ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಮಾಲಿ ಕಾರ್ಮಿಕರಿಗಿಲ್ಲ ಸರ್ಕಾರಿ ಯೋಜನೆ

Last Updated 25 ನವೆಂಬರ್ 2017, 9:37 IST
ಅಕ್ಷರ ಗಾತ್ರ

ವಿಜಯಪುರ: ಸ್ವಾವಲಂಬಿ ದೇಶ ನಿರ್ಮಾಣದತ್ತ ಎಲ್ಲರೂ ಸಂತಸದಿಂದ ಮುನ್ನಡೆಯುತ್ತಿದ್ದರೆ, ಕೆಲವರು ಬಡತನದ ದಾಸ್ಯದಿಂದ ಹೊರಬರಲಾಗದೇ ಬದುಕನ್ನು ಸವೆಸುವಂತಾಗಿದೆ ಎಂದು ಕಾರ್ಮಿಕರು ಆಳಲು ತೋಡಿಕೊಂಡರು.

ಸರ್ಕಾರಿ ಸೌಲಭ್ಯಗಳು ವಿಪುಲವಾಗಿದ್ದರೂ, ಅವುಗಳ ನೆರವಿಲ್ಲದೇ -ಸರ್ಕಾರದ ಆಶ್ರಯವಿಲ್ಲದೇ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಕಷ್ಟನಷ್ಟಗಳ ನಡುವೆಯೂ ಪುಟ್ಟ ಆಶಾಕಿರಣದೊಂದಿಗೆ ಜೀವನ ಸಾಗಿಸುತ್ತಿರುವ ಆ ಕೆಲವರಲ್ಲಿ ವಿಜಯಪುರದದ ರೇಷ್ಮೆ ಗೂಡು ಮಾರುಕಟ್ಟೆಯ ಕೂಲಿ ಕಾರ್ಮಿಕರು ಕೂಡ ಸೇರಿದ್ದಾರೆ.

ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ನಿತ್ಯವೂ ಲಕ್ಷಾಂತರ ರೂಪಾಯಿಯ ವಹಿವಾಟು ನಡೆಯುತ್ತದೆ. ಆದರೆ ಕಾರ್ಮಿಕರ ಕೂಲಿಯು ದಿನಕ್ಕೆ ₹ 150ರ ಗಡಿ ದಾಟುವುದಿಲ್ಲ. ಪಾದಗಳಿಗೆ ಚಪ್ಪಲಿಯೂ ಹಾಕಿಕೊಳ್ಳದೇ ಕೆಲಸ ಮಾಡುವ ಈ ಶ್ರಮಿಕರು ತಲೆಯ ಮೇಲೆ 30 ರಿಂದ 50 ಕೆ.ಜಿಯಷ್ಟು ತೂಕದ ರೇಷ್ಮೆ ಗೂಡಿನ ಮೂಟೆಯನ್ನು ಹೊರುತ್ತಾರೆ. ಸೈಕಲ್‌ನಲ್ಲೇ ಸಾಗುವ ಅವರು ತಲೆಯ ಮೇಲೆ ಮೂಟೆಯ ಸಮತೋಲನ ಕಾಯ್ದುಕೊಳ್ಳುವುದರ ಜೊತೆಗೆ ಅಪಘಾತಕ್ಕೀಡಾಗದಂತೆ ಎಚ್ಚರಿಕೆ  ವಹಿಸಬೇಕು.

ಅಸಂಘಟಿತ ವಲಯದಲ್ಲಿರುವ ಈ ಕಾರ್ಮಿಕರಿಗೆ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳಿಲ್ಲ. ಚುನಾಯಿತ ಪ್ರತಿನಿಧಿಗಳು ನೀಡುವ ಭರವಸೆಗಳ ಹೊರತಾಗಿ ಅವರಿಗೆ ಏನೂ ಸಿಕ್ಕಿಲ್ಲ. ಅನಾರೋಗ್ಯ ಸೇರಿದಂತೆ ಯಾವುದೇ ಗಂಭೀರ ಸಮಸ್ಯೆ ಕಾಡಿದರೂ ಅವರು ದಿನದ ₹150ಯಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕೇ ಹೊರತು ಬೇರೆ ಮಾರ್ಗವಿಲ್ಲ.

‘ನಾವು 100 ಕ್ಕೂ ಹೆಚ್ಚು ಮಂದಿ ಕಾರ್ಮಿಕರಿದ್ದೇವೆ. ನಿತ್ಯವೂ 30 ರಿಂದ 50 ಕೆಜಿ ತೂಕದವರೆಗೂ ಗೂಡನ್ನು ಹೊರುತ್ತೇವೆ. ಮಾರುಕಟ್ಟೆಯಲ್ಲಿ ಗೂಡು ಬರುವುದರ ಮೇಲೆ ನಮ್ಮ ಸಂಪಾದನೆ ಅವಲಂಬಿತವಾಗಿರುತ್ತದೆ. ದಿನಕ್ಕೆ ₹150 ಸಂಪಾದಿಸುತ್ತೇವೆ. ಆದರೆ ಸೈಕಲ್ ಬಾಡಿಗೆ, ಬಸ್ ಪ್ರಯಾಣ, ಹೋಟೆಲ್ ಊಟ ಎಲ್ಲ ಕಳೆದು ₹75 ರಿಂದ 100 ಉಳಿಯುತ್ತದೆ. ಅಲ್ಪ ಸಂಪಾದನೆಯಲ್ಲೇ ಸಂಸಾರ ನಡೆಸಬೇಕು, ಮಕ್ಕಳನ್ನು ಓದಿಸಬೇಕು, ಆಹಾರದ ಕೊರತೆ ಕಾಡದಂತೆ ನೋಡಿಕೊಳ್ಳಬೇಕು’ ಎಂದು ಹಮಾಲಿ ಕಾರ್ಮಿಕರು ಹೇಳುತ್ತಾರೆ.

‘ಸಂಸಾರದ ನಿತ್ಯ ಜಂಜಾಟವನ್ನು ಹೇಗಾದರೂ ತೂಗಿಸಬಹುದು. ಆದರೆ ಅಪಘಾತ ಅಥವಾ ಅನಾರೋಗ್ಯ ಕಾಡಿದಲ್ಲಿ ಔಷಧಿ ಕೊಳ್ಳಲು ಮತ್ತು ಆಸ್ಪತ್ರೆಗೆ ದಾಖಲಾಗಲು ಹಣವಿರುವುದಿಲ್ಲ. ಸರ್ಕಾರದ ಯಾವುದೇ ಯೋಜನೆಗೆ ಒಳಪಡದ ನಮಗೆ ಯಾವುದೇ ಸೌಕರ್ಯಗಳು ಸಿಗುವುದಿಲ್ಲ. ಬದುಕಲು ಸಾಲ ಮಾಡಬೇಕಾಗುತ್ತದೆ. ಆದರೆ ಸಾಲ ತೀರಿಸುವುದರಲ್ಲೇ ನಮ್ಮ ಬದುಕು ಕೊನೆಯಾಗುತ್ತದೆ’ ಎಂದು ಹಮಾಲಿ ಕಾರ್ಮಿಕ ಮುನಿರಾಜು ಅವರು ಅಳಲು ತೋಡಿಕೊಂಡರು.

ಜಾಗೃತಿ ಮೂಡಿಸುವಂತಹ ಕಾರ್ಯ
ದೇಹವನ್ನು ದಂಡಿಸಿ ಕೆಲಸ ಮಾಡುವ ಈ ಕಾರ್ಮಿಕರು ಬೇಗನೇ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ದೀರ್ಘ ಕಾಲದವರೆಗೆ ಬದುಕಲು ಆಗುವುದಿಲ್ಲ. ಪಿಂಚಣಿ, ಆರೋಗ್ಯ ವಿಮೆ, ವಿದ್ಯಾರ್ಥಿ ವೇತನ, ಭವಿಷ್ಯ ನಿಧಿ ಮುಂತಾದ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಹೋರಾಟದ ಮನೋಭಾವವನ್ನೇ ಕಳೆದುಕೊಂಡ ಸ್ಥಿತಿಯಲ್ಲಿರುವ ಈ ಕಾರ್ಮಿಕರು ನಿರಾಸೆಯಿಂದಲೇ ಜೀವನ ಸಾಗಿಸುತ್ತಿದ್ದಾರೆ.

ಬಹುತೇಕ ಕಾರ್ಮಿಕರಿಗೆ ಓದು-ಬರಹ ಗೊತ್ತಿಲ್ಲ. ಸರ್ಕಾರದಿಂದ ಸೌಲಭ್ಯಗಳಿವೆ. ಸದ್ಭಳಕೆ ಮಾಡಿಕೊಳ್ಳಬೇಕು ಎಂಬ ಪರಿವೆ ಅವರಿಗಿಲ್ಲ, ಇತ್ತಿಚೆಗೆ ಅವರಿಗೆ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ರೇಷ್ಮೆ ಗೂಡು ಮಾರುಕಟ್ಟೆಯ ಉಪನಿರ್ದೇಶಕ ಎಂ.ಎಸ್.ಬೈರಾರೆಡ್ಡಿ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT