ‘ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಿ ಸಂವಿಧಾನ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಹಿಂದುಳಿದ ವರ್ಗಗಳ ಅಧ್ಯಕ್ಷ ಕಾಂತರಾಜ ಆಯೋಗದ ವರದಿ ಅನುಷ್ಠಾನಗೊಳಿಸಿ ಎಲ್ಲ ಜಾತಿಗಳಿಗೆ ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಬಾಕಿಯಿರುವ ಪಿ.ಟಿ.ಸಿ.ಎಲ್‌ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ದಲಿತರಪರ ಹೋರಾಟಗಾರರ ಮೇಲಿನ ಪ್ರಕರಗಳನ್ನು ವಾಪಾಸ್‌ ಪಡೆಯಬೇಕು. ಭೂ ಮಂಜೂರಾತಿಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲ ದಲಿತ ಕುಟುಂಬಗಳಿಗೂ ಭೂ ಮಂಜುರಾತಿ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್‌.ಅನುರಾಧಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸಮನ್ವಯಕಾರ ಎನ್.ಮುನಿಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕ ಕೆ.ವಿ ವೆಂಕಟೇಶ್‌, ಲಕ್ಷ್ಮೀ ನರಸಿಂಹ ಮುಖಂಡರಾದ ವಿಜಯ್ ನರಸಿಂಹ, ಅರುಣ್ ಕುಮಾರ್, ಬಾಲಕೃಷ್ಣ, ಚಂದ್ರಪ್ಪ ಇದ್ದರು.

ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯ
ಬಾಗೇಪಲ್ಲಿ: ಸದಾಶಿವ ಆಯೋಗ ವರದಿ ಜಾರಿಗೆ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಬಿ.ವಿ.ವೆಂಕಟರವಣ ಒತ್ತಾಯಿಸಿದರು. 'ರಾಜ್ಯದಲ್ಲಿ ಮಾದಿಗರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕವಾಗಿ ಶೋಷಣೆಗೆ ಒಳಗಾಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘2012ರಲ್ಲಿ ಪರಿಶಿಷ್ಠ ಜಾತಿಯಲ್ಲಿರುವ ಮಾದಿಗರ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ಸದಾಶಿವ ಆಯೋಗದ ವರದಿ ಜಾರಿಗೆ ತರಬೇಕು ಎಂದು ಸೂಚಿಸಿದ್ದರೂ ರಾಜ್ಯ ಸರ್ಕಾರ ಕಿಂಚಿತ್ತು ಗಮನಹರಿಸಿಲ್ಲ’ ಎಂದು ಆರೋಪಿಸಿದರು.

‘ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು' ಎಂದು ಆಗ್ರಹಿಸಿದರು. ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ಲಕ್ಷ್ಮಿನರಸಿಂಹಪ್ಪ, ಪೈಪಾಳ್ಯ ರವಿ, ಗೋಪಿ, ಜಯಂತ್, ರಮೇಶ್ ಗೋಷ್ಠಿಯಲ್ಲಿದ್ದರು.

* * 

ಚಿಕ್ಕಬಳ್ಳಾಪುರ: ಪರಿಶಿಷ್ಟರ ಒಳಮೀಸಲಾತಿ ವರ್ಗೀಕರಣಕ್ಕಾಗಿ ನೇಮಕ ಮಾಡಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ನಗರದ ಜಿಲ್ಲಾಡಳಿತದ ಎದುರು ಬುಧವಾರ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT