ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಏರಿಕೆ, ಕಾಯಂ ಉದ್ಯೋಗಕ್ಕೆ ಒತ್ತಾಯ

Last Updated 18 ನವೆಂಬರ್ 2017, 8:33 IST
ಅಕ್ಷರ ಗಾತ್ರ

ಕಲಬುರ್ಗಿ: ‘ಹಲವು ಸಮಸ್ಯೆ, ಸಂಕಷ್ಟಗಳ ನಡುವೆ ಗ್ರಾಮ ಪಂಚಾಯಿತಿ ನೌಕರರು ಕೆಲಸ ಮಾಡುತ್ತಿದ್ದು, ಅವರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.

ನಗರದ ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಸಿಐಟಿಯು ಗ್ರಾಮ ಪಂಚಾಯಿತಿ ನೌಕರರ ಸಂಘದ 7ನೇ ಜಿಲ್ಲಾ ಸಮ್ಮೇಳನದಲ್ಲಿ ನೌಕರರು ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿ ನೌಕರರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಅವರು ಅಹವಾಲುಗಳಿಗೆ ಸ್ಪಂದಿಸಲಾಗುವುದು’ ಎಂದರು.

‘ವೇತನವನ್ನು ₹ 18 ಸಾವಿರಕ್ಕೆ ಏರಿಕೆ ಮಾಡುವುದು, ಉದ್ಯೋಗ ಕಾಯಂಗೊಳಿಸುವುದು, ಬಡ್ತಿ ನೀಡುವುದು, ಬಾಕಿ ವೇತನ ಪಾವತಿ, ಸಿಬ್ಬಂದಿ ಅನುಮೋದನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ನೌಕರರು ಮಂಡಿಸಿದ್ದಾರೆ. ಕೆಲ ಬೇಡಿಕೆಗಳನ್ನು ಸ್ಥಳೀಯ ಮಟ್ಟದಲ್ಲಿ ಈಡೇರಿಸಬಹುದು. ಕೆಲ ಬೇಡಿಕೆಗಳು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು’ ಎಂದು ತಿಳಿಸಿದರು.

‘ಸರ್ಕಾರದ ಮಾರ್ಗಸೂಚಿ, ಯೋಜನೆಗಳು ಮತ್ತು ಅನುದಾನ ಬಳಸಿಕೊಂಡು ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ಥಿತಿಗತಿ, ಅಭಿವೃದ್ಧಿ, ಅನುದಾನ ಬಳಕೆ, ಆಡಳಿತ ವೈಖರಿ ಮುಂತಾದವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಭರವಸೆ ನೀಡಿದರು.

‘ಕೆಲ ಗ್ರಾಮ ಪಂಚಾಯಿತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಗಮನಕ್ಕೆ ಬಂದಿದೆ. ಅನುದಾನ ದುರ್ಬಳಕೆ, ಸದಸ್ಯರು ಮತ್ತು ನೌಕರರ ನಡುವೆ ವೈಮನಸ್ಸು, ಗ್ರಾಮಸಭೆಗಳು ನಡೆಯದಿರುವುದು, ಕರ ವಸೂಲಿ ಆಗದಿರುವ ಬಗ್ಗೆ ದೂರುಗಳಿವೆ. ಈ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಬೇಕಿದೆ’ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ‘ಹಕ್ಕು ಮತ್ತು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಂಘಟನಾತ್ಮಕವಾಗಿ ಹೋರಾಟ ನಡೆಸುವುದು ಅಗತ್ಯ. ಸರ್ಕಾರದ ಮೇಲೆ ಒತ್ತಡ ಹೇರಿದಾಗ ಮಾತ್ರ ಬೇಡಿಕೆ ಈಡೇರಿಸಿಕೊಳ್ಳಲು ಸಾಧ್ಯ’ ಎಂದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾ ಘಂಟಿ ಮಾತನಾಡಿ, ‘ಮೂರು–ನಾಲ್ಕು ವರ್ಷಗಳಿಂದ ಸಮರ್ಪಕವಾಗಿ ವೇತನ ಸಿಗದೆ, ಸರ್ಕಾರದ ಸೌಕರ್ಯ ಲಭ್ಯವಾಗದೆ ಗ್ರಾಮ ಪಂಚಾಯಿತಿ ನೌಕರರ ಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರವು ಗ್ರಾಮ ಪಂಚಾಯಿತಿ ನೌಕರರತ್ತ ನಿರ್ಲಕ್ಷ್ಯ ತೋರುವ ಬದಲು ಬೇಡಿಕೆ ಈಡೇರಿಸಲು ಮುಂದಾಗಬೇಕು’ ಎಂದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ‘ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಬೇಕು. ಬೇಡಿಕೆ ಈಡೇರುವವರೆಗೆ ಹೋರಾಟ ಕೈ ಬಿಡುವುದಿಲ್ಲ ಎಂಬುದನ್ನು ಸರ್ಕಾರಕ್ಕೆ ಮನಗಾಣಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದರು.

ಸಂಘದ ರಾಜ್ಯ ಘಟಕದ ಸಹ ಕಾರ್ಯದರ್ಶಿ ಶಿವಾನಂದ ಕವಲಗಾ, ಮುಖಂಡರಾದ ಉಮಾಶಂಕರ ಕಡಣಿ, ಬಾಬುರಾವ ಧುರತ್ತರಗಾಂವ, ಗೌರಮ್ಮ ಪಾಟೀಲ ಉಪಸ್ಥಿತರಿದ್ದರು.

* * 

ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಬೇಕಿದೆ
ಮಾರುತಿ ಮಾನ್ಪಡೆ,
ಅಧ್ಯಕ್ಷ, ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT